ವಿಜಯಸಾಕ್ಷಿ ಸುದ್ದಿ, ಗದಗ: ಕುವೆಂಪು ಅವರು ಹೇಳಿದಂತೆ ಗದಗ ಸರ್ವ ಜನಾಂಗದ ಶಾಂತಿಯ ತೋಟ ಎಂಬುದಕ್ಕೆ ಸಾಕ್ಷಿಯಾಗಿದ್ದು ಕಲೆ ಎಂಬುದನ್ನು ಗದಗ ಜನರಿಂದ ತಿಳಿದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ ಭೀಷ್ಮಕೆರೆ ಆವರಣದಲ್ಲಿ ಸೋಮವಾರ ಸಾಯಂಕಾಲ ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿನ ಭೀಷ್ಮ ಕೆರೆ ಪ್ರವಾಸಿ ತಾಣವಾಗಿದ್ದು, ಕಪ್ಪತಗುಡ್ಡದಲ್ಲಿ ಸಫಾರಿ ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಪರಿಸರದ ಅರಿವು ಮೂಡಿಸುವ ಉದ್ದೇಶದೊಂದಿಗೆ ಒಮ್ಮೆಯಾದರೂ ಭೇಟಿ ನೀಡಲು ತಿಳಿಸಿದ ಸಚಿವರು, ಲಕ್ಕುಂಡಿಯಲ್ಲಿ ಸದ್ಯ ಚಿನ್ನ ದೊರೆಯುತ್ತಿದ್ದು, ಚಿನ್ನಕ್ಕಿಂತ ಹೆಚ್ಚಿನ ಬೆಲೆಯ ಅಲ್ಲಿನ ಶಿಲ್ಪಕಲೆಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ. ಇಂದು ಚಿತ್ರಕಲಾ ಶಿಕ್ಷಕರ ಸಂಘದಿಂದ ಆಯೋಜಿಸಲಾದ ಚಿತ್ರಕಲಾ ಪ್ರದರ್ಶನ ಮನಸೂರೆಗೊಂಡಿದ್ದು, ಚಿತ್ರಕಲೆಯನ್ನು ಅಭಿವ್ಯಕ್ತಪಡಿಸಿದ ಚಿತ್ರಕಲಾ ಶಿಕ್ಷಕರ ಸಂಘಕ್ಕೆ 1.5 ಲಕ್ಷ ರೂ.ಗಳ ಅನುದಾನವನ್ನು ಪ್ರೋತ್ಸಾಹ ಧನವನ್ನಾಗಿ ಒದಗಿಸಲು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸರ್ವರನ್ನೂ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಜಾನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಬಾಕ್ಸ್
ಜಿಲ್ಲೆಯಲ್ಲಿ ಅನೇಕ ಕಲಾವಿದರಿದ್ದು, ಅದನ್ನು ಅಭಿವ್ಯಕ್ತಪಡಿಸುವ ಉದ್ದೇಶದೊಂದಿಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಕಲಾವಿದರು ಇದರ ಸದುಪಯೋಗ ಪಡೆದುಕೊಂಡು ಗದಗ ಜಿಲ್ಲೆಯ ಹೆಸರನ್ನು ನಾಡಿನಾದ್ಯಂತ ಪಸರಿಸಬೇಕೆಂದು ಎಚ್.ಕೆ. ಪಾಟೀಲ ಕರೆ ನೀಡಿದರು.

