Home Blog Page 116

‘ಇದು ಯಾರಪ್ಪನ ಜಾಗ ಅಲ್ಲ’: ನೆಪೋಟಿಸಂ ಪ್ರಶ್ನೆಗೆ ಸುದೀಪ್ ಆಕ್ರೋಶ

ಬೆಂಗಳೂರು: ‘ಮ್ಯಾಂಗೋ ಪಚ್ಚ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ನಟ ಸಂಚಿತ್ ಸಂಜೀವ್ ಹಾಗೂ ನಟ ಕಿಚ್ಚ ಸುದೀಪ್ ಅವರಿಗೆ ನೆಪೋಟಿಸಂ ಕುರಿತು ಕೇಳಿದ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಚಿತ್ರದಲ್ಲಿ ನಾಯಕನಾಗಿ ನಟಿಸಿರುವ ಸಂಚಿತ್ ಸಂಜೀವ್, ಮೊದಲ ಸಿನಿಮಾದ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ತನ್ನ ಕೆಲಸವೇ ಜನರಿಗೆ ಉತ್ತರ ನೀಡುತ್ತಿದೆ ಎಂದು ಹೇಳಿದರು.

ಆದರೆ ಮಾಧ್ಯಮಗಳಿಂದ ನೆಪೋಟಿಸಂ ಪ್ರಶ್ನೆ ಕೇಳುತ್ತಿದ್ದಂತೆಯೇ ಕಿಚ್ಚ ಸುದೀಪ್ ಗರಂ ಆಗಿ ಪ್ರತಿಕ್ರಿಯಿಸಿದರು. “ಈ ಪ್ರಶ್ನೆಯನ್ನು ಎಲ್ಲರಿಗೂ ಸಮಾನವಾಗಿ ಕೇಳಬೇಕು. ಬಾಲಿವುಡ್‌ನ ಪ್ರಶ್ನೆಯನ್ನು ಇಲ್ಲಿ ತರಬೇಡಿ” ಎಂದು ಹೇಳಿದರು.

ಕನ್ನಡ ಚಿತ್ರರಂಗದಲ್ಲಿ ಕುಟುಂಬ ಹಿನ್ನೆಲೆಗಿಂತ ಪ್ರತಿಭೆಗೆ ಹೆಚ್ಚಿನ ಮಹತ್ವ ಇದೆ ಎಂದು ಸುದೀಪ್ ಸ್ಪಷ್ಟಪಡಿಸಿದರು. “ಇಲ್ಲಿ ಕಲೆ ಇದ್ದರೆ ಮಾತ್ರ ಬೆಳೆಯಬಹುದು” ಎಂದು ಅವರು ಹೇಳಿದರು.

ತಮ್ಮ ಕುಟುಂಬದ ಉದಾಹರಣೆ ನೀಡಿದ ಅವರು, ತಮ್ಮ ಮಗಳು, ಅಕ್ಕನ ಮಕ್ಕಳು ಎಲ್ಲರೂ ತಮ್ಮ ಇಷ್ಟದಂತೆ ಬಂದಿದ್ದಾರೆ, ಆದರೆ ಎಲ್ಲರೂ ಸಿನಿಮಾ ರಂಗಕ್ಕೆ ಬಂದಿಲ್ಲ ಎಂದು ವಿವರಿಸಿದರು.

ಕೊನೆಯಲ್ಲಿ, ಕನ್ನಡ ಚಿತ್ರರಂಗದಲ್ಲಿ ನೆಪೋಟಿಸಂ ಎಂಬ ಚರ್ಚೆಗೆ ಜಾಗವಿಲ್ಲ ಎಂದು ಹೇಳಿದ ಸುದೀಪ್, ಈ ವಿಚಾರವನ್ನು ಇಲ್ಲಿ ಎಳೆದು ತರುವುದು ಸರಿಯಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ತಿರುಚ್ಚಿ ಈಸ್ಟ್ ಉಪಚುನಾವಣೆಗೆ ರಾಘವ್ ಲಾರೆನ್ಸ್ ಎಂಟ್ರಿ?: ವಿಜಯ್ ಪಕ್ಷದಿಂದ ಸ್ಪರ್ಧೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ವಿಷಯವೆಂದರೆ ತಿರುಚ್ಚಿ ಈಸ್ಟ್ ಕ್ಷೇತ್ರದ ಉಪಚುನಾವಣೆ. ಮುಖ್ಯಮಂತ್ರಿ ವಿಜಯ್ ಅವರು ರಾಜೀನಾಮೆ ನೀಡಿದ್ದ ಈ ಕ್ಷೇತ್ರದಿಂದ ಇದೀಗ ಖ್ಯಾತ ನಟ, ನಿರ್ದೇಶಕ ಹಾಗೂ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಜೋರಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಚರ್ಚೆ ಗರಿಗೆದರುವಂತಾಗಿದೆ. ವಿಜಯ್ ಅವರ ಪಕ್ಷವಾದ ಟಿವಿಕೆ ಪರವಾಗಿ ಲಾರೆನ್ಸ್ ಅಭ್ಯರ್ಥಿಯಾಗಬಹುದು ಎಂಬ ಮಾತುಗಳು ಅವರ ಅಭಿಮಾನಿಗಳ ಮಧ್ಯೆ ವೇಗವಾಗಿ ಹರಿದಾಡುತ್ತಿವೆ.

ಚಿತ್ರರಂಗದಲ್ಲಿ ಹೆಸರು ಮಾಡಿದ ರಾಘವ್ ಲಾರೆನ್ಸ್, ದೀರ್ಘಕಾಲದಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ಅನಾಥ ಮಕ್ಕಳು, ವಿಕಲಚೇತನರು ಮತ್ತು ವೃದ್ಧರ ನೆರವಿಗಾಗಿ ಅವರು ನಡೆಸುತ್ತಿರುವ ಕಾರ್ಯಗಳು ಸಾರ್ವಜನಿಕ ಮೆಚ್ಚುಗೆ ಪಡೆದಿವೆ. ಇದೇ ಕಾರಣಕ್ಕೆ ರಾಜಕೀಯ ಪ್ರವೇಶ ಮಾಡಿದರೆ ಅವರಿಗೆ ಜನಬೆಂಬಲ ದೊರೆಯಬಹುದು ಎಂಬ ಅಂದಾಜು ವ್ಯಕ್ತವಾಗುತ್ತಿದೆ.

ಆದರೆ ಈ ಕುರಿತು ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ. ತಿರುಚ್ಚಿ ಈಸ್ಟ್ ಉಪಚುನಾವಣೆ ದಿನಾಂಕವೂ ಇನ್ನೂ ಪ್ರಕಟವಾಗಿಲ್ಲ. ಹೀಗಾಗಿ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಸಮಯವಿದೆ ಎಂದು ಮೂಲಗಳು ತಿಳಿಸಿವೆ.

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್; ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಪಕ್ಷದ ನಾಯಕತ್ವ ಯಶಸ್ವಿಯಾಗಿದ್ದು, ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರು ಸಚಿವ ಸಂಪುಟದಲ್ಲೇ ಮುಂದುವರಿದು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದಿದ್ದಾರೆ. ಅವರು ನಮ್ಮ ಸಚಿವ ಸಂಪುಟದ ಭಾಗವಾಗಿಯೇ ಮುಂದುವರಿಯಲಿದ್ದಾರೆ. ಈ ವಿಚಾರದಲ್ಲಿ ಹೆಚ್ಚಿನ ಪ್ರಶ್ನೆಗಳಿಗೆ ಇಂದು ಉತ್ತರಿಸುವುದಿಲ್ಲ ಎಂದು ಹೇಳಿದರು.

ಬಿಜೆಪಿ ಈ ಬೆಳವಣಿಗೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದು, ಅನಗತ್ಯ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದ ಅವರು, ರಾಮಲಿಂಗಾರೆಡ್ಡಿ ಅವರು ಪಕ್ಷದೊಂದಿಗೆ ದೀರ್ಘಕಾಲದ ಬಾಂಧವ್ಯ ಹೊಂದಿದ್ದಾರೆ ಎಂದು ತಿಳಿಸಿದರು. ವಿದ್ಯಾರ್ಥಿ ರಾಜಕೀಯದ ದಿನಗಳಿಂದಲೇ ಅವರು ಕಾಂಗ್ರೆಸ್‌ನೊಂದಿಗೆ ಇದ್ದು, ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವಿ ನಾಯಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವಿಷಯವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ತಾವು ಸೇರಿ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದೇವೆ. ಅದರಂತೆ ಅವರು ಪಕ್ಷ ಮತ್ತು ಸರ್ಕಾರದೊಂದಿಗೆ ಮುಂದುವರಿಯಲು ಒಪ್ಪಿಕೊಂಡಿದ್ದಾರೆ ಎಂದು ಸುರ್ಜೇವಾಲ ವಿವರಿಸಿದರು.

ಬಿಜೆಪಿ ಈ ಬೆಳವಣಿಗೆಯನ್ನು ಆಧರಿಸಿ ಸಂಭ್ರಮ ಆಚರಿಸಲು ಮುಂದಾಗಿತ್ತು. ಆದರೆ ಈಗ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದ್ದು, ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಸರ್ಕಾರದ ಸಚಿವರಾಗಿ ತಮ್ಮ ಕೆಲಸವನ್ನು ಮುಂದುವರಿಸಲಿದ್ದಾರೆ ಎಂದು ಹೇಳಿದರು.

ಶಾರ್ಟ್ ಸರ್ಕ್ಯೂಟ್‌ಗೆ ಖಾಸಗಿ ಬಸ್ ಭಸ್ಮ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಶಿವಮೊಗ್ಗ: ಶಿವಮೊಗ್ಗ-ಉಡುಪಿ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಆತಂಕ ಸೃಷ್ಟಿಸಿದೆ. ಬಸ್‌ನಲ್ಲಿದ್ದ 17 ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿರುವುದರಿಂದ ಸಂಭವನೀಯ ಭಾರಿ ದುರಂತ ತಪ್ಪಿದೆ.

ಮಾಸ್ತಿಕಟ್ಟೆ ಸಮೀಪ ಸಂಚರಿಸುತ್ತಿದ್ದ ವೇಳೆ ಬಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಚಾಲಕ ಮತ್ತು ನಿರ್ವಾಹಕ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಪ್ರಯಾಣಿಕರು ಇಳಿದ ಕೆಲವೇ ಹೊತ್ತಿನಲ್ಲಿ ಬೆಂಕಿ ಇಡೀ ಬಸ್ ಅನ್ನು ಆವರಿಸಿದ್ದು, ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಘಟನೆಯ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಹುಲಿಕಲ್ ಘಾಟ್ ರಸ್ತೆಯ ಸಮಸ್ಯೆಯಿಂದ ಸಂಪರ್ಕ ಸಾರಿಗೆ ಸೇವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಈ ಬಸ್ ಉಡುಪಿನತ್ತ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಘಟನೆ ಕುರಿತು ನಗರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಹುಲಿಕಲ್ ಘಾಟ್ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವೂ ಉಂಟಾಯಿತು.

ಬಿಡದಿ ಬಳಿ ಸರಣಿ ಅಪಘಾತ; ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಜಖಂ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ ಅಪಘಾತದಲ್ಲಿ ಕೆ.ಆರ್. ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಅಪಘಾತದ ವೇಳೆ ಕಾರಿನಲ್ಲಿ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಹಾಗೂ ಚಾಲಕ ಮಾತ್ರ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ವಾಹನಕ್ಕೆ ಹಾನಿಯಾಗಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸರಣಿ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಮತ್ತೆ ಆಕ್ಟಿವ್ ಆದ ಸುಮಲತಾ: ರಾಜ್ಯಸಭೆ ಟಿಕೆಟ್‌ಗೆ ಬಿಜೆಪಿ ಬಾಗಿಲು ತಟ್ಟಿದ ಬೆಂಬಲಿಗರು

0

ಮಂಡ್ಯ: ಮಂಡ್ಯ ರಾಜಕೀಯದಲ್ಲಿ ಮತ್ತೆ ಸುಮಲತಾ ಅಂಬರೀಶ್ ಹೆಸರು ಸದ್ದು ಮಾಡತೊಡಗಿದೆ. ಕಳೆದ ಕೆಲವು ವರ್ಷಗಳಿಂದ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಅವರು, ಇದೀಗ ರಾಜ್ಯಸಭೆ ಪ್ರವೇಶದ ಗುರಿಯೊಂದಿಗೆ ಬಿಜೆಪಿ ನಾಯಕತ್ವದ ಮೇಲೆ ಒತ್ತಡ ಹೆಚ್ಚಿಸುವ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಹಿತದೃಷ್ಟಿಯಿಂದ ಮಂಡ್ಯ ಕ್ಷೇತ್ರವನ್ನು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದ ಸುಮಲತಾ, ಅದಕ್ಕೆ ಪ್ರತಿಯಾಗಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ಸಿಕ್ಕಿತ್ತು ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಆದರೆ ಚುನಾವಣೆ ಬಳಿಕ ಪಕ್ಷದಿಂದ ನಿರೀಕ್ಷಿತ ಗೌರವ ಸಿಕ್ಕಿಲ್ಲ ಎಂಬ ಅಸಮಾಧಾನ ಅವರ ಆಪ್ತ ವಲಯದಲ್ಲಿ ಕಾಡುತ್ತಿದೆ. ಇದೇ ಕಾರಣಕ್ಕೆ ರಾಜ್ಯಸಭೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಡ ಹೇರುವ ಕೆಲಸ ಆರಂಭವಾಗಿದೆ.

ಸುಮಲತಾ ಬೆಂಬಲಿಗರು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ರಾಜ್ಯಸಭೆ ಸ್ಥಾನಕ್ಕೆ ಅವರ ಹೆಸರನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಕೀಯವಾಗಿ ಮತ್ತೆ ತಮ್ಮ ಅಸ್ತಿತ್ವವನ್ನು ಬಲಪಡಿಸಿಕೊಳ್ಳಲು ಮುಂದಾಗಿರುವ ಸುಮಲತಾ, ಬೆಂಬಲಿಗರ ಮೂಲಕ ಶಕ್ತಿ ಪ್ರದರ್ಶನ ನಡೆಸುತ್ತಿದ್ದಾರೆ. ರಾಜ್ಯಸಭೆ ಟಿಕೆಟ್ ವಿಚಾರದಲ್ಲಿ ಬಿಜೆಪಿ ನಾಯಕತ್ವ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ರಾಮಲಿಂಗಾ ರೆಡ್ಡಿ ಬೆಂಗಳೂರು ನಗರದ ರಾಜಕೀಯದಲ್ಲಿ ಪ್ರಮುಖ ಶಕ್ತಿ: ಬಿಕೆ ಹರಿಪ್ರಸಾದ್

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಿರ್ಧಾರ ಶೀಘ್ರವೇ ಹಿಂಪಡೆಯುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಅವರು ಬೆಂಗಳೂರು ನಗರದ ರಾಜಕೀಯದಲ್ಲಿ ಪ್ರಮುಖ ಶಕ್ತಿಯಾಗಿದ್ದು, ಅಜಾತಶತ್ರು ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಉದ್ಭವಿಸಿರುವುದು ಯಾವುದೇ ಗಂಭೀರ ಬಿಕ್ಕಟ್ಟಲ್ಲ, ಕೇವಲ ಸಂವಹನದ ಕೊರತೆಯಿಂದ ಉಂಟಾದ ಗೊಂದಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ತಾವು ಈ ವಿಚಾರವಾಗಿ ಈಗಾಗಲೇ ಚರ್ಚೆ ನಡೆಸಿದ್ದೇವೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಅಂಗೀಕಾರವಾಗುವುದಿಲ್ಲ. ಅವರು ರಾಜೀನಾಮೆಯನ್ನು ವಾಪಸ್ ಪಡೆಯುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ವಚನಭ್ರಷ್ಟತೆ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಕೆಲವೊಮ್ಮೆ ಇಂತಹ ಬೆಳವಣಿಗೆಗಳು ನಡೆಯುತ್ತವೆ. ಆದರೆ ಎಲ್ಲ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಹಿಡಿಯಲಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಕೆ ಹರಿಪ್ರಸಾದ್, ಕಾಂಗ್ರೆಸ್ ಪಕ್ಷ ಇದಕ್ಕಾಗಿ ಪೂರ್ವಸಿದ್ಧತೆ ಮಾಡಿಕೊಂಡಿದ್ದು, ನಮ್ಮ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಗೆ ತಮಿಳುನಾಡಿನಲ್ಲಿ ಮತ್ತೆರಡು ವಿಕೆಟ್ ಪತನ: ಅಣ್ಣಾಮಲೈ ಬೆನ್ನಲ್ಲೇ ಪ್ರಮುಖ ನಾಯಕರು ರಾಜೀನಾಮೆ

ಚೆನ್ನೈ: ತಮಿಳುನಾಡು ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪಕ್ಷ ತೊರೆದ ಬೆನ್ನಲ್ಲೇ ಮತ್ತಿಬ್ಬರು ಪ್ರಮುಖ ನಾಯಕರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಹಾಗೂ ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಗಳಿಂದ ಕೆಳಗಿಳಿದಿದ್ದಾರೆ.

ರಾಜೀನಾಮೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸುಮತಿ ವೆಂಕಟೇಶ್, ಭಾರವಾದ ಹೃದಯದಿಂದ ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದರ ಜೊತೆಗೆ ಪಕ್ಷದೊಂದಿಗಿನ ತಮ್ಮ ಸಂಬಂಧವನ್ನು ಅಂತ್ಯಗೊಳಿಸುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿಯ ರಾಷ್ಟ್ರಭಕ್ತಿ, ರಾಷ್ಟ್ರೀಯತೆ ಮತ್ತು ರಾಷ್ಟ್ರಸೇವೆಯ ಆದರ್ಶಗಳಿಂದ ಸದಾ ಪ್ರೇರಿತರಾಗಿದ್ದೇನೆ ಎಂದು ಹೇಳಿದ್ದಾರೆ. ಇದೇ ಮೌಲ್ಯಗಳು ತಮ್ಮ ರಾಜಕೀಯ ಪಯಣಕ್ಕೆ ಮಾರ್ಗದರ್ಶಕವಾಗಿದ್ದು, ಮುಂದೆಯೂ ಅವುಗಳನ್ನು ಪಾಲಿಸುತ್ತೇನೆ ಎಂದು ಅವರು ಉಲ್ಲೇಖಿಸಿದ್ದಾರೆ.

ರಾಜೀನಾಮೆ ನಿರ್ಧಾರವನ್ನು ಸಾಕಷ್ಟು ಚಿಂತನೆಯ ಬಳಿಕ ಕೈಗೊಂಡಿರುವುದಾಗಿ ತಿಳಿಸಿರುವ ಸುಮತಿ ವೆಂಕಟೇಶ್, ಪಕ್ಷದಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಬೆಂಬಲ, ಮಾರ್ಗದರ್ಶನ ಮತ್ತು ಸಹಕಾರ ನೀಡಿದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಪಕ್ಷದ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಅಣ್ಣಾಮಲೈ ಅವರ ನಿರ್ಗಮನದ ಕುರಿತು ಪ್ರತಿಕ್ರಿಯಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್, ಯಾವುದೇ ಒಬ್ಬ ವ್ಯಕ್ತಿಯ ನಿರ್ಗಮನದಿಂದ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ ಎಂದು ಹೇಳಿದ್ದರು. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿ ತನ್ನ ಸಿದ್ಧಾಂತಗಳಲ್ಲಿ ದೃಢವಾಗಿ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದರು.

ಭಾರತ ಕ್ರಿಕೆಟ್ ತಂಡ ಪ್ರಕಟ; ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್, ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಸ್ಥಾನ

ಮುಂಬೈ: ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗಳು ಮತ್ತು ಸೆಪ್ಟೆಂಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ. ಮೂರು ಪ್ರಮುಖ ಟೂರ್ನಿಗಳಿಗೆ ಆಯ್ಕೆಯಾದ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದ್ದು, ಕೆಲವು ಹಿರಿಯ ಆಟಗಾರರು ತಂಡದಿಂದ ಹೊರಗುಳಿದಿದ್ದಾರೆ.

ಜೂನ್ 26ರಿಂದ ಆರಂಭವಾಗಲಿರುವ ಐರ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಜುಲೈ 1ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ತಿಲಕ್ ವರ್ಮಾ ಉಪನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಈ ಬಾರಿ ಟಿ20 ವಿಶ್ವಕಪ್ ವಿಜೇತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ನೀಡದಿರುವುದು ಗಮನ ಸೆಳೆದಿದೆ. ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಸಮಿತಿ ಕೈಬಿಟ್ಟಿದೆ ಎನ್ನಲಾಗಿದೆ.

ಇನ್ನು ಐಪಿಎಲ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಆರೆಂಜ್ ಕ್ಯಾಪ್ ಗೆದ್ದ ವೈಭವ್ ಸೂರ್ಯವಂಶಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೊತೆಗೆ ವರುಣ್ ಚಕ್ರವರ್ತಿ, ಅಭಿಷೇಕ್ ಶರ್ಮಾ, ಮೊಹಮ್ಮದ್ ಸಿರಾಜ್ ಸೇರಿದಂತೆ ಹಲವು ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ.

ವಿಕೆಟ್‌ಕೀಪರ್‌ಗಳಾಗಿ ಸಂಜು ಸ್ಯಾಮ್ಸನ್ ಮತ್ತು ಈಶನ್ ಕಿಶನ್ ಆಯ್ಕೆಯಾಗಿದ್ದಾರೆ. ಏಷ್ಯನ್ ಗೇಮ್ಸ್ ತಂಡದಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಸ್ಥಾನ ಪಡೆದಿದ್ದಾರೆ.

ಟಿ20 ಸರಣಿಗೆ ಭಾರತ ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಈಶನ್ ಕಿಶನ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್ ಹಾಗೂ ವೈಭವ್ ಸೂರ್ಯವಂಶಿ.

ಏಷ್ಯನ್ ಗೇಮ್ಸ್‌ಗೆ ಭಾರತ ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಈಶನ್ ಕಿಶನ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ ಹಾಗೂ ವೈಭವ್ ಸೂರ್ಯವಂಶಿ.

ಕೆನಾಲ್ ಬಿಲ್ ಪಾವತಿಗೆ ₹18 ಸಾವಿರ ಲಂಚ: KBJNL ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ

ವಿಜಯಪುರ: ಕೆನಾಲ್ ಕಾಮಗಾರಿಯ ಬಿಲ್ ಪಾವತಿಸಲು ಗುತ್ತಿಗೆದಾರರಿಂದ ಲಂಚದ ಬೇಡಿಕೆ ಇಟ್ಟಿದ್ದ ಕೆಬಿಜೆಎನ್‌ಎಲ್‌ನ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಾಲೋಟಗಿ ಗ್ರಾಮದಲ್ಲಿ ನಡೆದಿದೆ.

ಬಂಧಿತರು ಕೆಬಿಜೆಎನ್‌ಎಲ್ ಉಪ ವಿಭಾಗ ನಂ.1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ ಹಾಗೂ ಕಿರಿಯ ಅಭಿಯಂತರ ಸಾತಲಿಂಗಪ್ಪ ರೋಡಗಿ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಗುತ್ತಿಗೆದಾರ ನಾನಾಸಾಹೇಬ್ ರೂಡಗಿ ಅವರು ಕೈಗೊಂಡಿದ್ದ ಕಾಲುವೆ ಕಾಮಗಾರಿಗೆ ಸಂಬಂಧಿಸಿದ ₹3,71,419 ಮೊತ್ತದ ಬಿಲ್ ಪಾವತಿಗಾಗಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ ₹10 ಸಾವಿರ ಹಾಗೂ ಕಿರಿಯ ಅಭಿಯಂತರ ಸಾತಲಿಂಗಪ್ಪ ರೋಡಗಿ ₹8 ಸಾವಿರ ಲಂಚ ನೀಡುವಂತೆ ಒತ್ತಾಯಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಲಂಚದ ಬೇಡಿಕೆಯಿಂದ ಬೇಸತ್ತ ಗುತ್ತಿಗೆದಾರ ನಾನಾಸಾಹೇಬ್ ರೂಡಗಿ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೂಕ್ಷ್ಮ ಕಾರ್ಯಾಚರಣೆ ರೂಪಿಸಿ, ಸಾಲೋಟಗಿಯಲ್ಲಿ ದಾಳಿ ನಡೆಸಿದರು. ಈ ವೇಳೆ ಲಂಚದ ಹಣ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಯಿತು.

ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಬಳಿಕ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಘಟನೆ ವಿಜಯಪುರ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಬಿಲ್ ಪಾವತಿಗೂ ಲಂಚದ ಹಾವಳಿ ಮುಂದುವರಿದಿರುವುದು ಮತ್ತೆ ಬಹಿರಂಗವಾದಂತಾಗಿದೆ. ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.