ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಜ್ ಕುಮಾರ್ ಅವರಿಗೆ ಇಂದು ಅಮೆರಿಕದಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದೆ.
ಈ ಕುರಿತು ಅಪ್ಪನ ಆರೋಗ್ಯದ ಬಗ್ಗೆ ಕಿರಿಯ ಪುತ್ರಿ ನಿವೇದಿತಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ.
ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ. ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ. ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ, ಧನ್ಯವಾದಗಳು ಎಂದು ನಿವೇದಿತಾ ಶಿವರಾಜಕುಮಾರ್ ಹೇಳಿದ್ದಾರೆ.



