Home Blog Page 52

ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಮಾರ್ಗದರ್ಶನ: ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ವರ್ಗದ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ಹೊಸ ದಿಕ್ಕು ತೋರಿಸುವ ಮಹತ್ವದ ಹೆಜ್ಜೆಯಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಕಾರ್ಯಕ್ರಮವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

2026-27ನೇ ಶೈಕ್ಷಣಿಕ ಸಾಲಿಗೆ ವಿವಿಧ ಪ್ರತಿಷ್ಠಿತ ಶಾಲೆಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರಿಗೆ ತಮ್ಮ ಆಸಕ್ತಿ, ಸಾಮರ್ಥ್ಯ ಹಾಗೂ ಭವಿಷ್ಯದ ಗುರಿಗಳಿಗೆ ಅನುಗುಣವಾಗಿ ಸೂಕ್ತ ಶಾಲೆ ಆಯ್ಕೆ ಮಾಡಿಕೊಳ್ಳಲು ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ನಂದಾ ಹಣಬರಟ್ಟಿ, ಡಯಟ್ ಉಪ ಪ್ರಾಂಶುಪಾಲರಾದ ಜಿ.ಎಂ. ಮುಂದಿನಮನಿ, ಎಂ.ಎಚ್. ಸವದತ್ತಿ ಸೇರಿದಂತೆ ವಿವಿಧ ಪ್ರತಿಷ್ಠಿತ ಶಾಲೆಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ಗದಗದ ರಾಜರಾಜೇಶ್ವರಿ ಹುಲಕೋಟಿ ಶಾಲೆ, ಮಹಾವೀರ ಜೈನ್ ಶಾಲೆ, ಚಿಕ್ಕಟ್ಟಿ ಶಾಲೆ ಹಾಗೂ ಲಕ್ಷ್ಮೇಶ್ವರದ ಚಂದನ್ ಸ್ಕೂಲ್‌ನ ಪ್ರಾಂಶುಪಾಲರು ತಮ್ಮ ಶಾಲೆಗಳ ಶೈಕ್ಷಣಿಕ ಸೌಲಭ್ಯಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವಿಶೇಷ ಕಾರ್ಯಕ್ರಮಗಳು ಹಾಗೂ ಉನ್ನತ ಶಿಕ್ಷಣದ ಅವಕಾಶಗಳ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.

ವಿದ್ಯಾರ್ಥಿನಿಯರು ಮತ್ತು ಪಾಲಕರು ವಿವಿಧ ಶಾಲೆಗಳ ಕುರಿತು ತಮ್ಮ ಸಂದೇಹಗಳನ್ನು ಕೇಳಿ ಪರಿಹಾರ ಪಡೆದುಕೊಂಡರು. ಕೌನ್ಸೆಲಿಂಗ್ ಮೂಲಕ ಲಭ್ಯವಿರುವ ಶೈಕ್ಷಣಿಕ ಅವಕಾಶಗಳ ಬಗ್ಗೆ ಸಮಗ್ರ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಹೆಚ್ಚು ಆತ್ಮವಿಶ್ವಾಸದಿಂದ ಶಾಲೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡುವುದರ ಜೊತೆಗೆ, ಉನ್ನತ ಶಿಕ್ಷಣದ ಕನಸುಗಳನ್ನು ಸಾಕಾರಗೊಳಿಸುವ ಉತ್ಸಾಹ ಮತ್ತು ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿತು.

ಸಮಾಜದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಸರ್ಕಾರದ ಪ್ರಯತ್ನಕ್ಕೆ ಈ ಕೌನ್ಸೆಲಿಂಗ್ ಕಾರ್ಯಕ್ರಮ ಮತ್ತಷ್ಟು ಬಲ ತುಂಬಿದಂತಾಯಿತು.

ಹೆಚ್ಚುವರಿ ದರ ವಸೂಲಿ ಮಾಡಿದರೆ ಕಾನೂನು ಕ್ರಮ: ರಸಗೊಬ್ಬರ ಅಕ್ರಮಕ್ಕೆ ಡಿಸಿ ಖಡಕ್ ವಾರ್ನಿಂಗ್

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಹಂಗಾಮು ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯ ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಪೂರೈಕೆಯನ್ನು ಖಚಿತಪಡಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಅಕ್ರಮ, ಕೃತಕ ಅಭಾವ ಸೃಷ್ಟಿ ಅಥವಾ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಅಂತಹ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಖಡಕ್ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರು ಕೇವಲ ರಾಸಾಯನಿಕ ಗೊಬ್ಬರಗಳ ಮೇಲೆ ಅವಲಂಬಿಸದೇ ಕೊಟ್ಟಿಗೆ ಗೊಬ್ಬರ, ಕಾಂಪೋಸ್ಟ್, ಹಸಿರು ಗೊಬ್ಬರ ಹಾಗೂ ಜೀವಾಮೃತದಂತಹ ನೈಸರ್ಗಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನ್ಯಾನೋ ಯೂರಿಯಾ ಬಳಕೆಯಿಂದ ಬೆಳೆಗೆ ಅಗತ್ಯ ಸಾರಜನಕ ಸಮರ್ಪಕವಾಗಿ ಲಭ್ಯವಾಗುವುದರ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವಷ್ಟು ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಚೇತನಾ ಪಾಟೀಲ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜನವರಿಯಿಂದ ಜೂನ್‌ವರೆಗೆ ವಾಡಿಕೆ 118.9 ಮಿ.ಮೀ ಮಳೆಯ ವಿರುದ್ಧ 150.4 ಮಿ.ಮೀ ಮಳೆಯಾಗಿದೆ ಎಂದರು.

ಹೆಸರು, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ ಹಾಗೂ ಶೇಂಗಾ ಪ್ರಮುಖ ಮುಂಗಾರು ಬೆಳೆಗಳಾಗಿದ್ದು, ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗುವುದು ಎಂದು ತಿಳಿಸಿದರು.

2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 3,05,975 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಸಾಧ್ಯತೆ ಇದ್ದು, 67,598 ಕ್ವಿಂಟಲ್ ಬಿತ್ತನೆ ಬೀಜ ಅಗತ್ಯವಿದೆ.

ಪ್ರಸ್ತುತ ಜಿಲ್ಲೆಯಲ್ಲಿ 11,706 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದ್ದು, ಈಗಾಗಲೇ 1,337.8 ಕ್ವಿಂಟಲ್ ವಿತರಣೆಗೊಂಡಿದೆ. ಉಳಿದಂತೆ 10,368.2 ಕ್ವಿಂಟಲ್ ಬೀಜ ಲಭ್ಯವಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಜಿಲ್ಲೆಯಲ್ಲಿ ಒಟ್ಟು 67,536 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಆರಂಭಿಕ ಶಿಲ್ಕು ಸೇರಿ 37,702 ಮೆಟ್ರಿಕ್ ಟನ್ ಪೂರೈಕೆ ಲಭ್ಯವಿದೆ. ಏಪ್ರಿಲ್‌ನಿಂದ ಇಲ್ಲಿಯವರೆಗೆ 23,037 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದೆ ಎಂದು ತಿಳಿಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್, ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ, ಆತ್ಮ ಯೋಜನೆ, ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ, ರಾಷ್ಟ್ರೀಯ ಆಹಾರ ಭದ್ರತಾ ಮತ್ತು ಪೌಷ್ಟಿಕ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಡಿಡಿಎಲ್‌ಆರ್ ರುದ್ರಣ್ಣಗೌಡ, ಉಪ ಕೃಷಿ ನಿರ್ದೇಶಕರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ರೈತರು ಮಣ್ಣಿನ ಪರೀಕ್ಷೆ ಆಧರಿಸಿ ಮಾತ್ರ ಗೊಬ್ಬರ ಬಳಸಬೇಕು. ಯೂರಿಯಾ ಮತ್ತು ಡಿಎಪಿ ಗೊಬ್ಬರಗಳ ಅತಿಯಾದ ಬಳಕೆ ಮಣ್ಣಿನ ಫಲವತ್ತತೆಯನ್ನು ಹಾಳುಮಾಡುತ್ತಿದೆ.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಭೀಕರ ದುರಂತ; ಕರಗಿದ ಲೋಹ ಹರಿದು 9 ಕಾರ್ಮಿಕರ ಸಾವು

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣ ಉಕ್ಕು ಸ್ಥಾವರದಲ್ಲಿ ಸಂಭವಿಸಿದ ಭೀಕರ ಕೈಗಾರಿಕಾ ಅವಘಡದಲ್ಲಿ 9 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸ್ಥಾವರದ ಉಕ್ಕು ಕರಗುವ ಕೇಂದ್ರ ಸಂಖ್ಯೆ-1ರಲ್ಲಿ ಟನ್‌ಗಟ್ಟಲೆ ಕರಗಿದ ಲೋಹವಿದ್ದ ಬೃಹತ್ ಬಕೆಟ್ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಅವಘಡದ ಬಳಿಕ ಘಟನಾ ಸ್ಥಳದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ ನಾಲ್ವರು ಕಾರ್ಮಿಕರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಉಳಿದವರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ರಕ್ಷಿಸಲ್ಪಟ್ಟ ಕಾರ್ಮಿಕರ ಮಾಹಿತಿ ಪ್ರಕಾರ, ಕರಗಿದ ಉಕ್ಕು ಕೆಳಗೆ ಬೀಳುವ ಕೆಲವೇ ಕ್ಷಣಗಳ ಮೊದಲು ಸ್ಫೋಟ ಸಂಭವಿಸಿತ್ತು. ಪರಿಣಾಮ ಹಲವು ಕಾರ್ಮಿಕರು ಬೆಂಕಿ ಮತ್ತು ಉಷ್ಣತೆಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಹಲವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕನಿಷ್ಠ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಘಟನೆ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರೊಂದಿಗೆ ಮಾತುಕತೆ ನಡೆಸಿ ರಕ್ಷಣಾ ಕಾರ್ಯಾಚರಣೆ ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದೇ ವೇಳೆ, ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಕೂಡ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕಾರ್ಮಿಕರ ಸುರಕ್ಷತೆಗೆ ಕೈಗಾರಿಕೆಗಳು ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ದುರಂತಗಳು ಮರುಕಳಿಸದಂತೆ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2012ರ ಜೂನ್ ತಿಂಗಳಲ್ಲೂ ಇದೇ ಉಕ್ಕು ಸ್ಥಾವರದ ಉಕ್ಕು ಕರಗಿಸುವ ಘಟಕ ಸಂಖ್ಯೆ-3ರಲ್ಲಿ ಆಮ್ಲಜನಕ ಘಟಕ ಸ್ಫೋಟಗೊಂಡು 16 ಕಾರ್ಮಿಕರು ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಪ್ರಾಯೋಗಿಕ ಪರೀಕ್ಷೆ ವೇಳೆ ಅವಘಡ ಸಂಭವಿಸಿತ್ತು ಎಂದು ವರದಿಯಾಗಿತ್ತು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಶ್ರೀಮತಿ ನಾಗವೇಣಿ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಅತಿಯಾದ ಪ್ಲಾಸ್ಟಿಕ್ ಬಳಕೆ ಮತ್ತು ಗಿಡ-ಮರಗಳ ಕೊರತೆಯಿಂದ ಪರಿಸರ ವಿನಾಶದ ಅಂಚಿನತ್ತ ಸಾಗುತ್ತಿದೆ. ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ, ತಮ್ಮ ಮನೆಗಳ ಸುತ್ತಮುತ್ತ ಗಿಡ-ಮರಗಳನ್ನು ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗಂಗಾಧರ ಸಿ.ಎಂ., ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ ಟಿ. ಚವಾಣ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಶಿಂದೆ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಗಿರಿಮಲ್ಲಪ್ಪ ಶಟ್ಟರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್. ಶಿವನಗೌಡ್ರ, ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ ಪದ್ಮಶ್ರೀ ಪಾಟೀಲ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ್ರ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಎಂ.ಎ. ಸಂಗನಾಳ, ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸಂತೋಷಕುಮಾರ್ ಕೆಂಚಪ್ಪನವರ, ಚಂದ್ರಹಾಸ ವರ್ಣೇಕರ ಸೇರಿದಂತೆ ಹಲವು ಗಣ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನೀರಿನಲ್ಲಿ ಮುಳುಗಿ ಮೃತಪಟ್ಟ ಮಗು; ಉಪ್ಪಿನಲ್ಲಿ ಇಟ್ಟು ಜೀವ ಉಳಿಸಲು ಪೋಷಕರ ಪ್ರಯತ್ನ!

ಬಾಗಲಕೋಟೆ: ಎದುರಿನ ಮನೆಯ ನೀರಿನ ಸಂಪ್‌ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್-38ರಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಆಟವಾಡುತ್ತಿದ್ದ ವೇಳೆ ಮಗು ನೀರಿನ ಸಂಪ್‌ಗೆ ಬಿದ್ದಿದ್ದು, ಮುಳುಗಿದ ಪರಿಣಾಮ ಮೃತಪಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಳಿಕ ದುಃಖದಲ್ಲಿ ಮುಳುಗಿದ್ದ ಕುಟುಂಬಸ್ಥರು, ನೀರಿನಲ್ಲಿ ಮುಳುಗಿದವರನ್ನು ಉಪ್ಪಿನಲ್ಲಿ ಮಲಗಿಸಿದರೆ ಮತ್ತೆ ಜೀವ ಬರುತ್ತದೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಮಗುವನ್ನು ಬದುಕಿಸಲು ಪ್ರಯತ್ನ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯ ಶವಾಗಾರದ ಮುಂಭಾಗದಲ್ಲಿ ಮಗುವಿನ ಮುಖವನ್ನು ಮಾತ್ರ ಹೊರಗಿಟ್ಟು, ಇಡೀ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಡಲಾಗಿತ್ತು.

ಅಲ್ಲದೆ, ಮಗುವಿನ ಕಿವಿಯ ಬಳಿ ಮೊಬೈಲ್‌ನಲ್ಲಿ ಕುರಾನ್ ಪಠಣವನ್ನು ಹಾಕಿ, ಮಗು ಬದುಕಿ ಬರಲಿ ಎಂದು ಪೋಷಕರು ಹಾಗೂ ಕುಟುಂಬಸ್ಥರು ಪ್ರಾರ್ಥನೆ ಸಲ್ಲಿಸಿದರು. ಈ ದೃಶ್ಯ ಅಲ್ಲಿದ್ದವರ ಮನಕಲಕುವಂತೆ ಮಾಡಿತು.

ಸುಮಾರು ಎರಡು ಗಂಟೆಗಳ ಕಾಲ ಮಗುವಿನ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಡಲಾಗಿತ್ತು. ಬಳಿಕ ವೈದ್ಯರು ಕುಟುಂಬಸ್ಥರಿಗೆ ಸೂಕ್ತ ಮಾಹಿತಿ ಹಾಗೂ ಮನವರಿಕೆ ಮಾಡಿಕೊಟ್ಟ ನಂತರ ಮಗುವನ್ನು ಉಪ್ಪಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ಪಡೆಯಲಾಯಿತು.

ನಂತರ ಮಗುವಿನ ಮೃತದೇಹವನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಈ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರ ದಾಳಿ; ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿ ನಗರದ ಅನ್ವರ್ ಕಾಲೋನಿಯಲ್ಲಿ ನಡೆದಿದೆ.

ಹಳದಮ್ಮ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ (35) ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ವಿಶ್ವನಾಥ್ ಟೀ ಕುಡಿಯಲು ಸ್ಥಳೀಯ ಅಂಗಡಿಗೆ ತೆರಳಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ದಾಳಿ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಹಲ್ಲೆ ವೇಳೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಗಾಯಗೊಂಡಿರುವ ವಿಶ್ವನಾಥ್ ಅವರ ಎರಡೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಕೈಗಳು ತುಂಡಾಗುವ ಹಂತಕ್ಕೆ ತಲುಪಿವೆ ಎಂದು ತಿಳಿದುಬಂದಿದೆ. ಗಾಯಾಳುವಿಗೆ ಭದ್ರಾವತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಸ್ಪೀಟ್ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, ಜೂನ್ 13ರವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೂನ್ 13ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10 ಮತ್ತು 11ರಂದು ಕೂಡ ಮಳೆ ಮುಂದುವರಿಯಲಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಇಲಾಖೆ ಸಲಹೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಸನ, ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಜೂನ್ 14ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9ರಂದು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಜೂನ್ 9ರಂದು ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕೆಲವು ಪ್ರದೇಶಗಳಲ್ಲಿ 204.5 ಮಿ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಜೂನ್ 10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನಲ್ಲಿ ಜೂನ್ 10ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಜೂನ್ 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ರೌಡಿಗಳ ವಿರುದ್ಧ ಪೊಲೀಸ್ ಸಮರ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಅರೆಸ್ಟ್!

ಬೆಂಗಳೂರು: ರಾಜ್ಯದಲ್ಲಿ ರೌಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಕಟ್ಟುನಿಟ್ಟಿನ ಸೂಚನೆಗಳ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಪ್ರಕರಣಗಳ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಸಿಸಿಬಿ ಬಂಧಿಸಿದೆ.

ಕೆ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿನೋಬನಗರ ನಿವಾಸಿ ಹಾಗೂ ರೌಡಿಶೀಟರ್ ಆಗಿರುವ ಶಾಹಿದ್ ಪಾಷಾ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದ ವಾರಂಟ್ ಇದ್ದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಉನ್ನತ ಮಟ್ಟದ ಸಭೆಯಲ್ಲಿಯೇ ರಾಜ್ಯದಲ್ಲಿ ರೌಡಿಗಳ ಹಾವಳಿಗೆ ಬ್ರೇಕ್ ಹಾಕುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ‘ಆ್ಯಂಟಿ ರೌಡಿ ಸ್ಕ್ವಾಡ್’ ರಚಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಪೊಲೀಸ್ ವಲಯ ಹಾಗೂ ಠಾಣೆ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ ರಚಿಸುವಂತೆ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ರೌಡಿ ನಿಗ್ರಹ ದಳವು ರೌಡಿಶೀಟರ್‌ಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸುವುದು, ಹೊಸ ಅಪರಾಧಿ ಗುಂಪುಗಳನ್ನು ಗುರುತಿಸುವುದು, ಗುಪ್ತಚರ ಮಾಹಿತಿ ಸಂಗ್ರಹಿಸುವುದು ಹಾಗೂ ಅಗತ್ಯವಿದ್ದಲ್ಲಿ ಗೂಂಡಾ ಕಾಯ್ದೆ, ಕೆಸಿಒಸಿಎ ಸೇರಿದಂತೆ ವಿವಿಧ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ.

ಅಪಾಯದ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ, ದಿಢೀರ್ ತಪಾಸಣೆ ಹಾಗೂ ಸ್ಥಳೀಯ ಗುಪ್ತಚರ ಜಾಲದೊಂದಿಗೆ ಸಮನ್ವಯ ಸಾಧಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದು, ಅದರ ಬೆನ್ನಲ್ಲೇ ಪೊಲೀಸರು ರೌಡಿಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪೇಂಟ್ ಕೆಲಸದ ನೆಪದಲ್ಲಿ ಬಂದು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು!

ನೆಲಮಂಗಲ: ಮನೆಗೆ ಪೇಂಟ್ ಕೆಲಸ ಮಾಡಲು ಬಂದಿದ್ದ ವ್ಯಕ್ತಿಗಳೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ.

ನಿತ್ಯಾ ಚಂದ್ರಶೇಖರ್ ದಂಪತಿಗೆ ಸೇರಿದ ಮನೆಯಲ್ಲಿ ಸುಮಾರು 254 ಗ್ರಾಂ ತೂಕದ, ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ನಿತ್ಯಾ ಚಂದ್ರಶೇಖರ್ ದಂಪತಿಗಳು ಎರಡು ಅಂತಸ್ತಿನ ಮನೆಯನ್ನು ನಿರ್ಮಿಸಿದ್ದು, ಕೆಲವು ತಿಂಗಳ ಹಿಂದೆ ಬಾಡಿಗೆದಾರರು ಮನೆ ಖಾಲಿ ಮಾಡಿದ್ದರು. ಇದನ್ನು ಗಮನಿಸಿದ್ದ ಪೇಂಟರ್ ಲಿಂಗರಾಜು, ಮನೆಗೆ ಬಂದು ಪೇಂಟ್ ಕೆಲಸ ಮಾಡಿಕೊಡುವುದಾಗಿ ಹೇಳಿ ತನ್ನ ಮೊಬೈಲ್ ಸಂಖ್ಯೆಯನ್ನು ನೀಡಿದ್ದನು.

ಕೆಲವು ದಿನಗಳ ಬಳಿಕ ಚಂದ್ರಶೇಖರ್ ಅವರು ಲಿಂಗರಾಜುವನ್ನು ಸಂಪರ್ಕಿಸಿ ಮನೆಯ ಮೊದಲ ಮಹಡಿಗೆ ಪೇಂಟ್ ಕೆಲಸ ನೀಡಿದ್ದರು. ಬಳಿಕ ವಾಸವಿದ್ದ ಭಾಗದ ಕಿಟಕಿ ಹಾಗೂ ಕೊಠಡಿಗಳಿಗೆ ಸಹ ಬಣ್ಣ ಬಳಿಯುವಂತೆ ಸೂಚಿಸಿದ್ದರು. ಅದರಂತೆ ಪವನ್ ಕುಮಾರ್, ಮಂಜುನಾಥ್ ಹಾಗೂ ವೆಂಕಟೇಶ್ ಎಂಬುವರು ಮನೆಗೆ ಬಂದು ಪೇಂಟ್ ಕೆಲಸ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಮನೆಯ ಒಂದು ಕೊಠಡಿಯಲ್ಲಿ ಪೇಂಟ್ ಕೆಲಸ ನಡೆಯುತ್ತಿದ್ದಾಗ, ಮಗುವಿನ ಅಳುವ ಶಬ್ದ ಕೇಳಿಬಂದ ಕಾರಣ ಮನೆಯವರು ಹೊರಗೆ ತೆರಳಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡ ಆರೋಪಿಗಳು ಬೀರುವಿನಲ್ಲಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಳವಾದ ಚಿನ್ನಾಭರಣದ ಒಟ್ಟು ತೂಕ 254 ಗ್ರಾಂ ಆಗಿದ್ದು, ಇದರ ಮೌಲ್ಯ ಸುಮಾರು 25 ಲಕ್ಷ ರೂಪಾಯಿಗಳಾಗುತ್ತದೆ ಎಂದು ಅಂದಾಜಿಸಲಾಗಿದೆ.

ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳವಾದ ಚಿನ್ನಾಭರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳನ್ನು ಕೂಡಿ ಹಾಕಿದ ಗ್ರಾಮಸ್ಥರು, ಬಿಲ್ ಕಲೆಕ್ಟರ್ ಮೇಲೆ ಹಲ್ಲೆ

ದಾವಣಗೆರೆ: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದಿದ್ದು, ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆಂಚಪ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊಟ್ರೇಶ್ ಅವರನ್ನು ಗ್ರಾಮಸ್ಥರು ಕೂಡಿ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆದಿದೆ.

ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಇಂದು ಗ್ರಾಮಕ್ಕೆ ಆಗಮಿಸಿದ ಅಧಿಕಾರಿಗಳನ್ನು ಗ್ರಾಮಸ್ಥರು ರಸ್ತೆಯ ಕಟ್ಟೆಯ ಮೇಲೆ ಕೂರಿಸಿಕೊಂಡು ಸಮಸ್ಯೆಗಳ ಕುರಿತು ಪ್ರಶ್ನಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿ ತಮ್ಮ ಪ್ರತಿಭಟನೆ ಮುಂದುವರಿಸಿದರು.

ಈ ವೇಳೆ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಅನುದಾನದ ಹಣ ದುರುಪಯೋಗಗೊಂಡಿರುವುದರಿಂದಲೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಅವರು ದೂರಿದರು.

ಘಟನೆ ವೇಳೆ ಸ್ಥಳದಲ್ಲಿದ್ದ ಬಿಲ್ ಕಲೆಕ್ಟರ್ ವಿರುದ್ಧವೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಗಳೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕುಡಿಯುವ ನೀರಿನ ಸಮಸ್ಯೆ ಹಾಗೂ ಗ್ರಾಮಸ್ಥರ ಆರೋಪಗಳ ಕುರಿತು ಸಂಬಂಧಿತ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!