ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆದು, 2024 ಮತ್ತು 2025ನೇ ಸಾಲಿನಲ್ಲಿ ಕೋರ್ಸ್ ಪೂರ್ಣಗೊಳಿಸಿದ ನಂತರ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯ ಸೇವೆಗೆ ನಿಯೋಜನೆಗೊಂಡ ವೈದ್ಯರ ಮಾಸಿಕ ವೇತನವನ್ನು ಕಡಿತಗೊಳಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಲಬುರಗಿ ನಿವಾಸಿ ಡಾ. ಶಶಿಕುಮಾರ್ ಸೇರಿದಂತೆ, ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ 38 ಮಂದಿ ಎಂಬಿಬಿಎಸ್ ಪದವಿಧರರು ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ಗುರುವಾರ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ನ್ಯಾಯಪೀಠದ ಮುಂದೆ ನಡೆಯಿತು. ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ,
ನಾಲ್ಕು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಇತರೆ ಅರ್ಜಿಗಳನ್ನೂ ಈ ಅರ್ಜಿಯೊಂದಿಗೆ ಸೇರಿಸಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸೂಚಿಸಿ, ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.



