ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತಿನ ಅರಿವು ಮೂಡಿಸುವ ಉದ್ದೇಶದಿಂದ ಜಿ.ಎನ್.ಟಿ.ಟಿ.ಎಫ್ ಹಾಗೂ ಎಚ್.ಕೆ. ಪಾಟೀಲ ಪ್ರತಿಷ್ಠಾನದ ಸಹಯೋಗದಲ್ಲಿ ಜಿಲ್ಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೃಷ್ಣಗೌಡ ಪಾಟೀಲ ತಿಳಿಸಿದರು.
ನಗರದ ಜಿ.ಎನ್.ಟಿ.ಟಿ.ಎಫ್ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಮುಖಿ ಕಾರ್ಯಗಳ ಭಾಗವಾಗಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಾಗುತ್ತಿದೆ. ಜಿಲ್ಲೆಯ 138 ಪ್ರೌಢಶಾಲೆಗಳ ಸುಮಾರು 13,500 ವಿದ್ಯಾರ್ಥಿಗಳನ್ನು ಈ ಸ್ಪರ್ಧೆಯು ತಲುಪಲಿದೆ ಎಂದರು.
ವಿವಿಧ ಹಂತಗಳಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನ 5 ಸಾವಿರ ರೂ, ದ್ವಿತೀಯ 3 ಸಾವಿರ ರೂ, ತೃತೀಯ ಬಹುಮಾನ 2 ಸಾವಿರ ರೂ ನಿಗದಿಪಡಿಸಲಾಗಿದೆ. ಬೆಳಗಾವಿಯ ವಿನೋದ ದೇಶಪಾಂಡೆ ನೇತೃತ್ವದ ತಜ್ಞರ ತಂಡವು ಸ್ಪರ್ಧೆಯನ್ನು ವ್ಯವಸ್ಥಿತವಾಗಿ ನಡೆಸಿಕೊಡಲಿದೆ ಎಂದು ತಿಳಿಸಿದರು.
ಹಿರಿಯ ಲೆಕ್ಕ ಪರಿಶೋಧಕ ಆನಂದ ಪೊತ್ನಿಸ್ ಮಾತನಾಡಿ, ಜ. 17 ಮತ್ತು ಜ. 24ರಂದು ಜಿ.ಎನ್.ಟಿ.ಟಿ.ಎಫ್ ಆವರಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪಾಲಕರಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಪಾಲ್ಗೊಳ್ಳುವ ಎಲ್ಲರಿಗೂ ಉಪಾಹಾರ ಮತ್ತು ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಇಂತಹ ರಸಪ್ರಶ್ನೆಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿವೆ. ಆದ್ದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದರು.

