Muda Case: ನನ್ನ ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಲಿ: ಸಿಎಂ ಸಿದ್ದರಾಮಯ್ಯ!

0
Spread the love

ಬೆಂಗಳೂರು:- ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ ವಿಚಾರಣೆ ರದ್ದಾಗಿದೆ.

Advertisement

ಈ ವಿಚಾರವಾಗಿ X ಮಾಡಿರುವ ಸಿದ್ದರಾಮಯ್ಯ, ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ.

ಸುಪ್ರೀಂಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾದ ಗವಾಯಿ ಅವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here