ಮಂಗಳೂರು: ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿದ್ದೀರಿ ಎಂದು ಬೆದರಿಸಿ, ಪುತ್ತೂರಿನ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 1.31 ಕೋಟಿ ರೂಪಾಯಿ ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಹಾಗೂ ಭಯೋತ್ಪಾದನಾ ನಿಗ್ರಹ ದಳದ (ATS) ಅಧಿಕಾರಿಗಳ ಸೋಗಿನಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿ, ಬಂಧನದ ಭೀತಿ ಹುಟ್ಟಿಸಿ ಸೈಬರ್ ವಂಚಕರು ಈ ಕೃತ್ಯ ಎಸಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿವಾಸಿಯೊಬ್ಬರು ವಂಚನೆಗೆ ಒಳಗಾದವರು. ಆರೋಪಿಗಳು ತಮ್ಮನ್ನು ಮುಂಬೈ ಪೊಲೀಸ್ ಮತ್ತು ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ಕಳುಹಿಸಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ, ನಿರಂತರವಾಗಿ ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ಮಾನಸಿಕ ಒತ್ತಡ ಹೇರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬ್ಯಾಂಕ್ ಖಾತೆ ಪರಿಶೀಲನೆ ನೆಪದಲ್ಲಿ ಕೋಟಿ ಕೋಟಿ ಲೂಟಿ!
ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣ ನಡೆಸಬೇಕೆಂದು ನಂಬಿಸಿದ ವಂಚಕರು, ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ. ಬಂಧನದ ಭೀತಿಯಿಂದ ಆರೋಪಿಗಳ ಮಾತು ನಂಬಿದ ವ್ಯಕ್ತಿ, ಸೆಪ್ಟೆಂಬರ್ 2ರಿಂದ ಅಕ್ಟೋಬರ್ 6ರವರೆಗೆ ಹಂತ ಹಂತವಾಗಿ ಒಟ್ಟು 1,31,50,000 ರೂಪಾಯಿ ವರ್ಗಾಯಿಸಿದ್ದಾರೆ.
1930ಕ್ಕೆ ಕರೆ ಮಾಡಿ ದೂರು ದಾಖಲಿಸಿದ ಸಂತ್ರಸ್ತ!
ಬಳಿಕ ತಾವು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ಸಂತ್ರಸ್ತರು, ತಕ್ಷಣವೇ ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ ಬಂಧನದ ಬೆದರಿಕೆ ಹಾಕಿದರೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಯಾವುದೇ ತನಿಖೆಯ ಹೆಸರಿನಲ್ಲಿ ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಬಾರದು.

