ದಾಸಶ್ರೇಷ್ಠ ಕನಕದಾಸರ ಜಯಂತಿ ಅದ್ದೂರಿ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಸಾಕ್ಷಿ ಸುದ್ದಿ, ಗದಗ: ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಗದಗ ಜಿಲ್ಲಾಡಳಿತ ಸಜ್ಜಾಗಿದೆ. ಈ ಕುರಿತು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿ.ಪಂ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯ ಆರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿ, ಕನಕದಾಸರ ಜಯಂತಿ ಕಾರ್ಯಕ್ರಮದ ಯಶಸ್ವಿ ನಿರ್ವಹಣೆ ಕುರಿತಾಗಿ ಸಲಹೆ–ಅಭಿಪ್ರಾಯ ನೀಡುವಂತೆ ವಿನಂತಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಮಾತನಾಡಿ, ನವೆಂಬರ್ 8ರಂದು ರಾಜ್ಯ ಸರ್ಕಾರದ ವತಿಯಿಂದ ಜಿಲ್ಲೆಯಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಗುವುದು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ಸಡಗರದಿಂದ ಆಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನವೆಂಬರ್ 8ರಂದು ಬೆಳಿಗ್ಗೆ 9 ಗಂಟೆಗೆ ಹಾತಲಗೇರಿ ನಾಕಾದಲ್ಲಿರುವ ಕನಕದಾಸರ ವೃತ್ತದಲ್ಲಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಕಾರ್ಯಕ್ರಮದ ಅಂಗವಾಗಿ ಹೋರ್ಡಿಂಗ್ಸ್, ಬ್ಯಾನರ್, ಆಮಂತ್ರಣ ಪತ್ರಿಕೆ ಮತ್ತು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು.
ಕಾರ್ಯಕ್ರಮದ ನಿಮಿತ್ತ ನ.6ರಂದು ಕನಕದಾಸರ ವೃತ್ತದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರ, ಶಾಮಿಯಾನ ಮತ್ತು ಧ್ವನಿವರ್ಧಕ ವ್ಯವಸ್ಥೆ ಮಾಡುವಂತೆ ನಗರಸಭೆ ಆಯುಕ್ತರಿಗೆ ನಿರ್ದೇಶನ ನೀಡಿದರು.
ಜಯಂತಿ ದಿನದಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ಪುಷ್ಪಾರ್ಚನೆ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸಭಾಧ್ಯಕ್ಷರು ಹೇಳಿದರು.
ಸಭೆಯಲ್ಲಿ ಕನಕದಾಸರ ಕುರಿತು ಉಪನ್ಯಾಸಕರನ್ನು ಆಯ್ಕೆ ಮಾಡುವದು, ಶಿಷ್ಟಾಚಾರದ ಪ್ರಕಾರ ಆಮಂತ್ರಣ ತಯಾರಿಸಿ ಅತಿಥಿಗಳನ್ನು ಆಹ್ವಾನಿಸುವದು ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಉಪಸ್ಥಿತರಿರುವರು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.



