ವಿಜಯಪುರ: ನಗರದ ಬಿಎಲ್‌ಡಿಇ ರಸ್ತೆಯಲ್ಲಿರುವ ಕೃಷ್ಣಾ ಹೋಟೆಲ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ನೋಡ ನೋಡುತ್ತಿದ್ದಂತೆ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಕೆಲವೇ ನಿಮಿಷಗಳಲ್ಲಿ ಒಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದ ವೇಳೆ ಹೋಟೆಲ್‌ನ ಅಡುಗೆ ಅನಿಲ ಸಿಲಿಂಡರ್‌ಗಳು ಸ್ಪೋಟಗೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ತಕ್ಷಣ ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಈ ಅಗ್ನಿ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ. ಪ್ರಕರಣವು ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

