Home Blog Page 439

ಪೆಟ್ರೋಲ್-ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಇಳಿಕೆ: ಕೇಂದ್ರದ ಮಹತ್ವದ ನಿರ್ಧಾರ

0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂಪಾಯಿ ಇಳಿಸುವ ನಿರ್ಧಾರ ತೆಗೆದುಕೊಂಡಿದೆ.

ಗುರುವಾರ ತಡರಾತ್ರಿ ಪ್ರಕಟವಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂಪಾಯಿಯಿಂದ 3 ರೂಪಾಯಿಗೆ ಇಳಿಸಲಾಗಿದೆ. ಅದೇ ರೀತಿ, ಡೀಸೆಲ್ ಮೇಲಿನ ಸುಂಕವನ್ನು ಲೀಟರ್‌ಗೆ 10 ರೂಪಾಯಿಯಿಂದ ಶೂನ್ಯಕ್ಕೆ ಇಳಿಸಲಾಗಿದೆ.

ಇರಾನ್ ಮತ್ತು ಯುಎಸ್-ಇಸ್ರೇಲ್ ನಡುವಿನ ಸಂಘರ್ಷದಿಂದ ಉಂಟಾದ ಜಾಗತಿಕ ತೈಲ ಬಿಕ್ಕಟ್ಟು, ವಿಶೇಷವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಹಿನ್ನೆಲೆ, ಈ ನಿರ್ಧಾರಕ್ಕೆ ಕಾರಣವಾಗಿದೆ.

ಅಬಕಾರಿ ಸುಂಕ ಕಡಿತದಿಂದ ಕಚ್ಚಾ ತೈಲದ ಬೆಲೆ ಏರಿಕೆಯಿಂದ ನಷ್ಟ ಅನುಭವಿಸುತ್ತಿದ್ದ ತೈಲ ಕಂಪನಿಗಳಿಗೆ ಸ್ವಲ್ಪ ಪರಿಹಾರ ದೊರೆಯುವ ನಿರೀಕ್ಷೆ ಇದೆ. ಜೊತೆಗೆ, ಇಂಧನ ಬೆಲೆಗಳನ್ನು ನಿಯಂತ್ರಣದಲ್ಲಿ ಇಡುವುದು ಮತ್ತು ಗ್ರಾಹಕರಿಗೆ ಸಹಾಯ ಮಾಡುವುದೂ ಈ ಕ್ರಮದ ಉದ್ದೇಶವಾಗಿದೆ. ಆದರೆ, ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇದರ ನಡುವೆಯೇ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಪೂರೈಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದೆ. ಯಾವುದೇ ಕೊರತೆ ಇಲ್ಲದೆ, ಪೂರೈಕೆ ಸರಪಳಿ ಸರಾಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.

ದೇಶದ ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದೆ. ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನಿರಂತರ ಪೂರೈಕೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಹೆಚ್ಚುವರಿ ಬೇಡಿಕೆಯನ್ನು ಪೂರೈಸಲು ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ಕೂಡ ಹೆಚ್ಚಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ: ಯುವಕ ಸಾವು, ಗುಜರಿ ಗೋಡೌನ್ ಬೆಂಕಿಗಾಹುತಿ!

ಬೆಂಗಳೂರು: ಕಬ್ಬಿಣದ ಕಂಬಿ ಸಾಗಿಸ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಗರದ ಕುರುಬರಹಳ್ಳಿ ಬಳಿ ಜರುಗಿದೆ.

22 ವರ್ಷದ ಅಂಬದಾಸ್ ಮೃತ ಯುವಕ. ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರದಿಂದ ಸುಂಕದಕಟ್ಟೆಗೆ ಲಾರಿಯಲ್ಲಿ ಸ್ಟೀಲ್ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ರಾತ್ರಿ 1:30ರ ಸುಮಾರಿಗೆ ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದ. ಈ ವೇಳೆ ಕುರುಬರಹಳ್ಳಿ ಮುಖಾಂತರ ದಾರಿ ತೋರಿಸಿತ್ತು.

ಕುರುಬರಹಳ್ಳಿ ಬಳಿ ರಸ್ತೆ ಬಹುತೇಕವಾಗಿ ಇಳಿಜಾರಾಗಿತ್ತು. ಲಾರಿ ಓವರ್ ಲೋಡ್ ಆಗಿದ್ದರಿಂದ ಇಳಿಜಾರಿನಲ್ಲಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಕಾರು ಚಾಲಕ ಏರ್‌ಪೋರ್ಟ್ ಪಿಕ್‌ಅಪ್‌ಗಾಗಿ ಕಾಯುತ್ತಾ ನಿಂತಿದ್ದ. ಈ ವೇಳೆ ಲಾರಿ ಗುದ್ದಿದ ರಭಸಕ್ಕೆ ಕಾರನ್ನು 50 ರಿಂದ 100 ಮೀ ದೂರಕ್ಕೆ ಎಳೆದೊಯ್ದಿದೆ. ಪರಿಣಾಮ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.

ಲಾರಿ ಹಾಗೆಯೇ ಮುಂದೆ ಹೋಗಿ ಸ್ಕ್ರಾಪ್ ಗೋಡೌನ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಧ್ಯಪ್ರಾಚ್ಯ ಬಿಕ್ಕಟ್ಟು ತೀವ್ರ: ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಇಂದು ಪ್ರಧಾನಿ ಮೋದಿ ಸಭೆ!

0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಈ ಸಭೆಯ ಉದ್ದೇಶ ದೇಶದ ಒಟ್ಟಾರೆ ಸಿದ್ಧತೆ, ಭದ್ರತಾ ತಂತ್ರಗಳು ಮತ್ತು ಯೋಜನೆಗಳನ್ನು ಪರಿಶೀಲಿಸುವುದು ಎಂದು ತಿಳಿಸಲಾಗಿದೆ.

ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸಲಾರರು. ಹೀಗಾಗಿ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಯನ್ನು ಶೀಘ್ರದಲ್ಲೇ ಆಯೋಜಿಸಲು ಯೋಜನೆ ರೂಪಿಸಲಾಗಿದೆ.

ಇನ್ನೂ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೋ ಇಲ್ಲವೋ ಅನ್ನೋದು ಕುತೂಹಲ ಕೆರಳಿಸಿದೆ.

 

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಆಗುಂಬೆ ಘಾಟ್‌ನಲ್ಲಿ ಸಂಚಾರ ಬಂದ್!

ಶಿವಮೊಗ್ಗ: ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿರುವ ಘಟನೆ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಜರುಗಿದೆ.

ಘಟನೆಯಿಂದಾಗಿ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ. ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಘಟನೆ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಧಾವಿಸಿಲ್ಲ. ಘಾಟ್ ನಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ, ಸಂಚಾರ ಬಂದ್ ಆಗಿದ್ದು, ಮುಂದಿನ ಕ್ರಮ ಕಾದು ನೋಡಬೇಕಿದೆ.

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

0

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಜರುಗಿದೆ.

ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್. ಈತ ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ. ಇಂದು ಬೆಳ್ಳಂಬೆಳ್ಳಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಆರೋಪಿಗಳು ಕಾರಿನಲ್ಲಿ ಬಂದು ಹಿಬ್ಬಂದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೈಸೂರು: 45 ಜಾತಿಯ ಮರಗಳನ್ನು ಅಕ್ರಮವಾಗಿ ಕಡಿದ ಆರೋಪಿ ಬಂಧನ!

ಮೈಸೂರು: ನಂಜನಗೂಡಿನ ಕಪಿಲಾ ನದಿಯ ದಡದಲ್ಲಿ ಅರಣ್ಯ ಇಲಾಖೆ ಬೆಳೆಸಿದ್ದ 45 ವಿಭಿನ್ನ ಜಾತಿಯ ಮರಗಳನ್ನು ಯಾವುದೇ ಅನುಮತಿ ಪಡೆಯದೆ ಕಡಿದುಹಾಕಿದ ಆರೋಪಿಯನ್ನು ಬಂಧಿಸಲಾಗಿದೆ.

ಆಲತ್ತೂರು ಗ್ರಾಮದ ಕೃಷ್ಣ (45) ಆರೋಪಿ ಎಂದು ಗುರುತಿಸಲಾಗಿದೆ.

ಮಾರ್ಚ್ 8ರಂದು ನಡೆದ ಈ  ವಿಚಾರ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗುರಿಯಾಗಿತ್ತು. ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆಯು ಯಾವುದೇ ಕ್ರಮ ಕೈಗೊಳ್ಳದೆ ಇರಲು ಚುನಾವಣಾ ಆಲೋಚನೆಗಳಾಗಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾರ್ಚ್ 10ರಂದು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.

ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ.

ಕರ್ನಾಟಕದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ: ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಹಲವು ಪ್ರದೇಶಗಳಲ್ಲಿ ಮಳೆಯ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯ ಸಾಧ್ಯತೆ ಇದ್ದುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು-ಮಳೆಯ ಸಂಭವ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯ ಸಂಭವ ಇದೆ.

ಜನರನ್ನು ಸುರಕ್ಷಿತವಾಗಿರಲು ಹಾಗೂ ಮುಂಗಡ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿಜಯಪುರ| ಕಳ್ಳತನ, ದರೋಡೆ ಸೇರಿ 42 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್!

ವಿಜಯಪುರ; ಜಿಲ್ಲೆಯಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 42 ಆರೋಪಿಗಳನ್ನು ಬಂಧಿಸಿ 1.20 ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇಂಡಿ ಉಪವಿಭಾಗ ವ್ಯಾಪ್ತಿಯಲ್ಲಿ 2024ರಿಂದ 2026ರವರೆಗೆ ದಾಖಲಾಗಿದ್ದ 20ಕ್ಕೂ ಹೆಚ್ಚು ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸರಣಿ ಕಳ್ಳತನ, ದೇವಸ್ಥಾನ ದರೋಡೆ, ಲಾರಿ ತಡೆದು ನಡೆಸಿದ ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸುವ ಮೂಲಕ ದೊಡ್ಡ ಜಾಲವನ್ನು ಬಯಲಿಗೆಳೆದಿದ್ದಾರೆ.

ಪೊಲೀಸರ ಕಾರ್ಯಾಚರಣೆಯಲ್ಲಿ ಕಳ್ಳತನವಾಗಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು, ಜೆಸಿಬಿ, ಪಿಕಪ್ ವ್ಯಾನ್, ಸ್ಕಾರ್ಪಿಯೋ, ಟ್ರ್ಯಾಕ್ಟರ್‌ಗಳು, ಮೋಟಾರ್ ಸೈಕಲ್‌ಗಳು ಮತ್ತು ನೀರಿನ ಪಂಪ್ ಸೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಚಡಚಣ ದೇವಸ್ಥಾನ ಕಳ್ಳತನ, ಆಲಮೇಲ ಪ್ರದೇಶದ ಫೈನಾನ್ಸ್ ಕಳ್ಳತನ ಮತ್ತು ಹೊರ್ತಿ ಠಾಣೆ ವ್ಯಾಪ್ತಿಯ ದರೋಡೆ ಪ್ರಕರಣಗಳನ್ನು ಒಳಗೊಂಡಂತೆ ಹಲವು ಪ್ರಕರಣಗಳನ್ನು ಭೇದಿಸಿ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದು, ಇಂತಹ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ತಾಂತ್ರಿಕ ದೋಷ: ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್

0

ನವದೆಹಲಿ: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಹಿನ್ನೆಲೆ ದೆಹಲಿಗೆ ಹಿಂತಿರುಗಿದೆ.

ದೆಹಲಿಯಿಂದ ಬೆಳಗ್ಗೆ 6 ಗಂಟೆಗೆ ಹೊರಟಿದ್ದ AI111 ವಿಮಾನವು ಸುಮಾರು 7 ಗಂಟೆಗಳ ಕಾಲ ಹಾರಾಟ ನಡೆಸಿದ ಬಳಿಕ ಸುರಕ್ಷತಾ ಕಾರಣಗಳಿಂದ ವಾಪಸ್ ದೆಹಲಿಗೆ ಮರಳಿತು. ಸೌದಿ ಅರೇಬಿಯಾ ಆಕಾಶದ ಮೇಲೆ ಹಾರುತ್ತಿರುವ ವೇಳೆ ವಿಮಾನದಲ್ಲಿ ಅಸಾಮಾನ್ಯ ಶಬ್ದ ಕೇಳಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ಮುನ್ನೆಚ್ಚರಿಕಾ ಕ್ರಮವಾಗಿ ಹಿಂದಿರುಗುವ ನಿರ್ಧಾರ ಕೈಗೊಂಡರು.

ಮಧ್ಯಾಹ್ನ ಸುಮಾರು 12:30ಕ್ಕೆ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಏರ್‌ಬಸ್ A350-900 ಮಾದರಿಯ ಈ ವಿಮಾನದಲ್ಲಿ ಒಂದೇ ತಿಂಗಳಲ್ಲಿ ಎರಡನೇ ಬಾರಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಗಮನಾರ್ಹವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಏರ್ ಇಂಡಿಯಾ ವಕ್ತಾರರು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಮಾನವನ್ನು ಹಿಂತಿರುಗಿಸಲಾಗಿದೆ. ಪ್ರಸ್ತುತ ವಿಮಾನವನ್ನು ತಾಂತ್ರಿಕ ಪರಿಶೀಲನೆಗೆ ಒಳಪಡಿಸಲಾಗಿದ್ದು, ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಸಂಸ್ಥೆ, ಅವರನ್ನು ಲಂಡನ್‌ಗೆ ಕಳುಹಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ಯುದ್ಧ ಜಾಗತಿಕ ಸಂಕಷ್ಟಕ್ಕೆ ಕಾರಣವಾಗಬಹುದು: ಪುಟಿನ್ ಎಚ್ಚರಿಕೆ!

0

ಮಾಸ್ಕೋ: ಮಧ್ಯಪ್ರಾಚ್ಯದಲ್ಲಿನ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಘರ್ಷವು ಕೋವಿಡ್ ಮಹಾಮಾರಿಯಂತೆಯೇ ವಿಶ್ವದ ಆರ್ಥಿಕತೆ ಮತ್ತು ಪೂರೈಕೆ ವ್ಯವಸ್ಥೆಗಳ ಮೇಲೆ ದೊಡ್ಡ ಹೊಡೆತ ನೀಡಬಹುದು. ಈಗಾಗಲೇ ಅಂತಾರಾಷ್ಟ್ರೀಯ ಲಾಜಿಸ್ಟಿಕ್ಸ್, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳು ಅಸ್ತವ್ಯಸ್ತಗೊಂಡಿದ್ದು, ಹೈಡ್ರೋಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕ್ಷೇತ್ರಗಳು ಭಾರೀ ಒತ್ತಡಕ್ಕೆ ಒಳಗಾಗಿವೆ ಎಂದಿದ್ದಾರೆ.

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿದ್ದು, ಈ ಬಿಕ್ಕಟ್ಟು ಶೀಘ್ರದಲ್ಲೇ ಬಗೆಹರಿಯುವ ಸಾಧ್ಯತೆ ಕಡಿಮೆ ಎಂದು ಪುಟಿನ್ ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ಯಾವಾಗ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.

ಇದೀಗ ಅಮೆರಿಕ–ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಕೇವಲ ಕೆಲವು ದೇಶಗಳಿಗೆ ಮಾತ್ರ ಸೀಮಿತವಾಗದೆ, ಅನೇಕ ರಾಷ್ಟ್ರಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಫೆಬ್ರವರಿ 28ರಿಂದ ಆರಂಭವಾದ ಈ ಯುದ್ಧದಲ್ಲಿ ರಷ್ಯಾ ಇರಾನ್‌ಗೆ ಪರೋಕ್ಷ ಬೆಂಬಲ ನೀಡುತ್ತಿರುವುದು ಗಮನಾರ್ಹವಾಗಿದೆ. ಈ ನಡುವೆ ಹಾರ್ಮುಜ್ ಜಲಸಂಧಿ ಬಳಿ ನಡೆದ ದಾಳಿಯಲ್ಲಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನಗೊಳಿಸಿದೆ.

ಈ ಬೆಳವಣಿಗೆಗಳ ನಡುವೆ, ಇರಾನ್ ತನ್ನ ಉನ್ನತ ಸೇನಾ ಅಧಿಕಾರಿಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವ ಸಾಧ್ಯತೆ ಇದ್ದು, ಇದರಿಂದ ಗಲ್ಫ್ ರಾಷ್ಟ್ರಗಳು ಹಾಗೂ ಅಂತಾರಾಷ್ಟ್ರೀಯ ಜಲಮಾರ್ಗಗಳ ಭದ್ರತೆಗೆ ಮತ್ತಷ್ಟು ಸವಾಲು ಎದುರಾಗುವ ಸಾಧ್ಯತೆ ಇದೆ.