ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ತಿರುವು ಕಾಣುತ್ತಿದೆ. ಸಿಎಂ ಸಿದ್ದರಾಮಯ್ಯ ಬಣ ಸಕ್ರಿಯವಾಗಿದೆ. ಇಂದು ಕೆ ಎನ್ ರಾಜಣ್ಣ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಔತಣಕೂಟ ಏರ್ಪಡಿಸಲಾಗಿದೆ. ಈ ಔತಣಕೂಟದಲ್ಲಿ ಸಚಿವ ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಮಧ್ಯಾಹ್ನ 1 ಗಂಟೆಗೆ ವಿಧಾನಸೌಧದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಸಭೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ 2 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರು ನಗರಕ್ಕೆ ತಲುಪಲಿದ್ದಾರೆ.
ಜಿಲ್ಲೆಯ ವಿವಿಧೆಡೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಉದ್ಘಾಟನೆ ನೆರವೇರಿಸಲಿದ್ದಾರೆ. ಇದಕ್ಕೂ ಮುನ್ನ ಅಂದರೆ ಮಧ್ಯಾಹ್ನ 2.30ರಿಂದ 3.30ರವರೆಗೆ ರಾಜಣ್ಣ ಅವರ ಕ್ಯಾತ್ಸಂದ್ರ ನಿವಾಸದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಸಮಯವನ್ನೂ ಕಾಯ್ದಿರಿಸಲಾಗಿದೆ.
ಹೈಕಮಾಂಡ್‌ನಿಂದ ಕ್ರಮ ಎದುರಿಸಿರುವ ನಾಯಕ ತಾವು ನೀಡಿದ್ದ ಕ್ರಾಂತಿ ಹೇಳಿಕೆಗೆ ಪೂರಕವಾಗಿ ನವೆಂಬರ್ ತಿಂಗಳಲ್ಲೇ ಔತಣಕೂಟ ಆಯೋಜಿಸಿರುವುದು, ಆ ಔತಣಕೂಟದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುತ್ತಿರುವುದಕ್ಕೆ ವಿವಿಧ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಬಣದ ಕೆಲ ಸಚಿವರೂ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

