ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜಾಮೀನು ಮಂಜೂರು ಮಾಡುವ ವೇಳೆ ವಿಧಿಸಲಾಗಿದ್ದ ‘ನ್ಯಾಯಾಲಯದ ವ್ಯಾಪ್ತಿಯನ್ನು ಅನುಮತಿ ಇಲ್ಲದೆ ಬಿಟ್ಟು ಹೋಗಬಾರದು’ ಎಂಬ ಷರತ್ತನ್ನು ಹೈಕೋರ್ಟ್ ಸಡಿಲಗೊಳಿಸಿ ಆದೇಶ ಹೊರಡಿಸಿದೆ.
ಈ ಮೂಲಕ ಬಿ.ಎಸ್. ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಬಾರಿ ನ್ಯಾಯಾಲಯದ ಅನುಮತಿ ಪಡೆಯದೇ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಳ್ಳಲು ಅವಕಾಶ ದೊರೆತಂತಾಗಿದೆ.
ಜಾಮೀನು ಷರತ್ತುಗಳಲ್ಲಿ ವಿಧಿಸಲಾಗಿದ್ದ ಸಂಚಾರ ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅವರ ಮನವಿಯನ್ನು ಪರಿಗಣಿಸಿ ನಿರ್ಬಂಧಿತ ಷರತ್ತನ್ನು ಸಡಿಲಗೊಳಿಸಿದೆ.
ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 2024ರ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹಳೆಯ ಪ್ರಕರಣವೊಂದಕ್ಕೆ ನ್ಯಾಯ ದೊರಕಿಸುವಂತೆ ಮನವಿ ಮಾಡಲು ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಬಾಲಕಿಯ ತಾಯಿ ದೂರಿನಲ್ಲಿ ಆರೋಪಿಸಿದ್ದರು.
ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದ್ದು, ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಯಡಿಯೂರಪ್ಪ ಅವರಿಗೆ ಇದೀಗ ಹೈಕೋರ್ಟ್ ಸಂಚಾರ ಸಂಬಂಧದ ಷರತ್ತು ಸಡಿಲಗೊಳಿಸಿರುವುದು ಗಮನಾರ್ಹವಾಗಿದೆ.


