ವಿಜಯಸಾಕ್ಷಿ ಸುದ್ದಿ, ಗದಗ: ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಮತ್ತು ಶಿಕ್ಷಕೇತರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ರಾಜ್ಯಾಧ್ಯಕ್ಷ ಮಹ್ಮದಶಫಿ ನಾಗರಕಟ್ಟೆ ತಿಳಿಸಿದ್ದಾರೆ.
ನಗರದ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದರು.
ಹುದ್ದೆಗಳ ಕೊರತೆಯಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ತೊಡಕಾಗುತ್ತಿದೆ. ಮತ್ತೊಂದೆಡೆ, ಅಗತ್ಯ ವಿದ್ಯಾರ್ಹತೆ ಹೊಂದಿರುವ ಅನೇಕ ಪದವೀಧರರು ಉದ್ಯೋಗದ ನಿರೀಕ್ಷೆಯಲ್ಲಿ ಕಾಯುತ್ತಿರುವ ಸಂದರ್ಭದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಅವರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ವಸತಿ ಶಾಲೆಗಳು ಬಡವರು, ಅಲ್ಪಸಂಖ್ಯಾತರು, ಅತ್ಯಂತ ಹಿಂದುಳಿದವರು ಹಾಗೂ ದಲಿತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಪ್ರಮುಖ ಕೇಂದ್ರಗಳಾಗಿವೆ. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಖಾಲಿ ಇರುವ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ಕಲ್ಪಿಸಬೇಕು. ಜತೆಗೆ ವಿದ್ಯಾವಂತ ನಿರುದ್ಯೋಗಿ ಪದವೀಧರರಿಗೆ ಉದ್ಯೋಗದ ಅವಕಾಶ ಒದಗಿಸಬೇಕು ಎಂದು ಮಹ್ಮದಶಫಿ ನಾಗರಕಟ್ಟೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಾಫರ ಡಾಲಾಯತ, ಮಹಬೂಬ್ ಬಾದಷಾ ಖಾಜಿ, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ದೊಡ್ಡಮನಿ, ಕುತುಬುದ್ದೀನ್ ಶೇಖ, ಅಬ್ದುಲರಜ್ಜಾಕ ಮಂಗಳೂರು, ರಫೀಕ್ ಈಟಿ, ಸಲೀಂ ಕರಡಿ, ಯಾಸಿನ್ ಮುಲ್ಲಾ, ಅಫ್ಜಲ್ ಮನಿಯಾರ್, ಜೋಹರ ಮುಂಡರಗಿ, ಇಮ್ರಾನ್ ತಹಶೀಲ್ದಾರ್, ಮೀರಾಸಾಬ ಇರಕಲ್, ನಿಜಾಮುದ್ದೀನ್ ಕಾಟಾಪುರ, ರಹೀಂಸಾಬ ದೊಡ್ಡಮನಿ, ಸಲೀಂ ನಾಲಬಂದ, ಮಕ್ತುಂ ಹುಸೇನ್ ಜಮಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

