ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ನಿಟ್ಟಿನಲ್ಲಿ ಪೂರ್ವಸಿದ್ಧತೆಗಳು ನಡೆಯುತ್ತಿವೆ. ಜೊತೆಗೆ 24×7 ಸೇವೆ ಸಲ್ಲಿಸುವ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಆರೋಗ್ಯ ಸುರಕ್ಷತಾ ಅಧಿಕಾರಿಗಳಿಗೆ ಕೆಎಎಂಎಸ್ (KAAMS) ಆನ್‌ಲೈನ್ ಹಾಜರಾತಿ ವ್ಯವಸ್ಥೆಯಿಂದ ವಿನಾಯಿತಿ ನೀಡುವ ಕುರಿತು ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಹೇಳಿದರು.
ನಗರದ ರಾಯಲ್ ವಿಲ್ಲಾ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ, ಬೆಂಗಳೂರು ಹಾಗೂ ಗದಗ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿದ್ದ ಆರೋಗ್ಯ ಇಲಾಖೆ ನೌಕರರ ಕಾರ್ಯಕ್ಷಮತೆ ವಿಚಾರ ಸಂಕಿರಣ ಮತ್ತು ಪದೋನ್ನತಿ ಪಡೆದ ಅಧಿಕಾರಿಗಳು ಹಾಗೂ ನೌಕರರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ ಸಿಬ್ಬಂದಿ ಜೀವದ ಹಂಗು ತೊರೆದು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚಿಸಲು ಕಾಲಕಾಲಕ್ಕೆ ತರಬೇತಿ ನೀಡುವುದು ಅಗತ್ಯವಾಗಿದೆ. ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರ ಹಾಗೂ ಹಿತರಕ್ಷಣೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ಸದಾ ಬದ್ಧವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದಪ್ಪ ಎನ್. ಲಿಂಗದಾಳ ಮಾತನಾಡಿ, ಆರೋಗ್ಯ ಸೇವೆಯನ್ನು ದೇವರ ಸೇವೆಯೆಂದು ಭಾವಿಸಿ ಬಡವರು-ಶ್ರೀಮಂತರು ಎಂಬ ಭೇದವಿಲ್ಲದೆ ಸೇವೆ ಸಲ್ಲಿಸಬೇಕು. ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಪ್ರತಿಯೊಬ್ಬರಿಗೂ ಹೆಮ್ಮೆಯ ಸಂಗತಿ ಎಂದರು.
ಗದಗ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಗಡಾದ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರಿಗೆ ಕರುಣೆ, ಅಕ್ಕರೆ ಮತ್ತು ಆತ್ಮೀಯತೆಯಿಂದ ಆರೋಗ್ಯ ಸೇವೆ ನೀಡುವುದು ಆರೋಗ್ಯ ಸಿಬ್ಬಂದಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾದ ಡಾ. ಆರ್.ಸಿ. ಬಸರಿಗಿಡದ ಹಾಗೂ ಡಾ. ಜಿ.ಎಸ್. ಪಲ್ಲೇದ ಮಾತನಾಡಿ, ಪದೋನ್ನತಿ, ವರ್ಗಾವಣೆ ಹಾಗೂ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿರುವ ಸಂಘದ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಎಫ್. ಕಲಕಂಬಿ ವಹಿಸಿದ್ದರು. ಆಹಾರ ಸುರಕ್ಷತಾ ಅಧಿಕಾರಿ ವಿವೇಕ ತಿರುಮಲ್ಲೆ, ಅಜಯಕುಮಾರ ಕಲಾಲ, ಸರೋಜಾ ಕಟ್ಟಿಮನಿ, ವೈ.ಎನ್. ಕಡೇಮನಿ, ಬಿ.ಸಿ. ಹಿರೇಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಜಿ.ಎಸ್. ಪಲ್ಲೇದ, ನಿವೃತ್ತ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಆರ್.ಸಿ. ಬಸರಿಗಿಡದ, ಜೆ.ಡಿ. ಯರಗುಡಿ ಸೇರಿದಂತೆ ಪದೋನ್ನತಿ, ವರ್ಗಾವಣೆ ಹಾಗೂ ನಿವೃತ್ತಿ ಹೊಂದಿದ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಕೆ.ವಿ. ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಮುತ್ತಪ್ಪ ಹಟ್ಟಿಮನಿ ಸ್ವಾಗತಿಸಿದರು. ಎಸ್.ಬಿ. ಗಡಾದ ವಂದಿಸಿದರು.
“ರಾಜ್ಯ ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿಗೆ ಪೂರ್ವಸಿದ್ಧತೆ ನಡೆದಿದೆ. ಆರೋಗ್ಯ ಸಿಬ್ಬಂದಿಗೆ ಕೆಎಎಂಎಸ್ ಹಾಜರಾತಿ ವ್ಯವಸ್ಥೆಯಿಂದ ವಿನಾಯಿತಿ ನೀಡುವ ಕುರಿತು ರಾಜ್ಯ ಮಟ್ಟದಲ್ಲಿ ಚರ್ಚಿಸುತ್ತೇನೆ.”
– ಡಾ. ಬಸವರಾಜ ಬಳ್ಳಾರಿ, ರಾಜ್ಯ ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ



