Home Blog Page 158

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಪೂಜಾರ್ ಲೋಕಪ್ಪ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, ಮದ್ಯದ ದಾಸ್ಯದಿಂದ ಕುಟುಂಬಗಳನ್ನು ರಕ್ಷಿಸುವಂತೆ ಕರ್ನಾಟಕ ಮಾದಿಗ ಮಹಾಸಭೆ ತಾಲೂಕು ಘಟಕದ ಅಧ್ಯಕ್ಷ ಪೂಜಾರ್ ಲೋಕಪ್ಪ ಆಗ್ರಹಿಸಿದರು.

ಪಟ್ಟಣದ ಸಮೀಪದ ಚಿಂತ್ರಪಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಯುವಕರು, ಮಹಿಳೆಯರು ಹಾಗೂ ವೃದ್ಧರು ಮದ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಹಾಗೂ ಸಾಮಾಜಿಕ ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಹೇಳಿದರು.

ಪರಿಶಿಷ್ಟ ಜಾತಿಯ, ವಿಶೇಷವಾಗಿ ಮಾದಿಗ ಸಮುದಾಯದ ಜನರನ್ನು ಅಕ್ರಮ ಮದ್ಯ ಮಾರಾಟದ ಜಾಲದಲ್ಲಿ ಸಿಲುಕಿಸಿ ಪೊಲೀಸ್ ಹಾಗೂ ನ್ಯಾಯಾಲಯದ ಪ್ರಕರಣಗಳಿಗೆ ಗುರಿಪಡಿಸಲಾಗುತ್ತಿದೆ ಎಂದು ಆರೋಪಿಸಿದರು.

ತಾಲೂಕು ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಪ್ರವರ್ಗ–1ರ ಮಾದಿಗ ಸಮುದಾಯದ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಎಫಿಡವಿಟ್ ಕಡ್ಡಾಯಗೊಳಿಸಿರುವುದು ಹಾಗೂ ನಕಲಿ ಜಾತಿ ಪ್ರಮಾಣಪತ್ರಗಳ ವಿರುದ್ಧ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಅನರ್ಹರು ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಕರೆ ನೀಡಿದರು.

ಕರ್ನಾಟಕ ಮಾದಿಗ ಮಹಾಸಭೆಯ ಜಿಲ್ಲಾ ಸಂಚಾಲಕ ಮಾದೂರು ಮಹೇಶ್ವರ ಮಾತನಾಡಿ, ಮಾದಿಗ ಸಮುದಾಯದ ಕಾಲೊನಿಗಳಿಗೆ ಮೂಲಸೌಕರ್ಯ ಒದಗಿಸುವುದು ಹಾಗೂ ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಪರಿಶಿಷ್ಟ ಜಾತಿ ಕಾಲೊನಿಗಳ ಅಭಿವೃದ್ಧಿಗೇ ಬಳಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಹಿರಿಯ ಸದಸ್ಯ ಹಾಗೂ ನಿವೃತ್ತ ಶಿಕ್ಷಕ ಕಡಲೆಬಾಳ್ ಮಾಯಪ್ಪ ಮಾತನಾಡಿ, ತಾಲೂಕು ಕೇಂದ್ರದಲ್ಲಿ ಡಾ. ಬಾಬು ಜಗಜೀವನರಾಂ ಅವರ ವೃತ್ತ ನಿರ್ಮಾಣದ ಬೇಡಿಕೆಯನ್ನು ಶಾಸಕರ ಗಮನಕ್ಕೆ ತರಲಾಗುವುದು ಎಂದರು.

ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದುರುಗಪ್ಪ ಹಾಗೂ ಹೆಚ್. ಪ್ರಕಾಶ್ ಬೆಣ್ಣಿಕಲ್ಲು ಮಾತನಾಡಿ, ಶೀಘ್ರದಲ್ಲೇ ಕರ್ನಾಟಕ ಮಾದಿಗ ಮಹಾಸಭೆ ತಾಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಂಘದ ಖಜಾಂಚಿ ಎ. ಮಹೇಶ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಹರಿಜನ, ಕಾರ್ಯಕಾರಿ ಸಮಿತಿ ಸದಸ್ಯರಾದ ಅರ್ಜುನ್, ಹೆಚ್. ದೊಡ್ಡಬಸಪ್ಪ ದಶಮಾಪುರ, ಮಂಜುನಾಥ ಬ್ಯಾಲಾಳು, ಬಡಗಟ್ಟಿ ಬುಳ್ಳಪ್ಪ, ಹುಲಗತ್ತಿ ಚಿಲುಗೋಡು ಬಸವರಾಜ್, ಪೂಜಾರ್ ಅಂಜಿನಪ್ಪ, ಮೋರಿಗೇರಿ ಗುಳ್ಳಪ್ಪ, ಪೂಜಾರ್ ಮಲ್ಲಪ್ಪ, ಪೂಜಾರ್ ಹನುಮಂತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ತಾಲೂಕಿನ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, ಮದ್ಯದ ದಾಸ್ಯದಿಂದ ಕುಟುಂಬಗಳನ್ನು ರಕ್ಷಿಸಬೇಕು.”

– ಪೂಜಾರ್ ಲೋಕಪ್ಪ, ಅಧ್ಯಕ್ಷ, ಕರ್ನಾಟಕ ಮಾದಿಗ ಮಹಾಸಭೆ ತಾಲೂಕು ಘಟಕ

ಜಮ್ಮು-ಕಾಶ್ಮೀರದಲ್ಲಿ ಮಳೆ ಅಬ್ಬರ: ಪ್ರವಾಹ, ಭೂಕುಸಿತಕ್ಕೆ 23 ಮಂದಿ ಬಲಿ!

0

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈವರೆಗೆ 23 ಮಂದಿ ಮೃತಪಟ್ಟಿದ್ದಾರೆ.

ಭಾರೀ ಮಳೆ ಹಾಗೂ ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪೂಂಚ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿ ನಾಲ್ವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ರಗ್ಗಿ ನಲ್ಲಾ ಬಳಿ ಗುಡ್ಡ ಕುಸಿದ ಪರಿಣಾಮ ಹಲವು ವಾಹನಗಳು ಸಿಲುಕಿಕೊಂಡಿವೆ. ಮತ್ತೊಂದು ಘಟನೆಯಲ್ಲಿ ಬಸ್ ಮೇಲೆ ಬೃಹತ್ ಬಂಡೆ ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಇದೇ ವೇಳೆ ದಕ್ಷಿಣ ಸಿಕ್ಕಿಂನ ಸಮರ್ದುಂಗ್ ಬಳಿ ಇರುವ ಜಲವಿದ್ಯುತ್ ಯೋಜನೆಯ ಸುರಂಗ ಮಾರ್ಗದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಸುರಂಗದೊಳಗೆ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 10 ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ 17 ಮಂದಿ ಸುರಂಗದೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ನಾಮ್ಚಿ ಜಿಲ್ಲೆಯ ತೀಸ್ತಾ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಸಿಕ್ಕಿಂ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.

ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ: ಯಡೂರು–ಕಲ್ಲೋಳ ಸಂಪರ್ಕ ಸೇತುವೆ ಜಲಾವೃತ!

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು–ಕಲ್ಲೋಳ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪ್ರಸ್ತುತ ನದಿಯಲ್ಲಿ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯಡೂರು–ಕಲ್ಲೋಳ ಸಂಪರ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಎರಡು ಗ್ರಾಮಗಳ ನಡುವಿನ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಅವಲಂಬಿಸುವಂತಾಗಿದೆ.

ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಗಮನಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳೀಯರು ನದಿ ಹಾಗೂ ಜಲಾವೃತ ಪ್ರದೇಶಗಳ ಬಳಿ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಶಿವಾಜಿನಗರದಲ್ಲಿ GBA ಅಧಿಕಾರಿಗಳ ವಿರುದ್ದ ಹಲ್ಲೆ ಪ್ರಕರಣ: 10 ಆರೋಪಿಗಳ ಬಂಧನ

ಬೆಂಗಳೂರು: ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಿರಣ್ (34), ಬಸವರಾಜ್ (28), ರಂಜಿತ್ (19), ರಂಗಸ್ವಾಮಿ (49), ಮುಜಾಹಿದಾ ಅಹಮದ್ (39), ಕೊಟ್ರೇಶ್ (26), ಪರಶುರಾಮ್ (27), ರಘು (28), ಪಾರ್ಥೀಬನ್ (23) ಹಾಗೂ ಭರತ್ (24) ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗೆ ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳು ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸ್ಥಳೀಯ ಸಂಘಟನೆಗಳ ಕೆಲ ಸದಸ್ಯರು ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು.

ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪಿಗಳು, ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪವೂ ಕೇಳಿಬಂದಿದೆ. ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಮಾತ್ರವಲ್ಲದೆ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಬಳಸಿರುವುದಾಗಿ ಆರೋಪಿಸಿ ಜಿಬಿಎ ಅಧಿಕಾರಿಗಳು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ 10 ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದಲ್ಲಿ ನ್ಯಾಯಾಲಯದ ಆದೇಶದಂತೆ ಜಿಬಿಎ ಅಧಿಕಾರಿಗಳ ನೇತೃತ್ವದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಈ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪದಡಿ ಬಂಧನ ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಹಲ್ಲೆಯ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೂ ತನಿಖೆ ಮುಂದುವರಿದಿದೆ. ಆರೋಪಿಗಳ ಹಿನ್ನೆಲೆ ಮತ್ತು ಘಟನೆಯಲ್ಲಿ ಇತರರ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ: ಬಿ.ವೈ. ವಿಜಯೇಂದ್ರ ಆರೋಪ

ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಸಭೆ ನಡೆಸಿರುವುದನ್ನು ಬಿಟ್ಟರೆ ಯಾವುದೇ ಸಚಿವರು ಅಥವಾ ಅಧಿಕಾರಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುತ್ತಿಲ್ಲ ಎಂದು ಟೀಕಿಸಿದರು.

ಶಿವಮೊಗ್ಗದ ವಿನೋಬನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿರುವುದನ್ನು ಉಲ್ಲೇಖಿಸಿದ ಅವರು, ಪ್ರಧಾನಮಂತ್ರಿಗೆ ಪತ್ರ ಬರೆಯುವುದನ್ನು ಬಿಟ್ಟರೆ ಸರ್ಕಾರದಿಂದ ಯಾವುದೇ ಪರಿಣಾಮಕಾರಿ ಕ್ರಮ ಕಾಣುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ರೈತರು ಬಿತ್ತನೆ ಮಾಡಿದರೂ ಮಳೆಯ ಕೊರತೆಯಿಂದ ಬೆಳೆಗಳು ಮೊಳಕೆಯೊಡೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರನ್ನು ನೇರವಾಗಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿ ಅಗತ್ಯ ನೆರವು ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ನೆರೆ ಪರಿಸ್ಥಿತಿ ಉಂಟಾದಾಗ ಜನರ ನಡುವೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕ್ರಮ ಕೈಗೊಂಡಿದ್ದರು ಎಂದು ವಿಜಯೇಂದ್ರ ನೆನಪಿಸಿದರು.

ಈ ವೇಳೆ ಬಿಜೆಪಿ ಸಂಘಟನಾ ಕಾರ್ಯಕ್ರಮಗಳ ಕುರಿತು ಮಾತನಾಡಿದ ಅವರು, ರಾಜ್ಯಾದ್ಯಂತ ‘ಮಹಾ ಸಂಪರ್ಕ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಮನೆ ಮನೆಗೆ ಭೇಟಿ ನೀಡಿ ಜನರೊಂದಿಗೆ ಸಂಪರ್ಕ ಸಾಧಿಸಲಿದ್ದು, ಪ್ರತಿ ಕಾರ್ಯಕರ್ತ ಕನಿಷ್ಠ 20 ಮನೆಗಳಿಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ದೇವಸ್ಥಾನದ ಹೆಸರಿನಲ್ಲಿ ಕರೆದೊಯ್ದು ಕಾಮುಕರಿಗೆ ಒಪ್ಪಿಸಿದ ಮಹಿಳೆ: ಅಪ್ರಾಪ್ತೆಗೆ ಮದ್ಯ ಕುಡಿಸಿ ಅತ್ಯಾಚಾರ, ಮೂವರು ಪೊಲೀಸ್ ಬಲೆಗೆ

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ, ಇಬ್ಬರು ಕಾಮುಕರ ಕೈಗೆ ಒಪ್ಪಿಸಿ ಮದ್ಯಪಾನ ಮಾಡಿಸಿ ಅತ್ಯಾಚಾರ ಎಸಗಲು ಸಹಕರಿಸಿದ್ದ ಮಹಿಳೆಯೊಬ್ಬಳು ಸೇರಿದಂತೆ ಮೂವರು ಆರೋಪಿಗಳನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ರಾಜ್ಯದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣದ ಪ್ರಕಾರ, ಜುಲೈ 17ರಂದು ಮಹಿಳೆ ಆಟೋದಲ್ಲಿ ಬಾಲಕಿಯನ್ನು ಕರೆದುಕೊಂಡು ಬಂದು, ಪೂರ್ವಯೋಜಿತವಾಗಿ ಇಬ್ಬರು ಆರೋಪಿಗಳಿಗೆ ಒಪ್ಪಿಸಿದ್ದಾಳೆ. ನಂತರ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದ ಆರೋಪಿಗಳು ಬಾಲಕಿಗೆ ಮದ್ಯ ಕುಡಿಸಿ ರಾತ್ರಿ ಪೂರ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಮರುದಿನ ಬೆಳಗ್ಗೆ ಬಾಲಕಿಯನ್ನು ಮನೆ ಸಮೀಪ ಬಿಟ್ಟು, ನಡೆದ ಘಟನೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮನೆಗೆ ಮರಳಿದ ಬಾಲಕಿಯ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ತಾಯಿ ವಿಚಾರಿಸಿದಾಗ ಅತ್ಯಾಚಾರದ ಕಹಿ ಸತ್ಯ ಹೊರಬಿದ್ದಿದೆ.

ಬಾಲಕಿಯ ದೂರಿನ ಆಧಾರದಲ್ಲಿ ದೇವನಹಳ್ಳಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳು ಹಾಗೂ ಅವರಿಗೆ ನೆರವಾದ ಮಹಿಳೆಯನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಪೊಕ್ಸೊ ಸೇರಿದಂತೆ ವಿವಿಧ ಗಂಭೀರ ಕಲಂಗಳಡಿ ತನಿಖೆ ಮುಂದುವರಿಸಿದ್ದಾರೆ.

ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಬೋಟ್ ಸಂಪೂರ್ಣ ಭಸ್ಮ: ₹30 ಲಕ್ಷಕ್ಕೂ ಅಧಿಕ ನಷ್ಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕ ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ.

ಬೆಂಕಿಗೆ ಆಹುತಿಯಾದ ಬೋಟ್ ಆಯುಬ್ ಸಾಬ್ ಅವರಿಗೆ ಸೇರಿದ್ದಾಗಿದೆ. ಬಂದರಿನಲ್ಲಿ ಬೋಟ್ ನಿಲ್ಲಿಸಿ ನಿರ್ವಹಣಾ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಬೋಟ್‌ನ ಬಹುತೇಕ ಭಾಗವನ್ನು ಆವರಿಸಿತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಬೆಂಕಿಯನ್ನು ನಿಯಂತ್ರಣಕ್ಕೆ ತಂದರೂ, ಅಷ್ಟರಲ್ಲಾಗಲೇ ಬೋಟ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ಅಗ್ನಿ ಅವಘಡದಲ್ಲಿ ಬೋಟ್‌ನಲ್ಲಿದ್ದ ಮೀನುಗಾರಿಕಾ ಬಲೆಗಳು, ಇಂಜಿನ್ ಸೇರಿದಂತೆ ವಿವಿಧ ಉಪಕರಣಗಳು ಸಂಪೂರ್ಣ ಸುಟ್ಟುಹೋಗಿದ್ದು, ಸುಮಾರು ₹30 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RSS ವಿರುದ್ಧದ ಹೇಳಿಕೆ ಪ್ರಕರಣ; ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಮತ್ತೆ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯ

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ಮಹಮ್ಮದ್ ನಲಪಾಡ್ ಅವರಿಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ತೇಜಸ್ ಗೌಡ ಕಳೆದ ವರ್ಷ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಿಯಾಂಕ್ ಖರ್ಗೆ ಮತ್ತು ಮಹಮ್ಮದ್ ನಲಪಾಡ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು.

ಆದರೆ, ಆರೋಪಿಗಳ ಪರವಾಗಿ ಸದಾಶಿವನಗರ ಹಾಗೂ ಅಶೋಕ್ ನಗರ ಪೊಲೀಸ್ ಠಾಣೆಗಳ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಿ ವರದಿ ಸಲ್ಲಿಸಿದರು.

ಸಲ್ಲಿಕೆಯಾದ ವರದಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಅದು ತೃಪ್ತಿಕರವಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಹಮ್ಮದ್ ನಲಪಾಡ್ ಆಗಸ್ಟ್ 1ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಮರು ಸಮನ್ಸ್ ಜಾರಿ ಮಾಡಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 1ರಂದು ನಡೆಯಲಿದ್ದು, ಆರೋಪಿಗಳ ಹಾಜರಾತಿಯ ಬಳಿಕ ನ್ಯಾಯಾಲಯ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ರಿಸಲ್ಟ್ ರಿಲೀಸ್: ಮಂಗಳೂರು ವಿವಿಯ ವೇಗದ ಫಲಿತಾಂಶಕ್ಕೆ ಮೆಚ್ಚುಗೆ

0

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಪದವಿ 6ನೇ ಸೆಮಿಸ್ಟರ್ ಹಾಗೂ ಬಿ.ಹೆಚ್.ಎಂ 8ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಮೌಲ್ಯಮಾಪನ ಪೂರ್ಣಗೊಂಡ ಎರಡೇ ದಿನಗಳಲ್ಲಿ ಪ್ರಕಟಿಸುವ ಮೂಲಕ ವಿವಿ ಗಮನ ಸೆಳೆದಿದೆ.

ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆದ ವಿವಿಧ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 20ರಂದು ಆನ್‌ಲೈನ್ ಮೂಲಕ ಬಿಡುಗಡೆ ಮಾಡಲಾಗಿದೆ.

ವಿವಿ ವ್ಯಾಪ್ತಿಯ ಕಾಲೇಜುಗಳಿಂದ ಪರೀಕ್ಷೆಗೆ ಹಾಜರಾಗಿದ್ದ 17,347 ವಿದ್ಯಾರ್ಥಿಗಳ ಪೈಕಿ ಮೊದಲ ಹಂತದಲ್ಲಿ 13,286 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ ಬಾರಿ ಫಲಿತಾಂಶ ಪ್ರಕಟಣೆಯ ವೇಗಕ್ಕೆ ವಿವಿಯ ಹೊಸ ಆನ್‌ಲೈನ್ ವ್ಯವಸ್ಥೆ ಪ್ರಮುಖ ಕಾರಣವಾಗಿದೆ. ಮೌಲ್ಯಮಾಪನ ಕೇಂದ್ರಗಳಲ್ಲಿಯೇ ಅಂಕಗಳನ್ನು ನೇರವಾಗಿ ಡಿಜಿಟಲ್ ವ್ಯವಸ್ಥೆಯಲ್ಲಿ ದಾಖಲಿಸುವ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಮೌಲ್ಯಮಾಪನ ಮತ್ತು ಫಲಿತಾಂಶ ಸಿದ್ಧಪಡಿಸುವ ಪ್ರಕ್ರಿಯೆ ವೇಗವಾಗಿ ಪೂರ್ಣಗೊಂಡಿದೆ.

ಪ್ರಕಟಗೊಂಡ ಫಲಿತಾಂಶಗಳಲ್ಲಿ ಬಿ.ಎಸ್ಸಿ, ಬಿ.ಕಾಂ, ಬಿ.ಎಸ್‌ಡಬ್ಲ್ಯೂ, ಬಿ.ಸಿ.ಎ ಸೇರಿದಂತೆ ಹಲವು ಪ್ರಮುಖ ಪದವಿ ಕೋರ್ಸ್‌ಗಳ 6ನೇ ಸೆಮಿಸ್ಟರ್ ಹಾಗೂ ಬಿ.ಹೆಚ್.ಎಂ 8ನೇ ಸೆಮಿಸ್ಟರ್ ಸೇರಿವೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ವೈಯಕ್ತಿಕ ಲಾಗಿನ್ ಮೂಲಕ ಪರಿಶೀಲಿಸಬಹುದು.

ಉಳಿದ ಕೋರ್ಸ್‌ಗಳ ಫಲಿತಾಂಶ ಪ್ರಕಟಣೆ ಪ್ರಕ್ರಿಯೆ ಮುಂದುವರಿದಿದ್ದು, ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ. ಫಲಿತಾಂಶದಿಂದ ಅತೃಪ್ತರಾದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ಅವಕಾಶ ನೀಡಲಾಗುವುದು. ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳೂರು ವಿಶ್ವವಿದ್ಯಾಲಯದ ತ್ವರಿತ ಫಲಿತಾಂಶ ಪ್ರಕಟಣೆ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಯೋಜನೆಗಳಿಗೆ ಸಹಕಾರಿಯಾಗಲಿದೆ.

ಮಂತ್ರಾಲಯ ಯಾತ್ರೆ ದುರಂತ: ಡಿವೈಡರ್‌ಗೆ ಕಾರು ಡಿಕ್ಕಿ, ಮಂಗಳೂರು ಉದ್ಯಮಿ ರವಿ ಶೆಟ್ಟಿ ದುರ್ಮರಣ

0

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಿರುಪತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ತೀವ್ರವಾಗಿ ಜಖಂಗೊಂಡಿದ್ದು, ಉದ್ಯಮಿ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿ ಎಮ್ಮಿಗನೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಂತ್ರಾಲಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಮುಂದುವರಿಸಿದ್ದಾರೆ.