ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಒಂದೊಂದೇ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.
ಇತ್ತೀಚೆಗೆ ಮಂಗಳೂರು ಸಿಸಿಬಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಈ ಕಾರ್ಯಾಚರಣೆ ಬೆನ್ನಲ್ಲೇ ಇದೀಗ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸಜಂಕಾಡಿ ಬಳಿ ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸುಮಾರು 106 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ ಸುಮಾರು 53 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪ್ರಕರಣ ಸಂಬಂಧ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ನಿವಾಸಿಗಳಾದ ಅಬ್ದುಲ್ ಸಾದಿಕ್ (37) ಮತ್ತು ರಫೀಕ್ ಪಿ. (37) ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದಕ್ಕೂ ಮೊದಲು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳ ಮೂಲದ ಜೂಡ್ ಮಾಥ್ಯೂ (20) ಎಂಬ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿದ್ದರು. ಎರ್ನಾಕುಲಂ ಜಿಲ್ಲೆಯ ನಿವಾಸಿಯಾಗಿರುವ ಆತ ಬೈಕ್‌ನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ವೇಳೆ ಪದವು ಗ್ರಾಮದ ಕೈಲಾಸ ಕಾಲೋನಿ ಬಳಿ ದಾಳಿ ನಡೆಸಿ ಬೈಕ್ ಹಾಗೂ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಸೀಜ್ ಮಾಡಲಾದ ವಸ್ತುಗಳ ಮೌಲ್ಯ ಸುಮಾರು 70 ಸಾವಿರ ರೂ. ಎಂದು ತಿಳಿದುಬಂದಿದೆ.
ಇದಲ್ಲದೆ, ಇತ್ತೀಚೆಗೆ ಜಿಲ್ಲೆಯ ಆರು ಪೆಡ್ಲರ್‌ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆ ಜಲಿಯಾ ಝಲ್ವಾಂಗೋ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ಜಿಗಣಿ ಬಳಿ ಬಂಧಿಸಿದ್ದರು. ಆಕೆಯ ಬಳಿ 4 ಕೋಟಿ ರೂ. ಮೌಲ್ಯದ MDMA ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ರಾಜ್ಯಾದ್ಯಂತ ಗಮನ ಸೆಳೆದಿತ್ತು.

