ರಾಮನಗರ:- ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.
ಹಳೆಯ ದ್ವೇಷದ ಹಿನ್ನೆಲೆ ಈ ಕೃತ್ಯ ಎಸಗಲಾಗಿದೆ. 45 ವರ್ಷದ ನಂಜೇಶ್ ಮೃತ ಕಾಂಗ್ರೆಸ್ ಮುಖಂಡ. ಇವರು ಕನಕಪುರ ತಾಲೂಕಿನ ಅಚ್ಚಲು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾಗಿದ್ದರು.
ಮೃತ ನಂಜೇಶ್ ನಾಲ್ಕು ದಿನಗಳ ಹಿಂದೆ ಸಾತನೂರು ಗ್ರಾಮದಲ್ಲಿ ಸೈಟ್ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು. ಈ ಹಿನ್ನೆಲೆ ಶ್ರೀನಿವಾಸ್ ಎಂಬಾತ ವೈಯಕ್ತಿಕ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಕೂಡಲೇ ಗಾಯಳುವನ್ನು ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.