Home Blog Page 3

ರೈತರ ಅಹವಾಲು ಆಲಿಸಿದ ಸಚಿವ ರಾಯರಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಶುಕ್ರವಾರ ಗದಗ ಹಾಗೂ ಮುಂಡರಗಿ ತಾಲೂಕಿನ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿದರು. ಬೆಳೆ ನಷ್ಟದ ನೈಜ ಚಿತ್ರಣ ದಾಖಲಿಸಿ, ಯಾವುದೇ ಅರ್ಹ ರೈತ ಸರ್ಕಾರದ ಪರಿಹಾರದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮೊದಲು ಗದಗ ತಾಲೂಕಿನ ಗಂಗಿಮಡಿ ಬಳಿಯ ಜಮೀನಿಗೆ ಭೇಟಿ ನೀಡಿದ ಸಚಿವರು, ಶೇಂಗಾ, ಹೆಸರು ಹಾಗೂ ಮೆಣಸಿನಕಾಯಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿರುವುದು, ತೇವಾಂಶದ ಅಭಾವದಿಂದ ಬೆಳೆಗಳು ಒಣಗುತ್ತಿರುವ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಜಮೀನಿಗೆ ಭೇಟಿ ನೀಡಿ ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಮಳೆ ಅಭಾವದಿಂದ ಬೆಳೆಗಳು ಬಾಡುತ್ತಿರುವುದು ಹಾಗೂ ಇದೇ ಪರಿಸ್ಥಿತಿ ಮುಂದುವರಿದರೆ ಹೆಚ್ಚಿನ ನಷ್ಟ ಸಂಭವಿಸುವ ಸಾಧ್ಯತೆ ಕುರಿತು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.

ಪರಿಶೀಲನೆ ವೇಳೆ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಸಚಿವರು, ಬಿತ್ತನೆ ವೆಚ್ಚ, ನೀರಿನ ಕೊರತೆ, ಬೆಳೆ ಹಾನಿ ಹಾಗೂ ಎದುರಾಗಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಬೆಳೆ ಹಾನಿ ಮೌಲ್ಯಮಾಪನವನ್ನು ಪಾರದರ್ಶಕವಾಗಿ ನಡೆಸಿ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರ ಜಮೀನುಗಳಿಗೆ ತೆರಳಿ ನೈಜ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಯಾವುದೇ ಅರ್ಹ ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಲಿದೆ. ಜಿಲ್ಲೆಯ ಬೆಳೆ ಹಾನಿಯ ಸಂಪೂರ್ಣ ವರದಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ಅಗತ್ಯ ನೆರವು ಮತ್ತು ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ. ಪಾಟೀಲ, ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ರೈತರು ಉಪಸ್ಥಿತರಿದ್ದರು.

“ಬೆಳೆ ಹಾನಿಯ ನೈಜ ವರದಿ ಸಿದ್ಧಪಡಿಸಿ, ಸರ್ಕಾರದ ಪರಿಹಾರ ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪಬೇಕು. ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ.”

– ಬಸವರಾಜ ರಾಯರಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ

ಎಸ್‌ಪಿ ಕಚೇರಿಗೆ ಉಪಲೋಕಾಯುಕ್ತರ ಭೇಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್‌ಪಿ) ಕಚೇರಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಈ ವೇಳೆ ಎಸ್‌ಪಿ ಕಚೇರಿಯಲ್ಲಿ ಜಾರಿಯಲ್ಲಿರುವ ‘ಪ್ರಭುವಿನೆಡೆಗೆ ಪ್ರಭುತ್ವ’ ಹಾಗೂ ‘ಥರ್ಡ್ ಐ’ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಕೆಲಸಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

ಜನಸ್ನೇಹಿ ಪೊಲೀಸ್ ಸೇವೆಗಳು ಹಾಗೂ ತಂತ್ರಜ್ಞಾನ ಆಧಾರಿತ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ್ ಆರ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಉಪಸ್ಥಿತರಿದ್ದರು.

ಕಚೇರಿಯಲ್ಲಿ ಕುಳಿತು ವರದಿ ಬೇಡ; ಜಮೀನಿಗೆ ಹೋಗಿ ವಾಸ್ತವ ಸ್ಥಿತಿ ತಿಳಿಯಿರಿ: ಸಚಿವ ಬಸವರಾಜ ರಾಯರೆಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕಚೇರಿಯಲ್ಲಿ ಕುಳಿತು ವರದಿ ತಯಾರಿಸುವ ಬದಲು ರೈತರ ಜಮೀನುಗಳಿಗೆ ತೆರಳಿ ವಾಸ್ತವ ಸ್ಥಿತಿ ಪರಿಶೀಲಿಸಿ ಮಾಹಿತಿ ಸಲ್ಲಿಸಬೇಕು. ಮುಂದಿನ ವಾರ ನಡೆಯುವ ಎರಡನೇ ಹಂತದ ಪರಿಶೀಲನಾ ಸಭೆಯೊಳಗೆ ಸಮರ್ಪಕ ವರದಿ ನೀಡದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜೂನ್ 1ರಿಂದ ಆಗಸ್ಟ್ 7ರವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.31ರಷ್ಟು ಮಳೆ ಕೊರತೆ ದಾಖಲಾಗಿದ್ದು, ಎನ್‌ಡಿಆರ್‌ಎಫ್ ನಿಯಮಾವಳಿಗಳ ಪ್ರಕಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಅಗತ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕುವಾರು ವೈಜ್ಞಾನಿಕ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

164 ಕೋಟಿ ರೂ. ಬೆಳೆ ಹಾನಿ

ಪ್ರಾಥಮಿಕ ಅಂದಾಜಿನಂತೆ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿ 164 ಕೋಟಿ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಶೇ.75ರಷ್ಟು ರೈತರು ವಿಮೆ ಮಾಡಿಸಿದ್ದು, ಶೇ.80ರಷ್ಟು ಬೆಳೆ ಹಾನಿಯಾಗಿರುವ ಸಾಧ್ಯತೆಯಿದೆ. ವಿಮಾ ಕಂಪನಿಗಳ ಮೂಲಕ ರೈತರಿಗೆ ಶೀಘ್ರ ಪರಿಹಾರ ದೊರಕಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಮೆ ಮಾಡಿಸದ ರೈತರಿಗೆ ಎಸ್‌ಡಿಆರ್‌ಎಫ್ ನಿಯಮಾವಳಿಗಳಡಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಕುಡಿಯುವ ನೀರು, ಉದ್ಯೋಗಕ್ಕೂ ಆದ್ಯತೆ

ಡಿಬಿಒಟಿ ಯೋಜನೆಯಡಿ ಕುಡಿಯುವ ನೀರು ಪೂರೈಕೆಯಲ್ಲಿ ಕಂಡುಬಂದಿರುವ ಲೋಪಗಳನ್ನು ತಕ್ಷಣ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಬಿಜಿ ರಾಮ್‌ಜಿ ಯೋಜನೆಯಡಿ ಈಗಾಗಲೇ 18 ಸಾವಿರಕ್ಕೂ ಹೆಚ್ಚು ಮಾನವ ದಿನಗಳು ಸೃಷ್ಟಿಯಾಗಿದ್ದು, ಕೂಲಿ ಕಾರ್ಮಿಕರಿಗೆ ಕೆಲಸದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಸದ್ಯ ಮೇವು ಕೊರತೆ ಇಲ್ಲ. ಅಗತ್ಯವಿದ್ದರೆ ತಕ್ಷಣ ಗೋಶಾಲೆಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಚ್.ಕೆ. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ್ ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕಚೇರಿಯಲ್ಲಿ ಕುಳಿತು ವರದಿ ತಯಾರಿಸಬೇಡಿ; ಜಮೀನಿಗೆ ಹೋಗಿ ರೈತರ ಸಮ್ಮುಖದಲ್ಲೇ ವಾಸ್ತವ ಸ್ಥಿತಿ ಪರಿಶೀಲಿಸಿ. ನಿರ್ಲಕ್ಷ್ಯ ತೋರಿದರೆ ಶಿಸ್ತುಕ್ರಮ ಅನಿವಾರ್ಯ.”

– ಸಚಿವ ಬಸವರಾಜ ರಾಯರೆಡ್ಡಿ, ಉಸ್ತುವಾರಿ ಸಚಿವ

NEET ಅಭ್ಯರ್ಥಿಗಳೇ ಗಮನಿಸಿ! ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ, ವಿದ್ಯಾರ್ಥಿಗಳು ಏನು ಮಾಡಬೇಕು?

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಆಯ್ಕೆ ದಾಖಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದಿನಿಂದ ಆರಂಭಿಸಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಮಾಹಿತಿ ಪ್ರಕಾರ, ಆಗಸ್ಟ್ 13ರವರೆಗೆ ಅಭ್ಯರ್ಥಿಗಳಿಗೆ ಆದ್ಯತಾ ಕ್ರಮದಲ್ಲಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ.

ಇಂಜಿನಿಯರಿಂಗ್ ಸೇರಿದಂತೆ ಇತರೆ ಸಿಇಟಿ ಕೋರ್ಸ್‌ಗಳಿಗೆ ಈಗಾಗಲೇ ಆಪ್ಷನ್ಸ್ ದಾಖಲಿಸಿರುವ ಅಭ್ಯರ್ಥಿಗಳಿಗೂ ಹೊಸದಾಗಿ ಆಪ್ಷನ್ ಸೇರಿಸಲು, ಬದಲಾಯಿಸಲು ಅಥವಾ ತೆಗೆದುಹಾಕಲು ಇದೇ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ.

ಸೀಟ್ ಮ್ಯಾಟ್ರಿಕ್ಸ್, ಶುಲ್ಕ ವಿವರ ಪ್ರಕಟ:

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಫಾರ್ಮಸಿ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಮಾಹಿತಿಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸುವಂತೆ ಕೆಇಎ ಸೂಚಿಸಿದೆ.

ಆಯುಷ್ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ಇನ್ನೂ ಪ್ರಕಟವಾಗದ ಕಾರಣ, ಆ ಕೋರ್ಸ್‌ಗಳಿಗೆ ಸದ್ಯಕ್ಕೆ ಆಪ್ಷನ್ ದಾಖಲಿಸಲು ಅವಕಾಶ ನೀಡಲಾಗಿಲ್ಲ ಎಂದು ಕೆಇಎ ತಿಳಿಸಿದೆ.

ದಾಖಲೆ ಪರಿಶೀಲನೆಗೆ ಅವಕಾಶ:

ಇದುವರೆಗೆ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳು ಶನಿವಾರವೂ ಕೆಇಎ ಕಚೇರಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬಹುದು. ಬಳಿಕ ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಂಡು ಆಪ್ಷನ್ಸ್ ದಾಖಲಿಸಬಹುದು ಎಂದು ತಿಳಿಸಲಾಗಿದೆ.

ಪ್ರಕ್ರಿಯೆಯಿಂದ ಹೊರಗುಳಿದವರಿಗೂ ಅವಕಾಶ:

ಚಾಯ್ಸ್-4 ದಾಖಲಿಸಿ ಪ್ರಕ್ರಿಯೆಯಿಂದ ಹೊರಬಂದಿರುವ ಅಭ್ಯರ್ಥಿಗಳು ಹಾಗೂ ಮೊದಲ ಸುತ್ತಿನಲ್ಲಿ ಸೀಟ್ ಹಂಚಿಕೆಯಾದ ಬಳಿಕ ಯಾವುದೇ ಚಾಯ್ಸ್ ದಾಖಲಿಸದ ಅಭ್ಯರ್ಥಿಗಳಿಗೂ ಮತ್ತೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಸೇರಲು ಅವಕಾಶ ನೀಡಲಾಗಿದೆ.

ಇದಕ್ಕಾಗಿ ಅಭ್ಯರ್ಥಿಗಳು ₹750 ಶುಲ್ಕ ಪಾವತಿಸಿ ಮತ್ತೆ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಕೆಇಎ ತಿಳಿಸಿದೆ.

ಸಾಲ ಮನ್ನಾ ಮಾಡಿ ರೈತರನ್ನು ಉಳಿಸಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ತೀವ್ರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವರದಾಪುರ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಖಿಲ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆಯಾದ ಬೆಳೆಗಳು ಹಾನಿಗೊಳಗಾಗಿದ್ದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ತೀವ್ರ ಕೊರತೆ ಎದುರಾಗಿದೆ. ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದು, ಹಗರಿಬೊಮ್ಮನಹಳ್ಳಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ಹಾನಿಯ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಬಡ್ಡಿ ಮನ್ನಾ ಹಾಗೂ ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು, ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು, ಗ್ರಾಮೀಣ ಕೂಲಿ ಕಾರ್ಮಿಕರಿಗೆ ನರೇಗಾ ಸೇರಿದಂತೆ ಉದ್ಯೋಗ ಖಾತರಿ ಯೋಜನೆಯಡಿ ನಿರಂತರ ಕೆಲಸ ನೀಡುವುದು ಹಾಗೂ ಮುಂದಿನ ಕೃಷಿ ಹಂಗಾಮಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ಸಹಾಯಧನದಲ್ಲಿ ವಿತರಿಸಬೇಕು ಎಂದು ಸಂಘ ಒತ್ತಾಯಿಸಿತು.

ತೋಟಗಾರಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಉಂಟಾದ ನಷ್ಟವನ್ನು ಪರಿಗಣಿಸಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿಗಳಾದ ಕವಿತಾ ಮನ್ನಿಕೇರಿ, ಕೃಷಿ ಇಲಾಖೆ ಅಧಿಕಾರಿಗಳು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ, ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ, ತಾಲೂಕು ಅಧ್ಯಕ್ಷ ಶಿಗೇನಹಳ್ಳಿ ಬಸವರಾಜ್, ಜಿಲ್ಲಾ ಉಪಾಧ್ಯಕ್ಷ ಬಿ. ಕುಬೇರ, ಯಮನೂರಪ್ಪ ವರದಾಪುರ, ಸೋಮು ತಳವಾರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಬರ ನಿರ್ವಹಣೆಗೆ ಅಧಿಕಾರಿಗಳು ಸಜ್ಜಾಗಲಿ: ಸಚಿವ ಬಸವರಾಜ ರಾಯರೆಡ್ಡಿ

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಂಡು ಹೆಚ್ಚು ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಸಂಪುಟ ದರ್ಜೆ ಸಚಿವ ಬಸವರಾಜ ರಾಯರೆಡ್ಡಿ ಸೂಚಿಸಿದರು.

ತಾಲೂಕು ಕಚೇರಿಯಲ್ಲಿ ಶುಕ್ರವಾರ ನಡೆದ ಬರ ಪರಿಸ್ಥಿತಿ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ನಿರ್ವಹಣೆಯನ್ನು ಕೇವಲ ಕಾಗದದ ವರದಿಗಳಿಗೆ ಸೀಮಿತಗೊಳಿಸದೆ, ಗ್ರಾಮಗಳಿಗೆ ತೆರಳಿ ರೈತರ ಜಮೀನುಗಳಲ್ಲಿ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ಇದಕ್ಕೂ ಮುನ್ನ ಮೇವುಂಡಿ ಗ್ರಾಮಕ್ಕೆ ಭೇಟಿ ನೀಡಿ ಮೆಣಸಿನಕಾಯಿ, ಈರುಳ್ಳಿ ಹಾಗೂ ಮೆಕ್ಕೆಜೋಳ ಬೆಳೆಗಳ ಸ್ಥಿತಿಯನ್ನು ವೀಕ್ಷಿಸಿದ ಸಚಿವರು, ರೈತರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.

ಪ್ರಸ್ತುತ ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ ಗದಗ ಜಿಲ್ಲೆಯನ್ನು ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಬರಪೀಡಿತ ಜಿಲ್ಲೆ ಎಂದು ಘೋಷಿಸುವ ಸಾಧ್ಯತೆಗಳಿದ್ದು, ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಧಿಕಾರಿಗಳ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಬಿತ್ತನೆ ಗುರಿ” ಮತ್ತು “ಸಾಧನೆ” ಎಂಬ ಪದಗಳ ಬದಲಿಗೆ “ವಾಡಿಕೆ ಬಿತ್ತನೆ” ಹಾಗೂ “ವಾಡಿಕೆಗೆ ಹೋಲಿಸಿದ ಬಿತ್ತನೆ” ಎಂಬ ಪದಗಳನ್ನು ಬಳಸುವಂತೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ, ಮೇವು ಸಂಗ್ರಹ, ಬೆಳೆ ವಿಮೆ ಹಾಗೂ ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು. ಅರ್ಹ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

“ಬರವನ್ನು ಕಾಗದದ ವರದಿಯಿಂದ ಅಂದಾಜಿಸಬೇಡಿ, ಗ್ರಾಮಗಳಿಗೆ ತೆರಳಿ ರೈತರ ಸಮಸ್ಯೆ ಅರಿತು ತುರ್ತು ಕ್ರಮ ಕೈಗೊಳ್ಳಿ.”

– ಬಸವರಾಜ ರಾಯರೆಡ್ಡಿ, ಉಸ್ತುವಾರಿ ಸಚಿವ

ಕೊಡಗಿನಲ್ಲಿ ಹೃದಯವಿದ್ರಾವಕ ಘಟನೆ: ಶಾಲಾ ಗೇಟ್ ಕುಸಿದು 4 ವರ್ಷದ ಮಗು ಸಾವು!

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ.

ಮೃತ ಮಗುವನ್ನು ಅಪೂರ್ವ ಎಂದು ಗುರುತಿಸಲಾಗಿದೆ. ಆಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಮಗಳ ಸಾವಿನಿಂದ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ.

ಮಾಹಿತಿ ಪ್ರಕಾರ, ಮಗು ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಗೇಟ್ ಏಕಾಏಕಿ ಕುಸಿದು ಬಿದ್ದಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆ ಬಳಿಕ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಆವರಣದ ಸುರಕ್ಷತೆ ಬಗ್ಗೆ ಸಾರ್ವಜನಿಕರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಘಟನೆ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Karnataka Weather Update: ಆಗಸ್ಟ್ 13ರವರೆಗೆ ರಾಜ್ಯದಲ್ಲಿ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಆಗಸ್ಟ್ 13ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬೆಂಗಳೂರಿಗೆ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ.

ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:

ಆಗಸ್ಟ್ 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 9ರಿಂದ 13ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹಾಗೂ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಕೊಡಗು ಜಿಲ್ಲೆಯ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಮಳೆ ಹಾಗೂ ಗಾಳಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿಯಲ್ಲಿ ಮತ್ತೆ ಗುಂಡಿನ ಸದ್ದು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿಕ್ಕಿ ಹತ್ಯೆ !

0

ಉಡುಪಿ: ಕರಾವಳಿ ಭಾಗದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಈ ಘಟನೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದರು.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಹಂತಕರಿಗಾಗಿ ಪೊಲೀಸರ ಹುಡುಕಾಟ:

ಡೇವಿಡ್ ಡಿಸೋಜಾ ಅವರ ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ, ಹಣಕಾಸಿನ ವ್ಯವಹಾರ ಸೇರಿದಂತೆ ಹಲವು ಕಾರಣಗಳಿರುವ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಉಡುಪಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು ಮತ್ತೊಂದು ಶೂಟೌಟ್:

ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಮತ್ತೊಂದು ಗುಂಡಿನ ದಾಳಿ ಪ್ರಕರಣ ನಡೆದಿತ್ತು.

ಕುಂದಾಪುರದ ಹೋಲಿ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಉದ್ಯಮಿ ಐವನ್ ರೀಚರ್ಡ್ ಮಸ್ಕರೇನಸ್ (45) ಅವರನ್ನು ಡೆರಿಕ್ ಎಂಬಾತ ನಾಡಪಿಸ್ತೂಲಿನಿಂದ ಗುಂಡಿಕ್ಕಿ ಕೊಲೆ ಮಾಡಿದ್ದ.

ಐವನ್ ಅವರು 27 ಲಕ್ಷ ರೂಪಾಯಿ ಹಣ ವಸೂಲಿ ಮಾಡಿಕೊಟ್ಟಿದ್ದರು. ಆದರೆ ಅವರಿಗೆ ನೀಡಬೇಕಿದ್ದ 1.5 ಲಕ್ಷ ರೂಪಾಯಿ ಬಾಕಿ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. ಇದೇ ವಿಚಾರ ಕೊಲೆಯಲ್ಲಿ ಅಂತ್ಯವಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

ಈ ಪ್ರಕರಣದ ಆರೋಪಿ ಡೆರಿಕ್ ಪತ್ತೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.

ಕರಾವಳಿಯಲ್ಲಿ ಆತಂಕ:

ಉಡುಪಿ ಜಿಲ್ಲೆಯಲ್ಲಿ ಪದೇಪದೇ ನಡೆಯುತ್ತಿರುವ ಗುಂಡಿನ ದಾಳಿ ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಇದೀಗ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್ ನಿವಾಸಗಳ ಮೇಲೆ ED ದಾಳಿ

ಬೆಳಗಾವಿ: ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಕಂಪನಿ ಮಾಲೀಕ ಶಿವಾನಂದ ನೀಲಣ್ಣನವರ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ.

40 ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಳಗಾವಿಯ ಮೂರು ಪ್ರಮುಖ ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಮಂಗಳೂರು ಹಾಗೂ ಗೋವಾದಿಂದ ಆಗಮಿಸಿದ ಇಡಿ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶಿವಾನಂದ ನೀಲಣ್ಣನವರ್ ಅವರಿಗೆ ಸೇರಿದ ಬೆಳಗಾವಿಯ ಶಿವಬಸವನಗರದಲ್ಲಿರುವ ಎಂ.ಎಸ್. ಟವರ್ ಅಪಾರ್ಟ್‌ಮೆಂಟ್, ಬಡಕುಂದ್ರಿ ಗ್ರಾಮದ ನಿವಾಸ ಹಾಗೂ ಚಿಕ್ಕೋಡಿ ಪಟ್ಟಣದಲ್ಲಿರುವ ಅವರ ವ್ಯವಹಾರ ಪಾಲುದಾರ ಸುಭಾಷ್ ನಂದರಗಿ ಅವರ ಮನೆ ಮೇಲೆ ಶೋಧ ನಡೆಸಲಾಗಿದೆ.

ದಾಳಿ ವೇಳೆ ಇಡಿ ಅಧಿಕಾರಿಗಳು ಶಿವಾನಂದ ನೀಲಣ್ಣನವರ್ ಹಾಗೂ ಅವರ ಪತ್ನಿ ಸಂಗೀತಾ ಅವರನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

2,400 ಕೋಟಿ ಸಂಗ್ರಹ ಆರೋಪ:

ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ಸ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ಬಳಿಕ ಮೇ 15ರಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಂಪನಿ ಕಚೇರಿ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿತ್ತು.

ಅಕ್ರಮವಾಗಿ ಠೇವಣಿ ಸಂಗ್ರಹ ಹಾಗೂ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ಸಂಗ್ರಹಿಸಿದ ಆರೋಪದಡಿ ಶಿವಾನಂದ ನೀಲಣ್ಣನವರ್ ಅವರನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಸುಮಾರು ₹2,400 ಕೋಟಿ ಹಣವನ್ನು 40,700ಕ್ಕೂ ಹೆಚ್ಚು ಜನರಿಂದ ಸಂಗ್ರಹಿಸಿರುವುದು ಬೆಳಕಿಗೆ ಬಂದಿತ್ತು.

ಈ ಹಣದಲ್ಲಿ ಸುಮಾರು ₹540 ಕೋಟಿಯನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದು, ಅದರಲ್ಲಿ ಸುಮಾರು ₹170 ಕೋಟಿ ನಷ್ಟವಾಗಿದೆ ಎಂದು ಸಿಐಡಿ ತನಿಖೆಯಲ್ಲಿ ಮಾಹಿತಿ ನೀಡಲಾಗಿತ್ತು.

ಸಿಐಡಿ ಬಳಿಕ ED ತನಿಖೆ:

ಪ್ರಕರಣದ ತನಿಖೆಯನ್ನು ಬಳಿಕ ಸಿಐಡಿಗೆ ವಹಿಸಲಾಗಿತ್ತು. ಬಂಧನಕ್ಕೊಳಗಾಗಿದ್ದ ಶಿವಾನಂದ ನೀಲಣ್ಣನವರ್ ಪ್ರಸ್ತುತ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಇದೀಗ ಹಣಕಾಸು ಅಕ್ರಮ ವ್ಯವಹಾರಗಳ ಜಾಡು ಹಿಡಿದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.