Home Blog Page 6

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

0

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆ ಶ್ರೀಶೈಲದ ವಡ್ಡೇರಾ ಪ್ರದೇಶದ ಖಾಸಗಿ ಹೋಟೆಲ್‌ನಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು ಸುಧಾಕರ್ (36), ಗೋಗುಳ ಆದಿಲಕ್ಷ್ಮಿ (50), ಮಲ್ಲೇಶ್ವರಿ (45), ಶ್ರೀದೇವಿ (33) ಹಾಗೂ ಮಣಿಕಂಠ (15) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಬಟ್ಟಲಪಲ್ಲಿ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ದಿನ ರೂಮ್‌ನಿಂದ ಹೊರಬಾರದ ಕುಟುಂಬ

ಜುಲೈ 28ರಂದು ಕುಟುಂಬದ ಸದಸ್ಯರು ಆಟೋದಲ್ಲಿ ಶ್ರೀಶೈಲಕ್ಕೆ ಆಗಮಿಸಿ, ವಡ್ಡೇರಾದ ಖಾಸಗಿ ಹೋಟೆಲ್‌ನಲ್ಲಿ ರೂಮ್ ಸಂಖ್ಯೆ 11ನ್ನು ಪಡೆದುಕೊಂಡಿದ್ದರು. ರೂಮ್ ಪಡೆದ ಬಳಿಕ ಸತತ ಮೂರು ದಿನಗಳಾದರೂ ಯಾರೊಬ್ಬರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿಗೆ ಅನುಮಾನ ಮೂಡಿದೆ.

ರೂಮ್‌ನ ಬಳಿ ಪರಿಶೀಲಿಸಿದಾಗ ದುರ್ವಾಸನೆ ಬರುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸ್ನಾನಗೃಹದಲ್ಲಿ ಐವರ ಮೃತದೇಹ

ಮಾಹಿತಿ ಪಡೆದ ಪೊಲೀಸರು ಹೋಟೆಲ್‌ಗೆ ತೆರಳಿ ಬಾಗಿಲು ತೆರೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ನಾನಗೃಹದಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರ ಮೃತದೇಹಗಳು ಪತ್ತೆಯಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಆರ್ಥಿಕ ಸಮಸ್ಯೆಯೇ ಕುಟುಂಬ ಈ ನಿರ್ಧಾರ ಕೈಗೊಳ್ಳಲು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕುಟುಂಬದ ಹಿನ್ನೆಲೆ, ಆರ್ಥಿಕ ಪರಿಸ್ಥಿತಿ ಹಾಗೂ ಸಾವಿಗೆ ಕಾರಣವಾದ ನಿಖರ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

0

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ, ಸ್ನೇಹಿತರಿಗೆ ಅದ್ಧೂರಿ ಪಾರ್ಟಿ ನೀಡುತ್ತಿದ್ದ ಆರೋಪದ ಮೇಲೆ ಖತರ್ನಾಕ್ ಮನೆಗಳ್ಳ ಶಿವರಸನ್ (34)ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ವಾಸವಿದ್ದ ಶಿವರಸನ್ ಬೆಳಗಿನ ಜಾವ ಬೀಗ ಹಾಕಿದ್ದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಎನ್ನಲಾಗಿದ್ದು, ಬಂಧನದ ಬಳಿಕ 8 ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯಿಂದ 36 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶೋಕಿಗಾಗಿ ಕಳ್ಳತನಕ್ಕೆ ಇಳಿದ ಕಲಾವಿದ

ಮೂಲತಃ ಕಲಾವಿದನಾಗಿ ಕೆಲಸ ಮಾಡುತ್ತಿದ್ದ ಶಿವರಸನ್, ಐಷಾರಾಮಿ ಜೀವನದ ಆಸೆಗೆ ಕಳ್ಳತನದ ಹಾದಿ ಹಿಡಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಆತ, ಬೆಳಗಿನ ಜಾವ ಬೈಕ್‌ನಲ್ಲಿ ಸಂಚರಿಸಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.

ಕದ್ದ ಹಣದ ಒಂದು ಭಾಗವನ್ನು ಆಟೋ ಚಾಲಕರು ಹಾಗೂ ಬಡವರಿಗೆ ನೀಡುತ್ತಿದ್ದ ಶಿವರಸನ್, ಅವರ ಮೂಲಕವೇ ಬೀಗ ಹಾಕಿರುವ ಮನೆಗಳ ಮಾಹಿತಿ ಸಂಗ್ರಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳತನದ ಹಣದಲ್ಲೇ ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ ನೀಡುತ್ತಿದ್ದ ಎನ್ನಲಾಗಿದೆ.

ಆರೋಪಿಯ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

8 ಮನೆಗಳ್ಳತನ ಪ್ರಕರಣಗಳು ಪತ್ತೆ

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬೇಗೂರು ಪೊಲೀಸರು ಶಿವರಸನ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂರು, ರಾಮಮೂರ್ತಿನಗರದ ಎರಡು ಹಾಗೂ ಆಲವಳ್ಳಿ, ಹೊಸಕೋಟೆ (ಹನಗೊಂಡನಹಳ್ಳಿ) ಮತ್ತು ಕೆ.ಆರ್.ಪುರಂ ವ್ಯಾಪ್ತಿಯ ತಲಾ ಒಂದು ಮನೆಗಳ್ಳತನ ಪ್ರಕರಣಗಳು ಸೇರಿ ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ.

ಬಂಧಿತನಿಂದ 196 ಗ್ರಾಂ ಚಿನ್ನ ಹಾಗೂ 4 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 36 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಹಿಂದಿನ ಕೃತ್ಯಗಳು ಹಾಗೂ ಇತರ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಹೈಕೋರ್ಟ್

0

ಲಕ್ನೋ: ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪ್ರಯಾಗ್‌ರಾಜ್‌ನ ಖಾಸಗಿ ಶಾಲೆಯೊಂದರ ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿಯ ಮೂಲಕ ಈ ಅರ್ಜಿ ಸಲ್ಲಿಸಿದ್ದಳು. 10ನೇ ತರಗತಿ ಉತ್ತೀರ್ಣಳಾಗಿ ಅದೇ ಶಾಲೆಯಲ್ಲಿ 11ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದ್ದ ಆಕೆ, 6ನೇ ತರಗತಿಯಿಂದಲೂ ಹಿಜಾಬ್ ಧರಿಸುತ್ತಿದ್ದೇನೆ ಎಂದೂ, ಇದು ಧಾರ್ಮಿಕವಾಗಿ ಕಡ್ಡಾಯ ಆಚರಣೆ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಿದ್ದಳು.

ನ್ಯಾಯಮೂರ್ತಿಗಳಾದ ಜೆ.ಜೆ. ಮುನೀರ್ ಮತ್ತು ಇಂದ್ರಜಿತ್ ಶುಕ್ಲಾ ಅವರಿದ್ದ ದ್ವಿಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ಹಿಜಾಬ್ ಧರಿಸದಿರುವುದರಿಂದ ಧರ್ಮಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಈ ಹಿಂದೆಯೂ ವಿವಿಧ ಹೈಕೋರ್ಟ್‌ಗಳು ಏಕಾಭಿಪ್ರಾಯದ ತೀರ್ಪುಗಳನ್ನು ನೀಡಿವೆ ಎಂದು ಪೀಠ ಉಲ್ಲೇಖಿಸಿತು. ಶಾಲೆಯ ತರಗತಿಗಳ ಫೋಟೋಗಳನ್ನು ಪರಿಶೀಲಿಸಿದ ನ್ಯಾಯಾಲಯ, ಅರ್ಜಿದಾರ ವಿದ್ಯಾರ್ಥಿನಿಯ ಸಮುದಾಯದ ಇತರ ಯಾವುದೇ ವಿದ್ಯಾರ್ಥಿನಿಯರೂ ಹಿಜಾಬ್ ಧರಿಸಿಲ್ಲ, ಆಕೆ ಮಾತ್ರ ಧರಿಸಿದ್ದಾಳೆ ಎಂಬುದನ್ನು ಗಮನಿಸಿತು.

ಸಮವಸ್ತ್ರ ನಿಯಮ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾನವಾಗಿ ಅನ್ವಯಿಸುತ್ತದೆ ಎಂದೂ, ವೈಯಕ್ತಿಕ ಆಯ್ಕೆಯ ಆಧಾರದ ಮೇಲೆ ವಿನಾಯಿತಿ ನೀಡಿದರೆ ಸಮವಸ್ತ್ರ ಪರಿಕಲ್ಪನೆ ಮತ್ತು ಶಾಲಾ ಶಿಸ್ತೇ ಹಾಳಾಗುತ್ತದೆ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಆವರಣದಲ್ಲಿ ಸಮವಸ್ತ್ರ ಸಂಹಿತೆ ಜಾರಿಗೊಳಿಸುವ ಸಂಪೂರ್ಣ ಸ್ವಾಯತ್ತತೆ ಇದೆ ಎಂದೂ, ಸಮವಸ್ತ್ರ ತಾರತಮ್ಯರಹಿತವಾಗಿ ಸಮಾನತೆ-ಶಿಸ್ತಿಗಾಗಿ ಇರುವವರೆಗೂ ಸಂಸ್ಥೆಯ ನಿರ್ಧಾರವೇ ಅಂತಿಮ ಎಂದೂ ಕೋರ್ಟ್ ಸ್ಪಷ್ಟಪಡಿಸಿತು.

ಶಾಲಾ ಆಡಳಿತ ಮಂಡಳಿ, ರಾಜ್ಯ ಸರ್ಕಾರ ಹಾಗೂ ಸಿಬಿಎಸ್‌ಇ ಸಹ ವಿದ್ಯಾರ್ಥಿನಿಯ ಅರ್ಜಿಯನ್ನು ವಿರೋಧಿಸಿದ್ದವು. ವಿವಿಧ ಸಮುದಾಯಗಳ ಮಕ್ಕಳು ಕಲಿಯುವ ಶಾಲೆಯಲ್ಲಿ ಒಬ್ಬರಿಗೆ ವಿಶೇಷ ವಿನಾಯಿತಿ ನೀಡಿದರೆ ಶಾಲಾ ಶಿಸ್ತು ಕದಡುತ್ತದೆ ಎಂಬ ಶಾಲೆಯ ವಾದವನ್ನು ನ್ಯಾಯಾಲಯ ಪುರಸ್ಕರಿಸಿತು.

ಚಾಮರಾಜನಗರ ಶೂಟೌಟ್ ಪ್ರಕರಣ: ಮೂವರ ಸಾವಿನ ತನಿಖೆ CIDಗೆ ವರ್ಗಾವಣೆ!

0

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಸಲೀಂ ಅವರ ಆದೇಶದ ಮೇರೆಗೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸಲಾಗಿದೆ. ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಮುಂದಿನ ತನಿಖೆಯನ್ನು ಸಿಐಡಿಯ ವಿಶೇಷ ಘಟಕ ನಡೆಸಲಿದೆ.

ಈ ಸಂಬಂಧ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸಿಐಡಿಯ ವಿಶೇಷ ಘಟಕದಿಂದ ಪ್ರಕರಣದ ತನಿಖೆ ಮುಂದುವರಿಸುವಂತೆ ಆದೇಶಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಇದೀಗ ನಾಲ್ಕೂ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಗುಂಡಿನ ದಾಳಿ ನಡೆದ ಸಂದರ್ಭ, ಫೈರಿಂಗ್‌ಗೆ ಕಾರಣ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಮೃತಪಟ್ಟವರ ನಡುವೆ ನಡೆದ ಸಂಘರ್ಷ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ಸಿಐಡಿ ತನಿಖೆ ನಡೆಸುವ ಸಾಧ್ಯತೆಯಿದೆ.

ಹನೂರು ಶೂಟೌಟ್ ಪ್ರಕರಣದ ಹಿನ್ನೆಲೆ

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 14ರಂದು ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದರು. ಮೃತರನ್ನು ಹನೂರು ತಾಲೂಕಿನ ತೋಮಿಯರ್‌ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿತ್ತು.

ಮೂವರು ಅರಣ್ಯ ಪ್ರದೇಶಕ್ಕೆ ನುಗ್ಗಿ ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪವನ್ನು ಅರಣ್ಯ ಇಲಾಖೆ ಮಾಡಿತ್ತು. ಇದೇ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಅವರ ನಡುವೆ ಸಂಘರ್ಷ ನಡೆದಿದ್ದು, ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.

ಆದರೆ, ಘಟನೆ ಬಳಿಕ ಪ್ರಕರಣ ದೇಶಾದ್ಯಂತ ಗಮನ ಸೆಳೆದಿತ್ತು. ಮೃತರು ಕಳ್ಳಬೇಟೆಗೆ ಬಂದಿದ್ದರು ಎಂಬುದಕ್ಕೆ ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದ ಸಾಕ್ಷ್ಯಗಳ ಬಗ್ಗೆಯೂ ವಿವಿಧ ಅನುಮಾನಗಳು ವ್ಯಕ್ತವಾಗಿದ್ದವು. ಪ್ರಕರಣ ವಿಧಾನಸಭೆ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದ್ದು, ಸರ್ಕಾರ ವಿಪಕ್ಷಗಳ ತೀವ್ರ ವಿರೋಧ ಎದುರಿಸಬೇಕಾಯಿತು.

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೂಡ ಘಟನೆಯನ್ನು ಖಂಡಿಸಿದ್ದರು ಎನ್ನಲಾಗಿದ್ದು, ಪ್ರಕರಣದ ಕುರಿತು ವ್ಯಾಪಕ ಚರ್ಚೆ ನಡೆದಿತ್ತು. ಇದೀಗ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದರಿಂದ ಶೂಟೌಟ್‌ನ ಸಂಪೂರ್ಣ ಹಿನ್ನೆಲೆ, ಗುಂಡಿನ ದಾಳಿಗೆ ಕಾರಣ ಹಾಗೂ ಘಟನೆಯ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳ ಕುರಿತು ತನಿಖೆಯಲ್ಲಿ ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆ ಮೂಡಿದೆ.

‘ಊರ್ವಶಿ’ ಚಿತ್ರಮಂದಿರಕ್ಕೆ ಹೈಕೋರ್ಟ್ ಮಧ್ಯಂತರ ರಕ್ಷಣೆ: ನೆಲಸಮ, ವಸ್ತು ತೆರವಿಗೆ ತಡೆ

ಬೆಂಗಳೂರು: ನೆಲಸಮದ ಪ್ರಕ್ರಿಯೆ ಆರಂಭವಾಗಿದ್ದ ಬೆಂಗಳೂರಿನ ಐತಿಹಾಸಿಕ ‘ಊರ್ವಶಿ’ ಚಿತ್ರಮಂದಿರಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ರಕ್ಷಣೆ ನೀಡಿದೆ. ಕಟ್ಟಡ ಧ್ವಂಸ ಮಾಡುವುದು ಮಾತ್ರವಲ್ಲದೆ, ಒಳಗಿರುವ ಯಾವುದೇ ವಸ್ತುಗಳನ್ನು ತೆರವುಗೊಳಿಸದಂತೆ ಭೂಮಾಲೀಕರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಚಿತ್ರಮಂದಿರದ ಜಾಗವನ್ನು ಖಾಲಿ ಮಾಡಲು ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್‌ 30ರವರೆಗೆ ಗಡುವು ನೀಡಿರುವುದಾಗಿ ‘ಊರ್ವಶಿ’ ಆಡಳಿತ ಮಂಡಳಿ ತಿಳಿಸಿದೆ. ಆದರೆ, ಗಡುವಿಗೂ ಮುನ್ನವೇ ಭೂಮಾಲೀಕರು ಸ್ಥಳ ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂಬುದು ಚಿತ್ರಮಂದಿರದ ಪರ ವಾದವಾಗಿತ್ತು.

ಸ್ಥಳ ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಚಿತ್ರಮಂದಿರದ ದುಬಾರಿ ಪ್ರೊಜೆಕ್ಟರ್‌, ಸ್ಕ್ರೀನ್‌ ಹಾಗೂ ಸೀಟುಗಳಿಗೆ ಹಾನಿಯಾಗಿದೆ ಎಂದು ಹಿರಿಯ ವಕೀಲ ಶ್ಯಾಮ್‌ಸುಂದರ್‌ ಹೈಕೋರ್ಟ್‌ನಲ್ಲಿ ಆರೋಪಿಸಿದ್ದಾರೆ.

ಭೂಮಾಲೀಕರ ಪರ ವಕೀಲರು ಇದನ್ನು ವಿರೋಧಿಸಿ, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಅಗತ್ಯ ಪ್ರಮಾಣಪತ್ರವನ್ನು ಚಿತ್ರಮಂದಿರದ ಆಡಳಿತ ಮಂಡಳಿ ಸಲ್ಲಿಸಿಲ್ಲ. ಹೀಗಾಗಿ ತಡೆಯಾಜ್ಞೆ ನೀಡಲು ಯಾವುದೇ ಆಧಾರವಿಲ್ಲ ಎಂದು ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ಸೂಚನೆಯಂತೆ ಅಗತ್ಯ ಪ್ರಮಾಣಪತ್ರ ಸಲ್ಲಿಸುವಂತೆ ‘ಊರ್ವಶಿ’ ಆಡಳಿತ ಮಂಡಳಿಗೆ ಸೂಚಿಸಿತು. ಆಗಸ್ಟ್‌ 25ರಂದು ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ನೆಲಸಮ ಕಾರ್ಯ ಹಾಗೂ ಯಾವುದೇ ವಸ್ತುಗಳ ತೆರವು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ.

ಬೆಂಗಳೂರು ನಗರದ ಸಿನಿಮಾ ಸಂಸ್ಕೃತಿಯೊಂದಿಗೆ ದಶಕಗಳಿಂದ ಗುರುತಿಸಿಕೊಂಡಿರುವ ‘ಊರ್ವಶಿ’ಯಲ್ಲಿ ಸಾವಿರಕ್ಕೂ ಅಧಿಕ ಆಸನಗಳಿವೆ. ಐದು ಸಾವಿರಕ್ಕೂ ಹೆಚ್ಚು ಸಿನಿಮಾಗಳು ಇಲ್ಲಿ ತೆರೆಕಂಡಿದ್ದು, ಹಲವು ಚಿತ್ರಗಳು ಬ್ಲಾಕ್‌ಬಸ್ಟರ್‌ ಯಶಸ್ಸು ಕಂಡಿವೆ. ಹೀಗಾಗಿ ಚಿತ್ರಮಂದಿರದ ಭವಿಷ್ಯದ ಕುರಿತು ನಡೆಯುತ್ತಿರುವ ಕಾನೂನು ಹೋರಾಟದ ಮೇಲೆ ಸಿನಿಪ್ರಿಯರ ಗಮನ ನೆಟ್ಟಿದೆ.

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದ ತನಿಖೆಯನ್ನು CID ತೀವ್ರಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 329 ಅಭ್ಯರ್ಥಿಗಳಿಗೆ CID ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.

ಜಾರಿ ನಿರ್ದೇಶನಾಲಯ (ED) ನಡೆಸಿದ ವಿಚಾರಣೆ ವೇಳೆ ಕೆಲವರು ಅಕ್ರಮದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ CID ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ED ವಿಚಾರಣೆಯಲ್ಲಿ ಲಭ್ಯವಾದ ಮಾಹಿತಿ ಹಾಗೂ ಹೇಳಿಕೆಗಳನ್ನು ಆಧರಿಸಿ 329 ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ನೋಟಿಸ್ ಪಡೆದಿರುವ ಎಲ್ಲ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ CID ಅಧಿಕಾರಿಗಳು ಸೂಚಿಸಿದ್ದಾರೆ. ಅಭ್ಯರ್ಥಿಗಳ ವಿಚಾರಣೆ ಮೂಲಕ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯೇ, ಅಕ್ರಮದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ಇಷ್ಟು ದೊಡ್ಡ ಸಂಖ್ಯೆಯ ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ನೋಟಿಸ್ ನೀಡಿರುವುದು ಪ್ರಕರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ತನಿಖೆಯ ವೇಳೆ ಅಕ್ರಮದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳು ಹಾಗೂ ಪ್ರಭಾವಿಗಳ ಹೆಸರುಗಳು ಹೊರಬರುವ ಸಾಧ್ಯತೆಯೂ ಇದೆ.

ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 OMR ಕಾರ್ಬನ್ ಶೀಟ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ.

ಅಭ್ಯರ್ಥಿಗಳ ಮೂಲ OMR ಶೀಟ್‌ಗಳು ಮತ್ತು ಅವರಿಂದ ವಶಪಡಿಸಿಕೊಂಡಿರುವ ಕಾರ್ಬನ್ ಶೀಟ್‌ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ FSLಗೆ ಕಳುಹಿಸಲಾಗಿದೆ. ಪರೀಕ್ಷೆಯ ಬಳಿಕ ಪರೀಕ್ಷಾ ಉತ್ತರ ಪತ್ರಿಕೆಗಳಲ್ಲಿ ಯಾವುದೇ ರೀತಿಯ ತಿದ್ದುಪಡಿ ಅಥವಾ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್‌ ಕುರಿತು CID ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಿದ್ದಾರೆ. ಅಭ್ಯರ್ಥಿಗಳ ಹೇಳಿಕೆಗಳು, OMR ಶೀಟ್‌ಗಳ ಪರಿಶೀಲನೆ ಹಾಗೂ EDಯಿಂದ ಲಭ್ಯವಾದ ಮಾಹಿತಿಯನ್ನು ಆಧರಿಸಿ ತನಿಖೆ ಮುಂದುವರಿಯಲಿದೆ.

ಈ ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹಾಗೂ ಅಕ್ರಮದಲ್ಲಿ ಭಾಗಿಯಾಗಿರುವವರ ವಿವರಗಳು ಹೊರಬರುವ ಸಾಧ್ಯತೆಯಿದೆ.

ಶ್ರೀಲಂಕಾ ವಿರುದ್ಧದ ಕೊಲಂಬೊ ಟೆಸ್ಟ್ʼನಲ್ಲಿ ಜಡೇಜಾಗೆ ವಿಶೇಷ ಮೈಲಿಗಲ್ಲು: WTC ಇತಿಹಾಸದಲ್ಲಿ 50 ಪಂದ್ಯಗಳ ದಾಖಲೆ

0

ಕೊಲಂಬೊ: ಜಗತ್ತಿನ ನಂಬರ್ ಒನ್ ಟೆಸ್ಟ್ ಆಲ್ರೌಂಡರ್ ರವೀಂದ್ರ ಜಡೇಜಾ, ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಕೊಲಂಬೊ ಟೆಸ್ಟ್ ಪಂದ್ಯ ಜಡೇಜಾ ಪಾಲಿಗೆ ವಿಶೇಷವಾಗಿದ್ದು, ಇದು ಅವರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೃತ್ತಿಜೀವನದ 50ನೇ ಟೆಸ್ಟ್ ಪಂದ್ಯವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ 50 ಟೆಸ್ಟ್ ಪಂದ್ಯಗಳನ್ನು ಆಡಿದ ಭಾರತದ ಹಾಗೂ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ. ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಜಡೇಜಾ, ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ತಂಡಕ್ಕೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದ್ದಾರೆ.

2012ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ ರವೀಂದ್ರ ಜಡೇಜಾ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಆವೃತ್ತಿಯಿಂದಲೂ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. 2019-21ರ ಮೊದಲ WTC ಆವೃತ್ತಿಯಲ್ಲಿ ಜಡೇಜಾ ಭಾರತ ಪರ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಬಳಿಕ 2021-23ರ ಅವಧಿಯಲ್ಲಿ 13 ಟೆಸ್ಟ್ ಪಂದ್ಯಗಳು ಹಾಗೂ 2023-25ರ WTC ಅವಧಿಯಲ್ಲಿ 25 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. 2025-27ರ ಸಾಲಿನಲ್ಲೂ 11 ಪಂದ್ಯಗಳನ್ನು ಆಡಿರುವ ಜಡೇಜಾ ಇದೀಗ ಒಟ್ಟು 50 WTC ಪಂದ್ಯಗಳನ್ನು ಪೂರ್ಣಗೊಳಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ 50 ಪಂದ್ಯಗಳನ್ನು ಆಡಿರುವ ಜಡೇಜಾ, ಐದು ಶತಕಗಳ ಸಹಿತ 2,632 ರನ್‌ಗಳನ್ನು ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 160 ವಿಕೆಟ್‌ಗಳನ್ನು ಕಬಳಿಸಿರುವ ಅವರು, ಆಲ್ರೌಂಡರ್ ಆಗಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

WTC ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. 47 ಪಂದ್ಯಗಳೊಂದಿಗೆ ಮೊಹಮ್ಮದ್ ಸಿರಾಜ್ ಎರಡನೇ ಸ್ಥಾನದಲ್ಲಿದ್ದರೆ, ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ 46 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ರಿಷಭ್ ಪಂತ್ ಹಾಗೂ ಶುಭ್‌ಮನ್ ಗಿಲ್ ತಲಾ 42 ಟೆಸ್ಟ್ ಪಂದ್ಯಗಳೊಂದಿಗೆ ನಂತರದ ಸ್ಥಾನಗಳಲ್ಲಿದ್ದಾರೆ.

ಇನ್ನು ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ದೇವದತ್ ಪಡಿಕ್ಕಲ್ ಸತತ ಎರಡನೇ ಶತಕ ದಾಖಲಿಸಿ 117 ರನ್ ಗಳಿಸಿದರೆ, ಶುಭ್‌ಮನ್ ಗಿಲ್ 50 ಹಾಗೂ ರಿಷಭ್ ಪಂತ್ 63 ರನ್‌ಗಳ ಕೊಡುಗೆ ನೀಡಿದರು.

ಧ್ರುವ್ ಜುರೆಲ್ ಅಜೇಯ 89 ರನ್ ಗಳಿಸಿ ಶತಕದತ್ತ ಮುನ್ನಡೆಯುತ್ತಿದ್ದು, 131 ಓವರ್‌ಗಳ ಅಂತ್ಯಕ್ಕೆ ಭಾರತ 8 ವಿಕೆಟ್ ಕಳೆದುಕೊಂಡು 469 ರನ್ ಗಳಿಸಿತ್ತು. ಈ ಮೂಲಕ ಟೀಂ ಇಂಡಿಯಾ ಕೊಲಂಬೊ ಟೆಸ್ಟ್‌ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗದಲ್ಲಿ ಭಾರಿ ಮಳೆ, ಬಲವಾದ ಗಾಳಿ ಸಾಧ್ಯತೆ:

ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲೆಯ ಜನರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲೂ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸಲಹೆ ನೀಡಿದೆ.

ಕರಾವಳಿ-ಮಲೆನಾಡಿಗೆ ಯೆಲ್ಲೋ ಅಲರ್ಟ್:

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಕೂಡ ಯೆಲ್ಲೋ ಅಲರ್ಟ್ ಘೋಷಿಸಿದೆ.

ಭಾರಿ ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ನದಿ, ಹಳ್ಳ-ಕೊಳ್ಳಗಳು ಹಾಗೂ ಜಲಾಶಯಗಳ ಸಮೀಪ ತೆರಳುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

Tipu Cutout Row: ಪಾಕ್ ಪರ ಹಾಡು ಪೋಸ್ಟ್ ಮಾಡಿದ ಆರೋಪ; ಚಿಕ್ಕಮಗಳೂರಿನಲ್ಲಿ ಪ್ರಮುಖ ಆರೋಪಿ ಅರೆಸ್ಟ್!

0

ಚಿಕ್ಕಮಗಳೂರು: ಜಿಲ್ಲೆಯ ಟಿಪ್ಪು ನಗರದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಟಿಪ್ಪು ನಗರದ ನಿವಾಸಿ ಅಫ್ರಿದ್ (23) ಎಂದು ಗುರುತಿಸಲಾಗಿದೆ. ಖಾಸಗಿ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಅಫ್ರಿದ್, ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಇದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಆರೋಪ ಆತನ ಮೇಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ:

ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿವಾದಾತ್ಮಕ ವಿಡಿಯೋವನ್ನು ಸೃಷ್ಟಿಸಿ ಪೋಸ್ಟ್ ಮಾಡಿದವರಷ್ಟೇ ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದವರು ಹಾಗೂ ವಾಟ್ಸಾಪ್, ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿತ್ತು. ಈ ಕಟೌಟ್‌ ಹಿನ್ನೆಲೆಯಲ್ಲಿಟ್ಟು ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಅಳವಡಿಸಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು ಎನ್ನಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಡಿಯೋ ಹರಡುವಿಕೆಯಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆ ರಾಜ್ಯ ರಾಜಕಾರಣದಲ್ಲೂ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳಿಗೆ ಅವಕಾಶ ಸಿಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ವಹಿಸಿದ್ದಾರೆ.

ಬೆಂಗಳೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್; ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!

0

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 33 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿದೆ.

ಮೃತರನ್ನು ನವೀನ್ (33) ಎಂದು ಗುರುತಿಸಲಾಗಿದೆ. ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ನವೀನ್ ಅವರು ಬೈಕ್‌ನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಏಕಾಏಕಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನವೀನ್ ಬೈಕ್‌ನಿಂದ ಸುಮಾರು 50 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ 63 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತದ ಸಂಪೂರ್ಣ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.