Home Blog Page 236

ಉಮರ್ ಖಾಲಿದ್ ಪೋಸ್ಟರ್ ಪ್ರದರ್ಶನದಲ್ಲಿ ತಪ್ಪೇನು?: ‘ಇದು ಪಾಕಿಸ್ತಾನನಾ?’ ಕೇಂದ್ರ ಸರ್ಕಾರದ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಪೋಸ್ಟರ್ ಪ್ರದರ್ಶಿಸಿದ ವಿಚಾರ ರಾಜಕೀಯ ವಿವಾದಕ್ಕೆ ತಿರುಗಿದ್ದು, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಪೋಸ್ಟರ್ ಪ್ರದರ್ಶಿಸಿದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರುವ ಅವರು, ಯಾವುದೇ ಚಾರ್ಜ್‌ಶೀಟ್ ಸಲ್ಲಿಸದೇ ಐದು ವರ್ಷಗಳಿಂದ ಜೈಲಿನಲ್ಲಿ ಇರಿಸಿರುವುದನ್ನು ಖಂಡಿಸಿದ್ದಾರೆ.

ಶುಕ್ರವಾರ (ಜು.24) ಬೆಂಗಳೂರಿನಲ್ಲಿ ನಡೆದ ನೀಟ್ ಪ್ರತಿಭಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್, “ಉಮರ್ ಖಾಲಿದ್ ಪೋಸ್ಟರ್ ಪ್ರದರ್ಶಿಸಿದರೆ ಅಪರಾಧವೇ? ಐದು ವರ್ಷಗಳಿಂದ ಅವರನ್ನು ಜೈಲಿನಲ್ಲಿ ಇಟ್ಟಿದ್ದೀರಾ, ಇನ್ನೂ ಚಾರ್ಜ್‌ಶೀಟ್ ಹಾಕಿಲ್ಲ. ಇದೇನು ಪ್ರಜಾಪ್ರಭುತ್ವವೇ? ಇದು ಪಾಕಿಸ್ತಾನನಾ? ಕೇಂದ್ರ ಸರ್ಕಾರ ಪಾಕಿಸ್ತಾನದ ಮಾದರಿಯಲ್ಲಿ ಆಡಳಿತ ನಡೆಸುತ್ತಿದೆ” ಎಂದು ಕಿಡಿಕಾರಿದರು.

ಪ್ರತಿಭಟನೆಯ ವೇಳೆ ಕೆಲವರು ‘Ukhad Le BLR Police’ ಎಂಬ ಬರಹವಿದ್ದ ಪೋಸ್ಟರ್‌ಗಳನ್ನು ಪ್ರದರ್ಶಿಸಿದರೆ, ಮತ್ತೊಂದು ಗುಂಪು ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರ ಘೋಷಣೆಗಳಿದ್ದ ಪೋಸ್ಟರ್‌ಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿತು.

ಈ ಬೆಳವಣಿಗೆ ಪೊಲೀಸರ ಗಮನ ಸೆಳೆದ ತಕ್ಷಣ ಅವರು ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಪೋಸ್ಟರ್‌ಗಳನ್ನು ವಶಪಡಿಸಿಕೊಂಡರು. ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದರೂ ಯಾವುದೇ ಅಹಿತಕರ ಘಟನೆ ಸಂಭವಿಸದೇ ಪ್ರತಿಭಟನೆ ಶಾಂತಿಯುತವಾಗಿ ಮುಂದುವರಿಯಿತು.

ಪ್ರತಿಭಟನೆಯಲ್ಲಿದ್ದ ಕೆಲ ವಿದ್ಯಾರ್ಥಿಗಳು ಉಮರ್ ಖಾಲಿದ್ ಪರ ಪೋಸ್ಟರ್ ಹಿಡಿದಿದ್ದ ಯುವತಿಗೆ ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು. ಇಂತಹ ಪೋಸ್ಟರ್‌ಗಳು ಪ್ರತಿಭಟನೆಯ ಮೂಲ ಉದ್ದೇಶಕ್ಕೆ ಧಕ್ಕೆ ಉಂಟುಮಾಡುತ್ತವೆ ಎಂದು ಹೇಳಿ ಸ್ಥಳ ತೊರೆಯುವಂತೆ ಒತ್ತಾಯಿಸಿದರು. ಬಳಿಕ ಯುವತಿ ಅಲ್ಲಿಂದ ತೆರಳಿದರು.

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಆರೋಪಿಗಳಾಗಿದ್ದು, ಇದೇ ವಿಚಾರ ಮತ್ತೆ ನೀಟ್ ಪ್ರತಿಭಟನೆಯ ವೇದಿಕೆಯಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ‘ಇದು ಪ್ರಜಾಪ್ರಭುತ್ವದ ಗೆಲುವು’ ಎಂದ ಸೋನಮ್ ವಾಂಗ್ಚುಕ್; ಆಸ್ಪತ್ರೆಯಿಂದಲೇ ವಿಜಯೋತ್ಸವ ಸಂದೇಶ

0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಬೆಳವಣಿಗೆಯನ್ನು “ಪ್ರಜಾಪ್ರಭುತ್ವದ ಗೆಲುವು” ಎಂದು ಬಣ್ಣಿಸಿದ್ದಾರೆ. 26 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್, ಆಸ್ಪತ್ರೆಯ ಹಾಸಿಗೆಯಿಂದಲೇ ವಿಜಯದ ಸಂಕೇತ ತೋರಿಸಿ ದೇಶದ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆಗೆ ಆಗ್ರಹಿಸಿ ಜೂನ್ 28ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವುದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧದ ಕಾನೂನು ಕ್ರಮಗಳನ್ನು ಹಿಂತೆಗೆದುಕೊಳ್ಳುವುದು ಹಾಗೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿದ ಬಳಿಕ ಅವರು 26 ದಿನಗಳ ಉಪವಾಸವನ್ನು ಅಂತ್ಯಗೊಳಿಸಿದ್ದರು.

ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್, ಎಕ್ಸ್ (X) ಖಾತೆಯಲ್ಲಿ ಆಸ್ಪತ್ರೆಯ ಬೆಡ್‌ನಿಂದಲೇ ವಿಜಯದ ಸಂಕೇತ ತೋರಿಸುತ್ತಿರುವ ಫೋಟೋ ಹಂಚಿಕೊಂಡು, “ಇದು ಪ್ರಜಾಪ್ರಭುತ್ವದ ಗೆಲುವು. ಬೀದಿಗಳಿಂದ ನೇರವಾಗಿ ಪ್ರಜಾಪ್ರಭುತ್ವ ಗೆದ್ದಿದೆ. ಶಾಂತಿ, ತಾಳ್ಮೆ ಮತ್ತು ನಿರಂತರ ಪರಿಶ್ರಮಕ್ಕೆ ಸಂದ ಜಯ ಇದು” ಎಂದು ಬರೆದುಕೊಂಡಿದ್ದಾರೆ.

ಒಂದು ತಿಂಗಳಿಗೂ ಹೆಚ್ಚು ಕಾಲ ದೇಶಾದ್ಯಂತ ಪ್ರತಿಭಟನೆ ಮುನ್ನಡೆಸಿದ ಸಿಜೆಪಿ ಕಾರ್ಯಕರ್ತರು, ಜೆನ್-ಜಿ ವಿದ್ಯಾರ್ಥಿಗಳು ಹಾಗೂ ದೇಶದ ಮೂಲೆ ಮೂಲೆಗಳಿಂದ ಭಯವಿಲ್ಲದೆ ಹೋರಾಟ ನಡೆಸಿದ ನಾಗರಿಕರಿಗೆ ವಾಂಗ್ಚುಕ್ ಧನ್ಯವಾದ ಸಲ್ಲಿಸಿದ್ದಾರೆ. ಈ ಹೋರಾಟ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗೆ ಹೊಸ ಅಧ್ಯಾಯವಾಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಭಾರೀ ಗಾಳಿ-ಮಳೆಗೆ ಮರ ಮುರಿದು ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ!

ಶಿವಮೊಗ್ಗ: ಭಾರೀ ಗಾಳಿ-ಮಳೆಯ ವೇಳೆ ಮರ ಮುರಿದು ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ನಡೆದಿದೆ.

ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನಿಖಿತಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಅವರು ಗರ್ತಿಕೆರೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶುಕ್ರವಾರ ಸಂಜೆ ತರಗತಿ ಮುಗಿಸಿಕೊಂಡು ಇಬ್ಬರು ಸ್ನೇಹಿತರೊಂದಿಗೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಮಾರ್ಗ ಮಧ್ಯೆ ಭಾರೀ ಗಾಳಿ ಹಾಗೂ ಮಳೆಯ ಪರಿಣಾಮ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿರುವುದನ್ನು ಗಮನಿಸಿದ ಮೂವರು ವಿದ್ಯಾರ್ಥಿಗಳು ಅಪಾಯ ತಪ್ಪಿಸಿಕೊಳ್ಳಲು ಹಿಂದಕ್ಕೆ ಸರಿದು ಓಡಲು ಮುಂದಾಗಿದ್ದಾರೆ. ಇದೇ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಉರುಳಿ ನಿಖಿತಾ ಅವರ ಮೇಲೆ ಬಿದ್ದಿದೆ.

ಘಟನೆಯಲ್ಲಿ ನಿಖಿತಾ ಅವರ ಎಡಗಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಸಂಪೂರ್ಣವಾಗಿ ಮುರಿದಿರುವುದಾಗಿ ತಿಳಿದುಬಂದಿದೆ. ತೀವ್ರ ನೋವಿನಿಂದ ವಿದ್ಯಾರ್ಥಿನಿ ಕೂಗಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣೆ ಮಾಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಗಾಯದ ತೀವ್ರತೆಯನ್ನು ಗಮನಿಸಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. ವೈದ್ಯರ ಸಲಹೆಯಂತೆ ವಿದ್ಯಾರ್ಥಿನಿ ನಿಖಿತಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ: ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

0

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಎರಡು ಖಾಸಗಿ ಬಸ್‌ಗಳು ಹಾಗೂ ಒಂದು ಟೆಂಪೋ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ.

ಬಾಣಸಮುದ್ರ ಸಮೀಪದ ಗಾರ್ಮೆಂಟ್ಸ್‌ಗೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದ ವಾಹನಗಳ ನಡುವೆ ಈ ಅಪಘಾತ ನಡೆದಿದೆ. ಅಡ್ಡ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಪ್ರಯತ್ನಿಸಿದ ವೇಳೆ ವಾಹನ ನಿಯಂತ್ರಣ ತಪ್ಪಿದ್ದು, ಮುಂದೆ ಸಾಗುತ್ತಿದ್ದ ಮತ್ತೊಂದು ಬಸ್ ಹಾಗೂ ಟೆಂಪೋಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ 17 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

0

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ತಿರುವು ಪಡೆದಿದ್ದು, ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಬೆಳವಣಿಗೆಗಳ ನಡುವೆ ರಾಜೀನಾಮೆ ವಿಶೇಷ ಗಮನ ಸೆಳೆದಿದೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಶನಿವಾರ ಮೂರನೇ ಸುತ್ತಿನ ಮಾತುಕತೆ ನಿಗದಿಯಾಗಿತ್ತು. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಬೇಕಿದ್ದರೂ, ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉದ್ದೇಶಿಸಿ ಬರೆದಿರುವ ಎರಡು ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ಅಧಿಕೃತವಾಗಿ ತಿಳಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ, “ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ತೀರ್ಮಾನಿಸಿದ್ದೇನೆ” ಎಂದು ಅವರು ಉಲ್ಲೇಖಿಸಿದ್ದಾರೆ.

ಕಳೆದ ಹಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ನಿರ್ಮಾಣವಾಗಿತ್ತು. ಈ ಬೆಳವಣಿಗೆಗಳ ನಡುವೆ ಶಿಕ್ಷಣ ಸಚಿವರ ರಾಜೀನಾಮೆ ರಾಜಕೀಯ ಹಾಗೂ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅನಿವಾರ್ಯ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

0

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಕ್ರಮವನ್ನು ವಿರೋಧಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ ರಾಹುಲ್ ಗಾಂಧಿ,

ಅವರಿಗೆ ಬೇರೆ ಯಾವುದೇ ಸಚಿವಾಲಯದ ಜವಾಬ್ದಾರಿ ನೀಡಿದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು. ಜೊತೆಗೆ, ಪ್ರಧಾನಿ ಮೋದಿ ದೇಶದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ ಅವರು, ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ ಹಾಗೂ ಪೆಲೆಟ್ ಗನ್‌ಗಳನ್ನು ಬಳಸಲಾಗಿದೆ ಎಂದು ಹೇಳಿ, ಕೇಂದ್ರ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ ಎಂದು ಟೀಕಿಸಿದರು.

ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸುವುದು, ಇಂಟರ್ನೆಟ್ ಬಂದ್ ಮಾಡುವುದು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಆದರೆ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಗಂಭೀರ ವಿಷಯದಲ್ಲಿ ಸರ್ಕಾರ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನೀಟ್ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸುತ್ತಿದೆ: ಸಂಸದ ಯದುವೀರ್ ಒಡೆಯರ್ ವಾಗ್ದಾಳಿ

ಮೈಸೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರೂ, ಅದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ಯಶಸ್ವಿಯಾಗಿ ನಡೆಸಿ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಆದರೂ ಇದೇ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಇದು ಕಾಂಗ್ರೆಸ್‌ನ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ನೇಪಾಳದಲ್ಲಿ ನಡೆದ ಬೆಳವಣಿಗೆಗಳ ಮಾದರಿಯ ಪರಿಸ್ಥಿತಿಯನ್ನು ಭಾರತದಲ್ಲೂ ನಿರ್ಮಿಸಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದ್ದು, ದೇಶದ ಜನತೆ ಇಂತಹ ಪ್ರಯತ್ನಗಳಿಗೆ ಮಣಿಯುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ಯಾವುದೇ ಅಸಮಾಧಾನವಿದ್ದರೂ ಜನರು ಚುನಾವಣೆಯ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಇತರ ದೇಶಗಳಂತೆಯೇ ಭಾರತದಲ್ಲೂ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಹೇಳಿಕೆ ವಿವಾದ; ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ FIR

ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತು ಮಾತನಾಡುವ ವೇಳೆ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೆಹಲಿ‌ನಲ್ಲಿ ನಡೆಯುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ‘ಯೂತ್ ಫಾರ್ ನೇಷನ್’ ಕಾರ್ಯಕ್ರಮದಲ್ಲಿ ಸಿ.ಟಿ. ರವಿ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿ.ಟಿ. ರವಿ, ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳನ್ನು ಟೀಕಿಸುವ ವೇಳೆ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿಬಂದಿದೆ.

ಈ ಹೇಳಿಕೆಯಿಂದ ಸಮುದಾಯದ ವಿರುದ್ಧ ದ್ವೇಷ ಮತ್ತು ಅಶಾಂತಿ ಉಂಟುಮಾಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ದ್ವೇಷಪೂರಿತ ಭಾಷಣ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಆಗ್ರಹಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಕಠಿಣ ಹೋರಾಟ; ನಿರ್ಣಾಯಕ ಸಭೆಗೂ ಮುನ್ನ ಕೇಂದ್ರಕ್ಕೆ CJP ಎಚ್ಚರಿಕೆ

0

ನವದೆಹಲಿ: ಕೇಂದ್ರ ಸರ್ಕಾರದೊಂದಿಗೆ ನಡೆಯಲಿರುವ ಮೂರನೇ ಸುತ್ತಿನ ಮಾತುಕತೆಗೆ ಮುನ್ನ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಸರ್ಕಾರದೊಂದಿಗೆ ನಡೆಯುವ ಸಭೆಗಳಿಗೆ ಯಾವುದೇ ಅರ್ಥವಿಲ್ಲ ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಸ್ಪಷ್ಟಪಡಿಸಿದ್ದಾರೆ.

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಇದೇ ನಿಲುವು ಮುಂದುವರಿಸಿದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಿ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಯ 47 ಅಧಿಕಾರಿಗಳನ್ನು ವಜಾಗೊಳಿಸಿರುವುದರಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಅದರ ನಂತರದ ಬೆಳವಣಿಗೆಗಳಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ರಾಜಕೀಯ ಮತ್ತು ಆಡಳಿತಾತ್ಮಕ ಹೊಣೆಗಾರರು ಎಂದು ಆರೋಪಿಸಿದರು.

“ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಜವಾಬ್ದಾರಿ ಶಿಕ್ಷಣ ಸಚಿವರ ಮೇಲಿದೆ. ಅವರು ರಾಜೀನಾಮೆ ನೀಡಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಅಗತ್ಯವಾದ ಬೇಡಿಕೆಗಳು ಮತ್ತು ಸಲಹೆಗಳ ಪಟ್ಟಿಯನ್ನು ನಾವು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದ್ದೇವೆ” ಎಂದು ಅಶುತೋಷ್ ರಂಕಾ ಹೇಳಿದರು.

ಇದರ ನಡುವೆ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸಿಜೆಪಿ ಪ್ರತಿನಿಧಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿದರು. ಈ ಸಭೆಯಲ್ಲಿ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ಮೂರು ಪ್ರಮುಖ ಬೇಡಿಕೆಗಳು ಹಾಗೂ ಐದು ಸುಧಾರಣಾ ಸಲಹೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದು ತಿಳಿಸಲಾಗಿದೆ.

ಸಭೆಯ ಬಳಿಕ ಮಾತನಾಡಿದ ಜೆ.ಪಿ. ನಡ್ಡಾ, ಸರ್ಕಾರದೊಂದಿಗೆ ನಡೆದ ಚರ್ಚೆಯ ವಿವರಗಳನ್ನು ಶನಿವಾರ ಸಿಜೆಪಿ ಸದಸ್ಯರಿಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಮಹಾಲಕ್ಷ್ಮೀ ದೇವಿಯ ಚಿನ್ನಾಭರಣ ಕದ್ದ ಮಂಡ್ಯದ ಕಳ್ಳನಿಗೆ ಬೆಟಗೇರಿ ಪೊಲೀಸರ ಖೆಡ್ಡಾ; ₹1.25 ಲಕ್ಷ ಮೌಲ್ಯದ ಆಭರಣ ವಶ

0

ಗದಗ: ದೇವಿಯ ಮೈಮೇಲಿದ್ದ ಚಿನ್ನ-ಬೆಳ್ಳಿ ಆಭರಣಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸಿದ್ದ ಅಂತರ್‌ಜಿಲ್ಲಾ ಕಳ್ಳನನ್ನು ಬೆಟಗೇರಿ ಬಡಾವಣೆ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ₹1.25 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಹಾತಲಗೇರಿ ನಾಕಾ ಸಮೀಪದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜೂನ್ 19ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಲ್ಲಾವಳ್ಳಿ ಗ್ರಾಮದ ಪೃಥ್ವಿರಾಜ ಬಿಎ ತಂದೆ ಅಪ್ಪಾಜಿಗೌಡ (31) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ದೇವಿಗೆ ಅಲಂಕರಿಸಲಾಗಿದ್ದ 100 ಗ್ರಾಂ ಬೆಳ್ಳಿಯ ಕಿರೀಟ, 20 ಗ್ರಾಂ ಬೆಳ್ಳಿಯ ಕೈ ಹಾಗೂ ಎರಡು ಬಂಗಾರದ ತಾಳಿ ಪದಕಗಳನ್ನು ಕಳವು ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 53/2026ರಡಿ ಪ್ರಕರಣ ದಾಖಲಾಗಿತ್ತು.

ಮಂಡ್ಯದವರೆಗೂ ಬೆನ್ನತ್ತಿದ ಪೊಲೀಸರು

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹಾಂತೇಶ ಸಜ್ಜನ ಅವರ ಮೇಲ್ವಿಚಾರಣೆ ಹಾಗೂ ಬೆಟಗೇರಿ ವೃತ್ತದ ಸಿಪಿಐ ಧೀರಜ್ ಎ. ಸಿಂಧೆ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ತಾಂತ್ರಿಕ ಮಾಹಿತಿ ಹಾಗೂ ಗುಪ್ತಚರ ಜಾಲದ ನೆರವಿನಿಂದ ಮಂಡ್ಯ ಜಿಲ್ಲೆಯವರೆಗೂ ಬೆನ್ನುಹತ್ತಿದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ವಿಚಾರಣೆ ವೇಳೆ ದೇವಸ್ಥಾನ ಕಳ್ಳತನ ನಡೆಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ 100 ಗ್ರಾಂ ಬೆಳ್ಳಿಯ ಕಿರೀಟ, 20 ಗ್ರಾಂ ಬೆಳ್ಳಿಯ ಕೈ ಹಾಗೂ ಎರಡು ಬಂಗಾರದ ತಾಳಿ ಪದಕಗಳು ಸೇರಿ ₹1.25 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಚನ್ನಯ್ಯ ದೇವೂರ (ಪ್ರಭಾರ), ಎಎಸ್‌ಐಗಳಾದ ಪಿ.ಎಫ್. ಹುಡೇದ, ಐ.ಎಸ್. ಲಮಾಣಿ, ಸಿಬ್ಬಂದಿ ಸಂತೋಷ ಡೋಣಿ, ಪ್ರವೀಣ ಕಲ್ಲೂರ, ಅಶೋಕ ಗದಗ, ಪಿ.ಎಚ್. ದೊಡ್ಡಮನಿ, ತಾಂತ್ರಿಕ ವಿಭಾಗದ ಎಆರ್‌ಎಸ್‌ಐ ಗುರುರಾಜ ಬೂದಿಹಾಳ ಹಾಗೂ ಸಂಜು ಕೊರಡೂರ ಭಾಗವಹಿಸಿದ್ದರು. ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ಅಭಿನಂದಿಸಿದ್ದಾರೆ.