Home Blog Page 42

SC/ST ಕಾಯ್ದೆ ದುರುಪಯೋಗಕ್ಕೆ ಅವಕಾಶವಿಲ್ಲ: ಕಂಪನಿ ಅಧಿಕಾರಿಗಳ ವಿರುದ್ಧದ FIR ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕಾರ್ಮಿಕ ಹಾಗೂ ಸಿವಿಲ್ ಸ್ವರೂಪದ ವಿವಾದಗಳಿಗೆ ಕ್ರಿಮಿನಲ್ ಪ್ರಕರಣದ ರೂಪ ನೀಡಿ, ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಭದ್ರಾವತಿಯ ಮಾಲ್ನಾಡ್ ಅಲೋಯ್ಸ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ಮಧುಕರ್ ಜೋಯಿಸ್ ಸೇರಿದಂತೆ ಐವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಸಂಬಂಧಿತ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಕಂಪನಿಯು ಶೋಕಾಸ್ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ಕೈಗೊಂಡಿದ್ದಕ್ಕೆ ಪ್ರತೀಕಾರವಾಗಿ ಆಡಳಿತ ಮಂಡಳಿಯ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು, ಜಾತಿ ನಿಂದನೆಯ ಘಟನೆ ಸಾರ್ವಜನಿಕರು ಇರುವ ಅಥವಾ ನೋಡಬಹುದಾದ ಸ್ಥಳದಲ್ಲಿ ನಡೆದಿರಬೇಕು ಎಂದು ಸುಪ್ರೀಂ ಕೋರ್ಟ್ ಹಲವು ತೀರ್ಪುಗಳಲ್ಲಿ ಸ್ಪಷ್ಟಪಡಿಸಿದೆ. ಆದರೆ, ಈ ಪ್ರಕರಣದಲ್ಲಿ ಆರೋಪಿತ ಘಟನೆ ಕಂಪನಿಯ ಕಚೇರಿಯ ನಾಲ್ಕು ಗೋಡೆಗಳ ಒಳಗೆ ನಡೆದಿದ್ದು, ಅಲ್ಲಿ ಸಾರ್ವಜನಿಕರು ಇರಲಿಲ್ಲ. ಆದ್ದರಿಂದ ಈ ಪ್ರಕರಣವು ಎಸ್‌ಸಿ/ಎಸ್‌ಟಿ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಿವಿಲ್ ಅಥವಾ ಸೇವಾ ಸಂಬಂಧಿತ ವಿವಾದಗಳಿಗೆ ಕ್ರಿಮಿನಲ್ ಸ್ವರೂಪ ನೀಡಿ ವಿಶೇಷ ಕಾಯ್ದೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೂರುದಾರರು ಮಾಡಿರುವ ಆರೋಪಗಳಲ್ಲಿ ಅಪರಾಧದ ಅಗತ್ಯ ಅಂಶಗಳು ಕಂಡುಬರದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣ ಹಾಗೂ ಮುಂದಿನ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ

ದೂರುದಾರ ರವಿ ಅವರು ಭದ್ರಾವತಿಯ ಮಾಲ್ನಾಡ್ ಅಲೋಯ್ಸ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸುಮಾರು 18 ವರ್ಷಗಳಿಂದ ಪ್ರೊಡಕ್ಷನ್ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ನಿರ್ಲಕ್ಷ್ಯದಿಂದ ಕಂಪನಿಗೆ ನಷ್ಟ ಉಂಟಾಗಿದೆ ಎಂದು ಆರೋಪಿಸಿ 2024ರ ಡಿಸೆಂಬರ್‌ನಲ್ಲಿ ಕಂಪನಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಬಳಿಕ ಆಂತರಿಕ ತನಿಖೆಗೆ ಆದೇಶಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಈ ಕ್ರಮವನ್ನು ಪ್ರಶ್ನಿಸಿ ರವಿ ಅವರು ಕೈಗಾರಿಕಾ ನ್ಯಾಯಾಧೀಕರಣದ ಮೊರೆ ಹೋಗಿ, ಶೋಕಾಸ್ ನೋಟಿಸ್ ರದ್ದುಪಡಿಸುವಂತೆ ಹಾಗೂ ಜಾತಿ ತಾರತಮ್ಯ ಮಾಡದಂತೆ ಕಂಪನಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಾಧೀಕರಣವು ಅವರ ಪರವಾಗಿ ಯಾವುದೇ ಏಕಪಕ್ಷೀಯ ಆದೇಶ ನೀಡಿರಲಿಲ್ಲ.

ಇದಾದ ಬಳಿಕ ರವಿ ಅವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಕಂಪನಿಯ ವ್ಯವಸ್ಥಾಪಕ ಮಧುಕರ್ ಜೋಯಿಸ್, ಕಾರ್ಯನಿರ್ವಾಹಕ ನಿರ್ದೇಶಕ ಪ್ರತೀಕ್ ಎಂ. ಜೋಯಿಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್. ಜಗದೀಶ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ಇನ್ನಿಬ್ಬರು ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಈ ಎಫ್‌ಐಆರ್ ಅನ್ನು ಪ್ರಶ್ನಿಸಿ ಕಂಪನಿ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಎಫ್‌ಐಆರ್ ಹಾಗೂ ಸಂಬಂಧಿತ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಶಾರ್ಟ್ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಜವಳಿ ಅಂಗಡಿ; ಲಕ್ಷಾಂತರ ರೂ. ನಷ್ಟ!

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಗೆ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಚಿಕ್ಕೋಡಿ ಪೇಟೆಯಲ್ಲಿರುವ ಜಯಶ್ರೀ ಗಾರ್ಮೆಂಟ್ಸ್‌ನಲ್ಲಿ ರಾತ್ರಿ ವೇಳೆ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಇದರಿಂದ ಬೆಂಕಿ ಕಾಣಿಸಿಕೊಂಡಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಅಂಗಡಿಗೆ ವ್ಯಾಪಿಸಿದ್ದು, ಕಟ್ಟಡ ದಟ್ಟ ಹೊಗೆಯಿಂದ ಆವರಿಸಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಮೂರು ಅಗ್ನಿಶಾಮಕ ವಾಹನಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಯಿತು.

ಸಾರ್ವಜನಿಕರ ಸಹಕಾರದೊಂದಿಗೆ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು. ಆದರೆ ಬೆಂಕಿಗೆ ಅಂಗಡಿಯಲ್ಲಿದ್ದ ಬಟ್ಟೆಗಳು ಹಾಗೂ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ! ಮೂಟೆ ಎಸೆದು ಖದೀಮರ ಪ್ಲ್ಯಾನ್ ಫೇಲ್ ಮಾಡಿದ ಕಾರ್ಮಿಕ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಹಾಡಹಗಲೇ ಯುವಕನೊಬ್ಬನ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಖದೀಮರು, ಕಾರ್ಮಿಕನ ಸಮಯಪ್ರಜ್ಞೆಯಿಂದ ತಮ್ಮ ಪ್ಲಾನ್‌ನಲ್ಲಿ ವಿಫಲರಾಗಿರುವ ಘಟನೆ ಕಬ್ಬನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳು ಈಗ ವೈರಲ್ ಆಗಿವೆ.

ಬೆಂಗಳೂರು ನಗರದ ಹೃದಯಭಾಗವಾದ ಕಬ್ಬನ್‌ಪೇಟೆಯ 14ನೇ ಕ್ರಾಸ್‌ನಲ್ಲಿ ಇದೇ ತಿಂಗಳ 16ರಂದು ಈ ಘಟನೆ ನಡೆದಿದೆ. ಸಂಜೆ ವೇಳೆಯಲ್ಲಿ ಯುವಕನೊಬ್ಬ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಖದೀಮರು ಆತನನ್ನು ಹಿಂಬಾಲಿಸಿದ್ದಾರೆ.

ಯುವಕನ ಚಲನವಲನಗಳನ್ನು ಕೆಲ ಹೊತ್ತು ಗಮನಿಸಿದ ಕಳ್ಳರು, ಸೂಕ್ತ ಸಮಯ ನೋಡಿ ಆತನ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕ್ಷಣಾರ್ಧದಲ್ಲಿ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ.

ಮೊಬೈಲ್ ಕಳುವಾಗಿರುವುದನ್ನು ಗಮನಿಸಿದ ಯುವಕ ಕೂಡಲೇ “ಮೊಬೈಲ್ ಕಳ್ಳರು… ಮೊಬೈಲ್ ಕಳ್ಳರು…” ಎಂದು ಕೂಗುತ್ತಾ ಆರೋಪಿಗಳ ಹಿಂದೆ ಓಡಿದ್ದಾನೆ. ಈ ವೇಳೆ ಅಲ್ಲೇ ಕೆಲಸ ಮುಗಿಸಿಕೊಂಡು ಬರುತ್ತಿದ್ದ ಕಾರ್ಮಿಕನೊಬ್ಬ ಪರಿಸ್ಥಿತಿಯನ್ನು ಗಮನಿಸಿ ಸಮಯಪ್ರಜ್ಞೆ ಮೆರೆದಿದ್ದಾನೆ.

ತನ್ನ ಬಳಿ ಇದ್ದ ಮೂಟೆಯನ್ನು ಆರೋಪಿಗಳು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದತ್ತ ಎಸೆದಿದ್ದಾನೆ. ಇದರಿಂದ ಬೈಕ್‌ನ ನಿಯಂತ್ರಣ ಕಳೆದುಕೊಂಡ ಆರೋಪಿಗಳು ರಸ್ತೆಗೆ ಬಿದ್ದಿದ್ದಾರೆ.

ಬೈಕ್‌ನಿಂದ ಕೆಳಗೆ ಬಿದ್ದ ಬಳಿಕ ಆರೋಪಿಗಳು ಕದ್ದಿದ್ದ ಮೊಬೈಲ್ ಫೋನ್‌ನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪರಿಣಾಮ ಯುವಕ ತನ್ನ ಮೊಬೈಲ್ ಅನ್ನು ಮರಳಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.

ಇಡೀ ಘಟನೆ ಸಮೀಪದ ಕಟ್ಟಡವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಸ್ನ್ಯಾಚಿಂಗ್ ಪ್ರಕರಣಗಳ ಬಗ್ಗೆ ಮತ್ತೆ ಆತಂಕ ಮೂಡಿಸಿದೆ.

ಸ್ಥಳೀಯರು ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಬಳಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದು ಗಾರೆ ಕಾರ್ಮಿಕ ಸಾವು!

 

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 58 ವರ್ಷದ ರಾಜು ಎಂಬವರು ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು ನಗರದ ಮಂಗನಹಳ್ಳಿ ಕ್ರಾಸ್‌ನಲ್ಲಿ ನಿನ್ನೆ ಸಂಜೆ ಸುಮಾರು 6 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ರಾಜು ಎಂಬ 58 ವರ್ಷದ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ರಾಜು ರಸ್ತೆಗೆ ಬಿದ್ದಿದ್ದು, ಬಳಿಕ ಬಸ್ ಅವರ ಮೇಲೆಯೇ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿದರೂ, ರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತ ರಾಜು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಪ್ರತಿದಿನದಂತೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತಕ್ಕೆ ಕಾರಣವಾದ ಬಸ್ ಹಾಗೂ ಅದರ ಚಾಲಕನ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಅಡ್ಡ ಮತದಾನ ಆಗುತ್ತದೆ ಎಂಬುದು ಮೊದಲೇ ಗೊತ್ತಿತ್ತು: HD ಕುಮಾರಸ್ವಾಮಿ!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಡ್ಡ ಮತದಾನ ನಡೆಯುವ ಸಾಧ್ಯತೆ ಬಗ್ಗೆ ತಮಗೆ ಮೊದಲೇ ಮಾಹಿತಿ ಇತ್ತು ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಯಾದ ನಂಬಿಕೆಯೇ ಪಕ್ಷಕ್ಕೆ ಆಘಾತ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪರಿಷತ್ ಚುನಾವಣೆಯ ಫಲಿತಾಂಶದಿಂದ ಪಾಠ ಕಲಿತಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯುವಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಪಕ್ಷದ ಭವಿಷ್ಯದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರನ್ನು ಪ್ರಸ್ತಾಪಿಸಲು ನಿರಾಕರಿಸಿದರು. ಮಾಧ್ಯಮ ಪ್ರತಿನಿಧಿಗಳು ಜಿಟಿ ದೇವೇಗೌಡ ಅವರ ಹೆಸರನ್ನು ಪ್ರಸ್ತಾಪಿಸಿದಾಗ, “ಅವರ ಹೆಸರು ಎತ್ತಬೇಡಿ” ಎಂದು ಪ್ರತಿಕ್ರಿಯಿಸಿದರು. ಕಳೆದ ಒಂದೂವರೆ ವರ್ಷದಿಂದ ಅವರ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಇತ್ತೀಚೆಗೆ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಸಭೆಯಲ್ಲಿಯೂ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಆಂತರಿಕ ವಿಚಾರಗಳಿಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ತಾವೇ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದರು. ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಜಯಗಳಿಸಿದ್ದು, ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದು, ಪಕ್ಷದ ಕೆಲ ಶಾಸಕರು ಅಡ್ಡ ಮತದಾನ ನಡೆಸಿದ್ದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಬಸ್ ಶೆಲ್ಟರ್ ಮೇಲೆ ಬಿದ್ದ ಬೃಹತ್ ಅರಳಿ ಮರದ ಕೊಂಬೆ: ತಪ್ಪಿದ ಭಾರೀ ದುರಂತ!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬಳಿ ಭಾರೀ ಅವಘಡವೊಂದು ಸಂಭವಿಸಿದೆ.

ಬೃಹತ್ ಅರಳಿ ಮರದ ಕೊಂಬೆಯೊಂದು ಬಸ್ ತಂಗುದಾಣದ ಮೇಲೆ ಬಿದ್ದ ಪರಿಣಾಮ ಬಸ್ ಶೆಲ್ಟರ್ ಸಂಪೂರ್ಣ ಜಖಂಗೊಂಡಿದ್ದು, ಸಮೀಪದಲ್ಲಿದ್ದ ಬೈಕ್‌ಗೂ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆ ವೇಳೆ ಬಸ್ ನಿಲ್ದಾಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ದೇವಾಲಯದ ಸಮೀಪವಿರುವ ಬಸ್ ತಂಗುದಾಣದ ಮೇಲೆ ಸುಮಾರು 100 ವರ್ಷಗಳಷ್ಟು ಹಳೆಯದಾದ ಬೃಹತ್ ಅರಳಿ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದಿದೆ.

ಕೊಂಬೆ ಬಿದ್ದ ರಭಸಕ್ಕೆ ಬಸ್ ಶೆಲ್ಟರ್ ಸಂಪೂರ್ಣ ಧ್ವಂಸಗೊಂಡಿದ್ದು, ಅಲ್ಲೇ ನಿಲ್ಲಿಸಲಾಗಿದ್ದ ಬೈಕ್ ಕೂಡ ಹಾನಿಗೊಳಗಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಅಥವಾ ಭಕ್ತರು ಇಲ್ಲದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಸ್ಥಳೀಯರ ಪ್ರಕಾರ, ಕಳೆದ ಮಂಗಳವಾರವೂ ಇದೇ ಮರದ ಮತ್ತೊಂದು ಕೊಂಬೆ ಮುರಿದು ಬಿದ್ದಿತ್ತು. ಆದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಮರದ ಕೊಂಬೆಗಳು ದುರ್ಬಲಗೊಂಡು ಮುರಿದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಭಕ್ತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ಸ್ಥಿತಿಯಲ್ಲಿರುವ ಹಳೆಯ ಮರಗಳ ಕೊಂಬೆಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಸ್ಥಳೀಯರು, ಮತ್ತೊಂದು ಅವಘಡ ಸಂಭವಿಸುವ ಮುನ್ನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ; ತೈಲ ಸಂಸ್ಕರಣಾಗಾರಕ್ಕೆ ಹಾನಿ!

0

ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಮತ್ತೊಮ್ಮೆ ಮಾಸ್ಕೋ ಮೇಲೆ ಡ್ರೋನ್ ದಾಳಿ ನಡೆಸಿದೆ.

ಈ ವಾರದಲ್ಲೇ ಎರಡನೇ ಬಾರಿಗೆ ಉಕ್ರೇನಿಯನ್ ಡ್ರೋನ್‌ಗಳು ಮಾಸ್ಕೋದ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಇದೇ ವೇಳೆ ರಷ್ಯಾ ಉಕ್ರೇನ್ ರಾಜಧಾನಿ ಕೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುದ್ಧ ಅಂತ್ಯಗೊಳಿಸುವ ಉದ್ದೇಶದಿಂದ ಅಮೆರಿಕ ಮತ್ತು ಯುರೋಪಿನ ರಾಷ್ಟ್ರಗಳ ಬೆಂಬಲ ಕೋರುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.

ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಾರ, ಕಳೆದ ರಾತ್ರಿ ವಿವಿಧ ಪ್ರದೇಶಗಳಲ್ಲಿ ಉಡಾಯಿಸಲಾದ 555 ಉಕ್ರೇನಿಯನ್ ಡ್ರೋನ್‌ಗಳನ್ನು ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಮಾಸ್ಕೋ ನಗರವನ್ನು ಗುರಿಯಾಗಿಸಿಕೊಂಡು ಬಂದ ಸುಮಾರು 200 ಡ್ರೋನ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಮಾಸ್ಕೋ ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಅವರು, ಹಲವು ಡ್ರೋನ್‌ಗಳು ನಗರದ ತೈಲ ಸಂಸ್ಕರಣಾಗಾರಕ್ಕೆ ಅಪ್ಪಳಿಸಿದ್ದು, ಘಟನೆಯ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಯುದ್ಧ ಅಂತ್ಯಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ನಡುವೆಯೇ ಉಭಯ ರಾಷ್ಟ್ರಗಳು ಪರಸ್ಪರ ದಾಳಿ ಮುಂದುವರಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.

ಕಾವೇರಿ ಕೊಳ್ಳದಲ್ಲಿ ನೀರಿನ ಕೊರತೆ; ಬೆಂಗಳೂರು-ಮೈಸೂರು ಜನರಿಗೆ ಕುಡಿಯುವ ನೀರಿನ ಚಿಂತೆ!

ಮಡಿಕೇರಿ: ರಾಜ್ಯದಲ್ಲಿ ಮಳೆ ಕೊರತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿದ್ದು, ಜಲಸಂಕಷ್ಟದ ಆತಂಕ ಮೂಡಿಸಿದೆ.

ಧಾರಾಕಾರ ಮಳೆಯ ನಿರೀಕ್ಷೆಯಲ್ಲಿದ್ದ ಕೊಡಗು ಜಿಲ್ಲೆಯ ಕಾವೇರಿ ಕೊಳ್ಳದಲ್ಲಿ ಮಳೆ ಅಭಾವ ಕಂಡುಬಂದಿದ್ದು, ಕೊಡಗು-ಮೈಸೂರು ಗಡಿಯಲ್ಲಿರುವ ಕೊಪ್ಪ ಸೇತುವೆ ಬಳಿ ಕಾವೇರಿ ನದಿಯ ನೀರಿನ ಮಟ್ಟ ತೀವ್ರವಾಗಿ ಇಳಿಕೆಯಾಗಿದೆ. ಸಾಮಾನ್ಯವಾಗಿ 10ರಿಂದ 15 ಅಡಿ ನೀರು ಹರಿಯುವ ಪ್ರದೇಶದಲ್ಲಿ ಇದೀಗ ಕೇವಲ ಅರ್ಧ ಅಡಿಯಿಂದ ಒಂದು ಅಡಿ ನೀರು ಮಾತ್ರ ಹರಿಯುತ್ತಿರುವುದು ಕಂಡುಬಂದಿದೆ.

ನದಿಯ ಒಡಲು ಕಲ್ಲುಗಳಿಂದ ಆವೃತವಾಗಿದ್ದು, ಜಲಮಾಪಕದಲ್ಲಿ ನೀರಿನ ಮಟ್ಟ ಶೂನ್ಯಕ್ಕೆ ತಲುಪಿರುವುದು ಆತಂಕಕ್ಕೆ ಕಾರಣವಾಗಿದೆ. ಕಾವೇರಿ ಕೊಳ್ಳದಲ್ಲಿ ಸಮರ್ಪಕ ಮಳೆಯಾಗದಿರುವುದೇ ಈ ಸ್ಥಿತಿಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಈ ಬೆಳವಣಿಗೆಯಿಂದ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು ಸೇರಿದಂತೆ ಕಾವೇರಿ ನೀರನ್ನು ಅವಲಂಬಿಸಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಭೀತಿ ಎದುರಾಗಿದೆ.

ಕಾವೇರಿ ನೀರಾವರಿ ವ್ಯವಸ್ಥೆಯ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್ ಹಾಗೂ ಹಾರಂಗಿ ಜಲಾಶಯಗಳಲ್ಲಿಯೂ ನೀರಿನ ಸಂಗ್ರಹ ಕಡಿಮೆಯಿದ್ದು, ಮುಂದಿನ ದಿನಗಳಲ್ಲಿ ಜಲಸಂಕಷ್ಟ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

 

ವಿಷ ಸೇವಿಸಿ ಮುಖ್ಯ ಶಿಕ್ಷಕ ಆತ್ಮಹತ್ಯೆ ಪ್ರಕರಣ: 10 ಮಂದಿ ವಿರುದ್ಧ ದಾಖಲಾಯ್ತು ಎಫ್‌ಐಆರ್!

ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಶಿಕ್ಷಕರು, ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ, ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಹಾಗೂ ಇತರರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಉಲ್ಲೇಖಿಸಿರುವಂತೆ, ಕಳೆದ 10 ತಿಂಗಳಿನಿಂದ ಕೊಕ್ಕನೂರು ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಯಪ್ಪ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಪರಿಶಿಷ್ಟ ಜಾತಿಗೆ ಸೇರಿದ ಕಾರಣ ಜಾತಿ ನಿಂದನೆ ಮಾಡಲಾಗುತ್ತಿತ್ತು ಎಂದು ಜಯಪ್ಪ ಹಲವು ಬಾರಿ ತಮ್ಮ ಪತ್ನಿಗೆ ತಿಳಿಸಿದ್ದರೆಂದು ಆರೋಪಿಸಲಾಗಿದೆ.

ಶಾಲೆಯಲ್ಲಿ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯ ಶಿಕ್ಷಕರ ನಡುವೆ ಮನಸ್ತಾಪ ಉಂಟಾಗಿದ್ದ ಹಿನ್ನೆಲೆಯಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಇದೇ ವೇಳೆ ಶಾಲೆಯ ಶೌಚಾಲಯಕ್ಕೆ ತೆರಳಿದ ಜಯಪ್ಪ ವಿಷ ಸೇವಿಸಿದ್ದರು ಎನ್ನಲಾಗಿದೆ.

ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಘಟನೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರಿಗೆ ಹವಾಮಾನ ತಜ್ಞರ ಭರವಸೆ!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಲಿದೆ ಎಂಬ ವದಂತಿಗಳ ನಡುವೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ರೈತರಿಗೆ ನೆಮ್ಮದಿ ನೀಡುವ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ತೀವ್ರ ಬರಗಾಲ ಉಂಟಾಗುವುದಿಲ್ಲ ಮತ್ತು ಕೃಷಿ ಚಟುವಟಿಕೆಗಳಿಗೆ ಗಮನಾರ್ಹ ತೊಂದರೆಯಾಗುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ, ರಾಜ್ಯದಲ್ಲಿ ಭೀಕರ ಬರಗಾಲ ಬರುತ್ತದೆ ಹಾಗೂ ಶೇಕಡಾ 64ರಷ್ಟು ಮಳೆ ಕೊರತೆಯಾಗುತ್ತದೆ ಎಂಬ ಮಾತುಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ. ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಶೇಕಡಾ 4ರಿಂದ 8ರಷ್ಟು ಮಳೆ ಕೊರತೆ ಸಂಭವಿಸುವ ಸಾಧ್ಯತೆ ಇದ್ದರೂ, ಅದು ಕೃಷಿಗೆ ದೊಡ್ಡ ಮಟ್ಟದ ಸಮಸ್ಯೆ ಉಂಟುಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

1964-65ರಲ್ಲಿ ದೇಶದಲ್ಲಿ ಶೇಕಡಾ 28ರಷ್ಟು ಮಳೆ ಕೊರತೆಯಾಗಿದ್ದ ಸಂದರ್ಭದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗಿನ ಪರಿಸ್ಥಿತಿ ಅದಕ್ಕಿಂತ ಭಿನ್ನವಾಗಿದ್ದು, ಅಷ್ಟು ದೊಡ್ಡ ಪ್ರಮಾಣದ ಮಳೆ ಕೊರತೆ ಸಂಭವಿಸುವ ಸಾಧ್ಯತೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಲ್ ನಿನೋ ಪ್ರಭಾವವು ನಾಲ್ಕು ವರ್ಷಗಳಿಗೊಮ್ಮೆ ಕಂಡುಬರುವ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದ್ದು, ಮಳೆಯ ಹಂಚಿಕೆ ಸಮರ್ಪಕವಾಗಿದ್ದರೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ರಾಜೇಗೌಡ ಹೇಳಿದ್ದಾರೆ. ಇದೇ ವೇಳೆ ವೆಸ್ಟರ್ನ್ ಡಿಸ್ಟರ್ಬೆನ್ಸ್ ಪ್ರಭಾವದಿಂದ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದಲ್ಲಿ ಬಿತ್ತನೆ ಕಾರ್ಯವೂ ಹೆಚ್ಚಾಗಿದೆ. ಕಳೆದ ಬಾರಿ 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದರೆ, ಈ ಬಾರಿ ಅದು 17 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಇದರಿಂದ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಪ್ರತಿಕ್ರಿಯಿಸಿ, ಕಳೆದ ವರ್ಷ ರಾಜ್ಯದಲ್ಲಿ ಸರಾಸರಿ ಶೇಕಡಾ 14ರಷ್ಟು ಅಧಿಕ ಮಳೆಯಾಗಿತ್ತು. ಆದರೆ ಈ ಬಾರಿ ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಸರಾಸರಿ ಶೇಕಡಾ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಮಳೆ ಕೊರತೆಯ ಸಾಧ್ಯತೆ ಇದ್ದರೂ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗುವ ಭೀತಿ ಇಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದು, ರೈತ ಸಮುದಾಯಕ್ಕೆ ಧೈರ್ಯ ತುಂಬಿದ್ದಾರೆ.