ಬೆಂಗಳೂರು: ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಒಟ್ಟು 45 ಘಟಕಗಳನ್ನು ತಪಾಸಣೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿರುವ 24 ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ತಪಾಸಣೆ ವೇಳೆ ಹಲವು ಘಟಕಗಳಲ್ಲಿ ಗಂಭೀರ ಲೋಪಗಳು ಕಂಡುಬಂದಿವೆ. ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿಲ್ಲದಿರುವುದು, ನೀರಿನ ಬಾಟಲಿಗಳ ಲೇಬಲ್ನಲ್ಲಿ ಅಗತ್ಯ ಮಾಹಿತಿಯ ಕೊರತೆ ಹಾಗೂ ಕೀಟ ನಿಯಂತ್ರಣ ಪ್ರಮಾಣಪತ್ರ ಇಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಇನ್ನು ಕಾರ್ಯಾಚರಣೆ ವೇಳೆ ಒಟ್ಟು 32 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಸ್ವಚ್ಛತೆ ಕಾಪಾಡದ ಒಂದು ನೀರಿನ ಘಟಕವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಮೈಸೂರು ಮತ್ತು ದಾವಣಗೆರೆಯಲ್ಲಿ ತಪ್ಪು ಲೇಬಲ್ ಹೊಂದಿದ್ದ ನೀರಿನ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಒಂದು ಘಟಕವನ್ನು ಸೀಜ್ ಮಾಡಲಾಗಿದ್ದು, ಉಳಿದ ಘಟಕಗಳಿಗೆ ನಿಯಮಾನುಸಾರ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ನೋಟಿಸ್ ನೀಡಲಾಗಿದೆ. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಇಲಾಖೆ ಈ ಕ್ರಮ ಕೈಗೊಂಡಿದೆ.










