Home Blog Page 47

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಶ್ರೀಮತಿ ನಾಗವೇಣಿ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಅತಿಯಾದ ಪ್ಲಾಸ್ಟಿಕ್ ಬಳಕೆ ಮತ್ತು ಗಿಡ-ಮರಗಳ ಕೊರತೆಯಿಂದ ಪರಿಸರ ವಿನಾಶದ ಅಂಚಿನತ್ತ ಸಾಗುತ್ತಿದೆ. ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ, ತಮ್ಮ ಮನೆಗಳ ಸುತ್ತಮುತ್ತ ಗಿಡ-ಮರಗಳನ್ನು ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗಂಗಾಧರ ಸಿ.ಎಂ., ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ ಟಿ. ಚವಾಣ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಶಿಂದೆ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಗಿರಿಮಲ್ಲಪ್ಪ ಶಟ್ಟರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ, ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ ಪದ್ಮಶ್ರೀ ಪಾಟೀಲ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ್ರ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಎಂ.ಎ. ಸಂಗನಾಳ, ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸಂತೋಷಕುಮಾರ್ ಕೆಂಚಪ್ಪನವರ, ಚಂದ್ರಹಾಸ ವರ್ಣೇಕರ ಸೇರಿದಂತೆ ಹಲವು ಗಣ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನೀರಿನಲ್ಲಿ ಮುಳುಗಿ ಮೃತಪಟ್ಟ ಮಗು; ಉಪ್ಪಿನಲ್ಲಿ ಇಟ್ಟು ಜೀವ ಉಳಿಸಲು ಪೋಷಕರ ಪ್ರಯತ್ನ!

ಬಾಗಲಕೋಟೆ: ಎದುರಿನ ಮನೆಯ ನೀರಿನ ಸಂಪ್‌ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್-38ರಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಆಟವಾಡುತ್ತಿದ್ದ ವೇಳೆ ಮಗು ನೀರಿನ ಸಂಪ್‌ಗೆ ಬಿದ್ದಿದ್ದು, ಮುಳುಗಿದ ಪರಿಣಾಮ ಮೃತಪಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಳಿಕ ದುಃಖದಲ್ಲಿ ಮುಳುಗಿದ್ದ ಕುಟುಂಬಸ್ಥರು, ನೀರಿನಲ್ಲಿ ಮುಳುಗಿದವರನ್ನು ಉಪ್ಪಿನಲ್ಲಿ ಮಲಗಿಸಿದರೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಮಗುವನ್ನು ಬದುಕಿಸಲು ಪ್ರಯತ್ನ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯ ಶವಾಗಾರದ ಮುಂಭಾಗದಲ್ಲಿ ಮಗುವಿನ ಮುಖವನ್ನು ಮಾತ್ರ ಹೊರಗಿಟ್ಟು, ಇಡೀ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಡಲಾಗಿತ್ತು.

ಅಲ್ಲದೆ, ಮಗುವಿನ ಕಿವಿಯ ಬಳಿ ಮೊಬೈಲ್‌ನಲ್ಲಿ ಕುರಾನ್ ಪಠಣವನ್ನು ಹಾಕಿ, ಮಗು ಬದುಕಿ ಬರಲಿ ಎಂದು ಪೋಷಕರು ಹಾಗೂ ಕುಟುಂಬಸ್ಥರು ಪ್ರಾರ್ಥನೆ ಸಲ್ಲಿಸಿದರು. ಈ ದೃಶ್ಯ ಅಲ್ಲಿದ್ದವರ ಮನಕಲಕುವಂತೆ ಮಾಡಿತು.

ಸುಮಾರು ಎರಡು ಗಂಟೆಗಳ ಕಾಲ ಮಗುವಿನ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಡಲಾಗಿತ್ತು. ಬಳಿಕ ವೈದ್ಯರು ಕುಟುಂಬಸ್ಥರಿಗೆ ಸೂಕ್ತ ಮಾಹಿತಿ ಹಾಗೂ ಮನವರಿಕೆ ಮಾಡಿಕೊಟ್ಟ ನಂತರ ಮಗುವನ್ನು ಉಪ್ಪಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ಪಡೆಯಲಾಯಿತು.

ನಂತರ ಮಗುವಿನ ಮೃತದೇಹವನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಈ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರ ದಾಳಿ; ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ನಡೆದಿದೆ.

ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ವಿಶ್ವನಾಥ್ ಟೀ ಕುಡಿಯಲು ಸ್ಥಳೀಯ ಅಂಗಡಿಗೆ ತೆರಳಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ದಾಳಿ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಹಲ್ಲೆ ವೇಳೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಗಾಯಗೊಂಡಿರುವ ವಿಶ್ವನಾಥ್ ಅವರ ಎರಡೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ ಎಂದು ತಿಳಿದುಬಂದಿದೆ. ಗಾಯಾಳುವಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಸ್ಪೀಟ್ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, ಜೂನ್ 13ರವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೂನ್ 13ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10 ಮತ್ತು 11ರಂದು ಕೂಡ ಮಳೆ ಮುಂದುವರಿಯಲಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಇಲಾಖೆ ಸಲಹೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಸನ, ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಜೂನ್ 14ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಜೂನ್ 9ರಂದು ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕೆಲವು ಪ್ರದೇಶಗಳಲ್ಲಿ 204.5 ಮಿ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಜೂನ್ 10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನಲ್ಲಿ ಜೂನ್ 10ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಜೂನ್ 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ರೌಡಿಗಳ ವಿರುದ್ಧ ಪೊಲೀಸ್ ಸಮರ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಅರೆಸ್ಟ್!

ಬೆಂಗಳೂರು: ರಾಜ್ಯದಲ್ಲಿ ರೌಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಕಟ್ಟುನಿಟ್ಟಿನ ಸೂಚನೆಗಳ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಪ್ರಕರಣಗಳ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಸಿಸಿಬಿ ಬಂಧಿಸಿದೆ.

ಕೆ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬನಗರ ನಿವಾಸಿ ಹಾಗೂ ರೌಡಿಶೀಟರ್ ಆಗಿರುವ ಶಾಹಿದ್ ಪಾಷಾ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದ ವಾರಂಟ್ ಇದ್ದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಉನ್ನತ ಮಟ್ಟದ ಸಭೆಯಲ್ಲಿಯೇ ರಾಜ್ಯದಲ್ಲಿ ರೌಡಿಗಳ ಹಾವಳಿಗೆ ಬ್ರೇಕ್ ಹಾಕುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ‘ಆ್ಯಂಟಿ ರೌಡಿ ಸ್ಕ್ವಾಡ್’ ರಚಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಪೊಲೀಸ್ ವಲಯ ಹಾಗೂ ಠಾಣೆ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ ರಚಿಸುವಂತೆ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ರೌಡಿ ನಿಗ್ರಹ ದಳವು ರೌಡಿಶೀಟರ್‌ಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸುವುದು, ಹೊಸ ಅಪರಾಧಿ ಗುಂಪುಗಳನ್ನು ಗುರುತಿಸುವುದು, ಗುಪ್ತಚರ ಮಾಹಿತಿ ಸಂಗ್ರಹಿಸುವುದು ಹಾಗೂ ಅಗತ್ಯವಿದ್ದಲ್ಲಿ ಗೂಂಡಾ ಕಾಯ್ದೆ, ಕೆಸಿಒಸಿಎ ಸೇರಿದಂತೆ ವಿವಿಧ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ.

ಅಪಾಯದ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ, ದಿಢೀರ್ ತಪಾಸಣೆ ಹಾಗೂ ಸ್ಥಳೀಯ ಗುಪ್ತಚರ ಜಾಲದೊಂದಿಗೆ ಸಮನ್ವಯ ಸಾಧಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದು, ಅದರ ಬೆನ್ನಲ್ಲೇ ಪೊಲೀಸರು ರೌಡಿಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪೇಂಟ್ ಕೆಲಸದ ನೆಪದಲ್ಲಿ ಬಂದು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು!

ನೆಲಮಂಗಲ: ಮನೆಗೆ ಪೇಂಟ್ ಕೆಲಸ ಮಾಡಲು ಬಂದಿದ್ದ ವ್ಯಕ್ತಿಗಳೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ.

ನಿತ್ಯಾ ಚಂದ್ರಶೇಖರ್ ದಂಪತಿಗೆ ಸೇರಿದ ಮನೆಯಲ್ಲಿ ಸುಮಾರು 254 ಗ್ರಾಂ ತೂಕದ, ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ನಿತ್ಯಾ ಚಂದ್ರಶೇಖರ್ ದಂಪತಿಗಳು ಎರಡು ಅಂತಸ್ತಿನ ಮನೆಯನ್ನು ನಿರ್ಮಿಸಿದ್ದು, ಕೆಲವು ತಿಂಗಳ ಹಿಂದೆ ಬಾಡಿಗೆದಾರರು ಮನೆ ಖಾಲಿ ಮಾಡಿದ್ದರು. ಇದನ್ನು ಗಮನಿಸಿದ್ದ ಪೇಂಟರ್ ಲಿಂಗರಾಜು, ಮನೆಗೆ ಬಂದು ಪೇಂಟ್ ಕೆಲಸ ಮಾಡಿಕೊಡುವುದಾಗಿ ಹೇಳಿ ತನ್ನ ಮೊಬೈಲ್ ಸಂಖ್ಯೆಯನ್ನು ನೀಡಿದ್ದನು.

ಕೆಲವು ದಿನಗಳ ಬಳಿಕ ಚಂದ್ರಶೇಖರ್ ಅವರು ಲಿಂಗರಾಜುವನ್ನು ಸಂಪರ್ಕಿಸಿ ಮನೆಯ ಮೊದಲ ಮಹಡಿಗೆ ಪೇಂಟ್ ಕೆಲಸ ನೀಡಿದ್ದರು. ಬಳಿಕ ವಾಸವಿದ್ದ ಭಾಗದ ಕಿಟಕಿ ಹಾಗೂ ಕೊಠಡಿಗಳಿಗೆ ಸಹ ಬಣ್ಣ ಬಳಿಯುವಂತೆ ಸೂಚಿಸಿದ್ದರು. ಅದರಂತೆ ಪವನ್ ಕುಮಾರ್, ಮಂಜುನಾಥ್ ಹಾಗೂ ವೆಂಕಟೇಶ್ ಎಂಬುವರು ಮನೆಗೆ ಬಂದು ಪೇಂಟ್ ಕೆಲಸ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಮನೆಯ ಒಂದು ಕೊಠಡಿಯಲ್ಲಿ ಪೇಂಟ್ ಕೆಲಸ ನಡೆಯುತ್ತಿದ್ದಾಗ, ಮಗುವಿನ ಅಳುವ ಶಬ್ದ ಕೇಳಿಬಂದ ಕಾರಣ ಮನೆಯವರು ಹೊರಗೆ ತೆರಳಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡ ಆರೋಪಿಗಳು ಬೀರುವಿನಲ್ಲಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಳವಾದ ಚಿನ್ನಾಭರಣದ ಒಟ್ಟು ತೂಕ 254 ಗ್ರಾಂ ಆಗಿದ್ದು, ಇದರ ಮೌಲ್ಯ ಸುಮಾರು 25 ಲಕ್ಷ ರೂಪಾಯಿಗಳಾಗುತ್ತದೆ ಎಂದು ಅಂದಾಜಿಸಲಾಗಿದೆ.

ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳವಾದ ಚಿನ್ನಾಭರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳನ್ನು ಕೂಡಿ ಹಾಕಿದ ಗ್ರಾಮಸ್ಥರು, ಬಿಲ್ ಕಲೆಕ್ಟರ್ ಮೇಲೆ ಹಲ್ಲೆ

ದಾವಣಗೆರೆ: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದಿದ್ದು, ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆಂಚಪ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊಟ್ರೇಶ್ ಅವರನ್ನು ಗ್ರಾಮಸ್ಥರು ಕೂಡಿ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆದಿದೆ.

ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಇಂದು ಗ್ರಾಮಕ್ಕೆ ಆಗಮಿಸಿದ ಅಧಿಕಾರಿಗಳನ್ನು ಗ್ರಾಮಸ್ಥರು ರಸ್ತೆಯ ಕಟ್ಟೆಯ ಮೇಲೆ ಕೂರಿಸಿಕೊಂಡು ಸಮಸ್ಯೆಗಳ ಕುರಿತು ಪ್ರಶ್ನಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿ ತಮ್ಮ ಪ್ರತಿಭಟನೆ ಮುಂದುವರಿಸಿದರು.

ಈ ವೇಳೆ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಅನುದಾನದ ಹಣ ದುರುಪಯೋಗಗೊಂಡಿರುವುದರಿಂದಲೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಅವರು ದೂರಿದರು.

ಘಟನೆ ವೇಳೆ ಸ್ಥಳದಲ್ಲಿದ್ದ ಬಿಲ್ ಕಲೆಕ್ಟರ್ ವಿರುದ್ಧವೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಗಳೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕುಡಿಯುವ ನೀರಿನ ಸಮಸ್ಯೆ ಹಾಗೂ ಗ್ರಾಮಸ್ಥರ ಆರೋಪಗಳ ಕುರಿತು ಸಂಬಂಧಿತ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ: ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ ಎಂದ ಬೈರತಿ ಸುರೇಶ್

ಬೆಂಗಳೂರು: ಸಚಿವ ಸಂಪುಟ ಪುನರ್ರಚನೆಯ ಬಳಿಕ ಸಾರಿಗೆ ಇಲಾಖೆಯ ಜವಾಬ್ದಾರಿ ಪಡೆದಿರುವ ಸಚಿವ ಬೈರತಿ ಸುರೇಶ್, ಖಾತೆ ಹಂಚಿಕೆ ಕುರಿತು ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಂತೋಷದಿಂದ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೈರತಿ ಸುರೇಶ್, ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ನನಗೆ ಸಚಿವ ಸ್ಥಾನ ದೊರೆತಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ದೇವರು ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಈ ಹಿಂದೆ ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದು ಇಲಾಖೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದೇನೆ. ಅದೇ ರೀತಿಯಲ್ಲಿ ಸಾರಿಗೆ ಇಲಾಖೆಯಲ್ಲಿಯೂ ಜನಪರ ಹಾಗೂ ಅಭಿವೃದ್ಧಿ ಪರ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದರು.

ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಮ್ಮ ರಾಜ್ಯದವರೇ ಆಗಿದ್ದಾರೆ. ಈ ಇಲಾಖೆಯನ್ನು ರಾಮಲಿಂಗಾರೆಡ್ಡಿ ಅವರು ಉತ್ತಮವಾಗಿ ನಿರ್ವಹಿಸಿದ್ದಾರೆ. ಅವರ ಕೆಲಸವನ್ನು ಮುಂದುವರಿಸಿಕೊಂಡು ಇಲಾಖೆಯ ಸಮಸ್ಯೆಗಳನ್ನು ಪರಿಹರಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.

ಖಾತೆ ಹಂಚಿಕೆ ಕುರಿತು ತಮ್ಮ ನಿಲುವನ್ನು ಪುನರುಚ್ಚರಿಸಿದ ಅವರು, ಯಾವುದೇ ಇಲಾಖೆ ನೀಡಿದರೂ ನಾನು ಸಂತೋಷದಿಂದ ಕೆಲಸ ಮಾಡುತ್ತೇನೆ. ನಮ್ಮ ನಾಯಕರು ಹಾಗೂ ಹೈಕಮಾಂಡ್ ಸಾಕಷ್ಟು ಚಿಂತನೆ ನಡೆಸಿಯೇ ಈ ಮಹತ್ವದ ಖಾತೆಯನ್ನು ನೀಡಿದ್ದಾರೆ. ಆದ್ದರಿಂದ ನನಗೆ ಯಾವುದೇ ಬೇಸರ ಇಲ್ಲ ಎಂದು ಸ್ಪಷ್ಟಪಡಿಸಿದರು.

ದೇವೇಗೌಡರ ಸಹಾಯ ಪಡೆದು ಈಗ ಅಪಮಾನ ಮಾಡಿದ್ದಾರೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸಹಕಾರದಿಂದ ಸಂಸತ್ತಿನಲ್ಲಿ ಹಲವು ಮಹತ್ವದ ಮಸೂದೆಗಳನ್ನು ಬಿಜೆಪಿ ಅಂಗೀಕರಿಸಿಕೊಂಡಿತು. ಆದರೆ ಇದೀಗ ಅದೇ ದೇವೇಗೌಡರಿಗೆ ಅವಮಾನ ಮಾಡುವ ಕೆಲಸ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ದೇವೇಗೌಡರಿಗೆ ಅವಕಾಶ ಸಿಗದಿರುವ ಕುರಿತು ಪ್ರತಿಕ್ರಿಯಿಸಿದರು. “ದೇವೇಗೌಡರ ಸಹಾಯದಿಂದ ಬಿಜೆಪಿ ಸಂಸತ್ತಿನಲ್ಲಿ ಬಿಲ್‌ಗಳನ್ನು ಪಾಸ್ ಮಾಡಿಕೊಂಡಿತು. ಆದರೆ ಈಗ ಅವರಿಗೆ ಸೂಕ್ತ ಗೌರವ ನೀಡದೇ ಅವಮಾನ ಮಾಡಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಯ ಕುರಿತು ಮಾತನಾಡಿದ ಹರಿಪ್ರಸಾದ್, ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಿರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ. ರಾಜಕೀಯದಲ್ಲಿ ಇಂತಹ ಬೆಳವಣಿಗೆಗಳು ಸಹಜ. “ಅವರು ಅಭ್ಯರ್ಥಿ ಹಾಕಲಿ. ರಾಜಕೀಯದಲ್ಲಿ ಸ್ಪರ್ಧೆ ಇರಲೇಬೇಕು. ಆದರೆ ನಮ್ಮ ಗೆಲುವಿನ ಬಗ್ಗೆ ಯಾವುದೇ ಅನುಮಾನವಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.

“ನಮ್ಮ ಪಕ್ಷದ ಯಾವುದೇ ಶಾಸಕರು ಬೇರೆ ಕಡೆಗೆ ಹೋಗುವ ಪರಿಸ್ಥಿತಿ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ ಪರ ನಿಂತಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಕುರಿತು ಮಾತನಾಡಿದ ಅವರು, “ಐದು ಅಭ್ಯರ್ಥಿಗಳನ್ನು ಗೆಲ್ಲಿಸಲು ಅಗತ್ಯವಿರುವ ಸಂಖ್ಯಾಬಲ ನಮ್ಮ ಬಳಿ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಈಗಾಗಲೇ ಎಲ್ಲಾ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ನಮ್ಮ ಅಭ್ಯರ್ಥಿಗಳ ಗೆಲುವು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಕುರಿತು ಟೀಕಿಸಿದ ಅವರು, “ಜೆಡಿಎಸ್ ಬಳಿ ಅಗತ್ಯ ಸಂಖ್ಯಾಬಲವೇ ಇಲ್ಲ. ಅದಕ್ಕಾಗಿಯೇ ಆತ್ಮಸಾಕ್ಷಿಯ ಮತದ ಬಗ್ಗೆ ಮಾತನಾಡುತ್ತಿದ್ದಾರೆ. ಸಂಖ್ಯಾಬಲ ಇಲ್ಲದ ಕಾರಣ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸುರ್ಜೆವಾಲ ಅವರು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಸದ್ಯಕ್ಕೆ ಏನು ಮಾತನಾಡುವುದಿಲ್ಲ. ಅವರು ಮಾತಾಡಿದ್ದಾರೆ. ಆದರೆ ನಾನು ಮಾತಾಡಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ” ಎಂದರು.

ಸೂರಜ್ ಹೆಗ್ಡೆ ತ್ಯಾಗಕ್ಕೆ ಹೆಸರಾದವರು:

“ಸೂರಜ್ ಹೆಗ್ಡೆ ಆತ್ಮೀಯ ಸ್ನೇಹಿತ. ತ್ಯಾಗಕ್ಕೆ ಹೆಸರಾದವರು. ಇದೇ ಸ್ಥಾನ ಬೇಕು ಎಂದೂ ಕೇಳುತ್ತಿರಲಿಲ್ಲ. ನಾನು ಹಿಂದೆ ಅವರಿಗೆ ಮೈಸೂರು ಸಂಸದ ಸ್ಥಾನಕ್ಕೆ ಟಿಕೆಟ್ ಕೊಡಿಸಬೇಕು ಅಂತ ಬಹಳ ಹೋರಾಟ ಮಾಡಿದ್ದೆ. ಅವರು ದೇವರಾಜ ಅರಸು ಅವರ ಮೊಮ್ಮಗ. ಪಕ್ಷದ ನಿಷ್ಠಾವಂತ ಕಾರ್ಯಕರ್ತ.

ನನ್ನ ಜೊತೆ ಪದಾಧಿಕಾರಿಯಾಗಿದ್ದವರು. ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾಗಿದ್ದವರು. ನಮ್ಮ ಸರ್ಕಾರ ರಾಜ್ಯ ಮಟ್ಟದ ಸಚಿವ ಸ್ಥಾನ ಕೊಟ್ಟಿತ್ತು. ಅವರ ಮೇಲೆ ನಾನು ದೊಡ್ಡ ಆಕಾಂಕ್ಷೆ ಇಟ್ಟುಕೊಂಡಿದ್ದೆ. ಪಕ್ಷ ಅವರ ಮೇಲೆ ಅವಲಂಬಿಸಿತ್ತು” ಎಂದು ತಿಳಿಸಿದರು.

“ನಿಷ್ಠಾವಂತ ಕಾರ್ಯಕರ್ತ ಪಕ್ಷಕ್ಕೆ ಸಿಗುವುದು ಬಹಳ ವಿಶೇಷ. ಈಗಲೂ ಕೂಡ ಅನೇಕ ವಿಚಾರಗಳನ್ನು ಅವರ ವಿಚಾರದಲ್ಲಿ ಚಿಂತನೆ ಮಾಡಲಾಗಿತ್ತು. ಎಐಸಿಸಿ ನಮ್ಮ ಕಾರ್ಯದರ್ಶಿಗಳಾಗಿ, ನಮ್ಮ ರಾಜ್ಯ ಮಟ್ಟದ ಪದಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು” ಎಂದರು.

“ಅವರ ಕುಟುಂಬದ ದುಃಖ ನೋಡಲು ಆಗುತ್ತಿಲ್ಲ. ಅವರ ತಂದೆ ಕೂಡ ಒಬ್ಬ ಹಿರಿಯ ದೊಡ್ಡ ರಾಜಕಾರಣಿ. ವೈಯಕ್ತಿಕವಾಗಿ ನಮ್ಮೆಲ್ಲರಿಗೂ ಕೂಡ ಬಹಳ ದುಃಖ ಉಂಟಾಗಿದೆ. ಪಕ್ಷದ ಹಾಗೂ ಸರ್ಕಾರದ ಪರವಾಗಿ ಗೌರವ ನಮನ ಸಲ್ಲಿಸುತ್ತೇನೆ.

ಕರ್ನಾಟಕ ಸರ್ಕಾರ ಅವರಿಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು. ಅವರ ಕುಟುಂಬದವರು ಅಂತಿಮ ಕಾರ್ಯ ಯಾವಾಗ ತೀರ್ಮಾನ ಮಾಡುತ್ತಾರೋ ಆಗ ಗೌರವವನ್ನು ಕೊಡುತ್ತೇವೆ. ಈ ವಿಚಾರವಾಗಿ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ತಿಳಿಸಿದ್ದೇನೆ. ಅವರ ಅಂತ್ಯಕ್ರಿಯೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ” ಎಂದರು.

error: Content is protected !!