ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮಕ್ಕೆಜೋಳ ಉತ್ಪಾದನೆಯಾಗಿದೆ. ಆದರೆ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ರೈತರಿಗೆ ಆರ್ಥಿಕ ಸಬಲತೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಪ್ರಾರಂಭ ಮಾಡಿರುವದು ಶ್ಲಾಘನೀಯ ಕಾರ್ಯ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ ಎನ್. ದೊಡ್ಡಮನಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಒಂದು ಕ್ವಿಂಟಲ್ ಮೆಕ್ಕೆಜೋಳಕ್ಕೆ 2400 ರೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ವಿವಿಧ ಭಾಗಗಳಲ್ಲಿ ರೈತರು ಮಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ನಮ್ಮ ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ. ಮಾರುಕಟ್ಟೆಯಲ್ಲಿ ದರ ಕುಸಿತವಾಗಿರುವ ಕಾರಣ, ಈ ಖರೀದಿ ಕೇಂದ್ರಗಳು ರೈತರಿಗೆ ದೊಡ್ಡ ಮಟ್ಟದ ಆರ್ಥಿಕ ಸಹಾಯವನ್ನು ಒದಗಿಸುತ್ತವೆ.
ರೈತ ಸಮುದಾಯದ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆಗೆ ತಕ್ಷಣ ಅಗತ್ಯ ಕ್ರಮ ತೆಗೆದುಕೊಂಡ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ತೋಟಗಾರಿಕೆ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಸಂಪುಟದ ಸಚಿವರಿಗೆ ಸುಜಾತಾ ದೊಡ್ಡಮನಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.



