Home Blog Page 6

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

0

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ಬಳಿಕ, ಆಕೆಯ ಬೆತ್ತಲೆ ವಿಡಿಯೋ ಹಾಗೂ ಫೋಟೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ, ಡಯಾಗ್ನೋಸ್ಟಿಕ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಯುವರಾಜ್ ಮನೋಹರ್ ಎಂಬುವರ ವಿರುದ್ಧ ಯುವತಿ ಆರೋಪ ಮಾಡಿದ್ದಾರೆ. ಕಳೆದ ವರ್ಷ ತಮ್ಮ ಕಚೇರಿಯಲ್ಲಿ ಪೈಲ್ಸ್ ಪರೀಕ್ಷಿಸುವ ನೆಪದಲ್ಲಿ ತಮ್ಮನ್ನು ಕರೆದುಕೊಂಡು ಹೋಗಿ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಅತ್ಯಾಚಾರದ ಬಳಿಕ ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿಕೊಂಡು, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ಆರೋಪಿಸಿದ್ದಾರೆ.

ಬ್ಲ್ಯಾಕ್‌ಮೇಲ್ ಮೂಲಕ ಕಳೆದೊಂದು ವರ್ಷದಿಂದ ಹಲವು ಬಾರಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಆರೋಪಿ ವೈದ್ಯನೇ ಬಾಡಿಗೆ ಮನೆಯನ್ನು ಮಾಡಿಕೊಟ್ಟಿದ್ದು, ಬಳಿಕ ಅಲ್ಲಿಗೆ ತೆರಳಿ ಯುವತಿಯೊಂದಿಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಇತ್ತೀಚೆಗೆ ಯುವತಿಯನ್ನು ಆಕೆಯ ಜಾತಿಯ ವಿಚಾರ ಮುಂದಿಟ್ಟುಕೊಂಡು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಿಂದ ನೊಂದಿರುವ ಯುವತಿ, ಆರೋಪಿ ವೈದ್ಯನೊಂದಿಗೆ ಇರುವ ಫೋಟೋಗಳನ್ನು ಬಿಡುಗಡೆ ಮಾಡಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿಯ ದೂರಿನ ಆಧಾರದ ಮೇಲೆ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಗಳ ಸತ್ಯಾಸತ್ಯತೆ ಕುರಿತು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರ ತನಿಖೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಘಟನೆಯ ಸಂಪೂರ್ಣ ವಿವರಗಳು ಸ್ಪಷ್ಟವಾಗಬೇಕಿದೆ.

ರಾಯರ ಭಕ್ತರೇ ಎಚ್ಚರ! ಮಂತ್ರಾಲಯ ಮಠದ ಹೆಸರಿನಲ್ಲಿ ಸೈಬರ್ ವಂಚನೆ

0

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಭಕ್ತರು ಎಚ್ಚರಿಕೆಯಿಂದ ಇರಬೇಕು ಎಂದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಎಚ್ಚರಿಕೆ ನೀಡಿದ್ದಾರೆ.

ಆರಾಧನಾ ಮಹೋತ್ಸವ, ಗುರು ವೈಭವೋತ್ಸವ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ಸಾಮಾನ್ಯ ದಿನಗಳಲ್ಲೂ ರಾಯರ ಭಕ್ತರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ರೂಂ ಬುಕ್ಕಿಂಗ್, ಪರಿಮಳ ಪ್ರಸಾದ ಆನ್‌ಲೈನ್‌ನಲ್ಲಿ ಒದಗಿಸುವುದು ಹಾಗೂ ದೇಣಿಗೆ ಸಂಗ್ರಹ ಸೇರಿದಂತೆ ವಿವಿಧ ಸೇವೆಗಳ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.

ಮಠಕ್ಕೆ ಸಂಬಂಧಿಸಿದ ಯಾವುದೇ ಸೇವೆ ಅಥವಾ ಮಾಹಿತಿ ಅಗತ್ಯವಿದ್ದಲ್ಲಿ ಭಕ್ತರು ನೇರವಾಗಿ ಮಠದ ಕಾರ್ಯಾಲಯ ಅಥವಾ ಆಡಳಿತ ಮಂಡಳಿಯನ್ನು ಸಂಪರ್ಕಿಸುವಂತೆ ಶ್ರೀ ಸುಬುಧೇಂದ್ರ ತೀರ್ಥರು ಸಲಹೆ ನೀಡಿದ್ದಾರೆ.

ದೇಣಿಗೆ ನೀಡುವವರು ಹಾಗೂ ವಿವಿಧ ಸೇವೆಗಳನ್ನು ಪಡೆಯಲು ಮುಂದಾಗುವವರು ಖಾಸಗಿ ವ್ಯಕ್ತಿಗಳು ಅಥವಾ ಅನಧಿಕೃತ ಆನ್‌ಲೈನ್ ವೇದಿಕೆಗಳನ್ನು ನಂಬಿ ಹಣ ಕಳೆದುಕೊಳ್ಳಬಾರದು ಎಂದು ಸೂಚಿಸಲಾಗಿದೆ. ಯಾವುದೇ ಅನುಮಾನ ಬಂದರೂ ಮೊದಲು ಮಠದ ಅಧಿಕೃತ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಖಚಿತಪಡಿಸಿಕೊಂಡ ಬಳಿಕವೇ ಹಣ ಪಾವತಿಸುವಂತೆ ಭಕ್ತರಿಗೆ ಮನವಿ ಮಾಡಲಾಗಿದೆ.

ಕೋಲಾರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವು!

0

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡಕಾರಿ ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ (70), ದೀಕ್ಷಿತ್ (25), ದೇವೇಂದ್ರ ಕುಮಾರ್ (41) ಹಾಗೂ ಜಿಷ್ಣು (13) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟೊಯೋಟಾ ರಿಯಾನ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ವಿಕಾಸ್, ನೀತು ಹಾಗೂ ಆದ್ವಿಕ ಗಾಯಗೊಂಡಿದ್ದು, ಅವರನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಘಟನೆ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ನೀವ್ ಬರ್ತಿರಿ, ಕಾರ್ಯಕ್ರಮ ಮಾಡ್ತಿರಿ, ಹೋಗ್ತಿರಿ ಅಷ್ಟೇ!’ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ

0

ಗದಗ: ‘ನೀವ್ ಬರ್ತಿರಿ, ಇಂತಾ ಪಂಕ್ಷನ್ ಮಾಡ್ತಿರಿ, ಹೊಗ್ತಿರಿ ಅಷ್ಟೇ. ಅರ್ಜಿ ಸ್ವೀಕರಿಸಿ ಕುಂತರೇ ಆಗಲ್ಲ, ಕೆಲಸ ಮಾಡಬೇಕು’ ಎಂದು ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಬಿಚ್ಚಿಟ್ಟಿದ್ದು, ಹಲವು ವರ್ಷಗಳಿಂದ ಸಮಸ್ಯೆಗಳನ್ನು ಹೇಳಿಕೊಂಡು ಅರ್ಜಿ ಸಲ್ಲಿಸುತ್ತಿದ್ದರೂ ಪರಿಹಾರ ಮಾತ್ರ ದೊರೆಯುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾಗಿಲ್ಲ. ಈ ಕುರಿತು ಅರ್ಜಿ ಸಲ್ಲಿಸಿದರೂ ಯಾವುದೇ ಕ್ರಮವಾಗಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.

‘ಕೊಟ್ಟ ಅಪ್ಲಿಕೇಶನ್‌ಗಳು ಮೂಲೆಯಲ್ಲಿ ಬಿದ್ದಿರುತ್ತವೆ. ಪ್ರತಿ ಬಾರಿ ಅರ್ಜಿ ಸ್ವೀಕರಿಸುತ್ತೀರಿ, ಕೆಲಸ ಮಾತ್ರ ಆಗುವುದಿಲ್ಲ’ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತೊಂಡಿಹಾಳ ರಸ್ತೆಯ ದುಸ್ಥಿತಿ ಕುರಿತು ಸ್ಥಳೀಯರು ಅಧಿಕಾರಿಗಳ ಗಮನ ಸೆಳೆದರು. 15ರಿಂದ 20 ವರ್ಷಗಳಿಂದ ರಸ್ತೆ ದುರಸ್ತಿ ನಡೆದಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ರಸ್ತೆಯ ವಾಸ್ತವ ಸ್ಥಿತಿ ತಿಳಿಯಲು ಅಧಿಕಾರಿಗಳಿಗೆ ಸವಾಲು ಹಾಕಿದರು.

‘ಒಂದ್ಸಲ ಟ್ರ್ಯಾಕ್ಟರ್‌ನಲ್ಲಿ ಆ ರಸ್ತೆಗೆ ಹೋಗಿ ಬರೋಣ ಬನ್ನಿ’ ಎಂದು ಅಧಿಕಾರಿಗಳಿಗೆ ಹೇಳಿ, ರಸ್ತೆಯ ದುಸ್ಥಿತಿಯನ್ನು ಸ್ಥಳಕ್ಕೆ ಬಂದು ನೋಡುವಂತೆ ಒತ್ತಾಯಿಸಿದರು.

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಈವರೆಗೆ ಸಮರ್ಪಕವಾಗಿ ಬಗೆಹರಿಸಿಲ್ಲ ಎಂದು ಸ್ಥಳೀಯರು ದೂರಿದರು. ಹಲವು ಬಾರಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಒಂದರ ಹಿಂದೆ ಒಂದರಂತೆ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟರು. ಪ್ರತಿ ಬಾರಿ ಅರ್ಜಿ ಸ್ವೀಕರಿಸಿ ಭರವಸೆ ನೀಡಲಾಗುತ್ತದೆ. ಆದರೆ, ಸಮಸ್ಯೆಗಳು ಮಾತ್ರ ಬಗೆಹರಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೆಲಕಾಲ ಮೌನವಾಗಿ ಕುಳಿತುಕೊಳ್ಳುವಂತಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಕೇವಲ ಅರ್ಜಿ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂತು.

ಜನರೇ ಸಿಕ್ಕ ಸಿಕ್ಕ ಕ್ಲಿನಿಕ್‌ಗೆ ಹೋಗಬೇಡಿ! ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!

0

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಕಲಿ ಕ್ಲಿನಿಕ್‌ಗಳು ಹಾಗೂ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಜನರ ಆರೋಗ್ಯ ಮತ್ತು ಜೀವದ ಜೊತೆ ಚೆಲ್ಲಾಟ ನಡೆಸಲಾಗುತ್ತಿದೆ.

ಸೂಕ್ತ ವೈದ್ಯಕೀಯ ಪದವಿ, ತರಬೇತಿ ಹಾಗೂ ನೋಂದಣಿ ಇಲ್ಲದೇ ಚಿಕಿತ್ಸೆ ನೀಡುತ್ತಿರುವವರ ವಿರುದ್ಧ ಆರೋಗ್ಯ ಇಲಾಖೆ ಇದೀಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ರಾಜ್ಯದಲ್ಲಿ ಇದುವರೆಗೆ 583ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಆದರೂ ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್‌ಗಳ ವಿರುದ್ಧ ಆರೋಗ್ಯ ಇಲಾಖೆಗೆ ನಿರಂತರವಾಗಿ ದೂರುಗಳು ಬರುತ್ತಿವೆ. ಅಲೋಪಥಿ, ಆಯುರ್ವೇದ, ಹೋಮಿಯೋಪಥಿ ಹಾಗೂ ನ್ಯಾಚುರೋಪಥಿ ಹೆಸರಿನಲ್ಲಿ ಅನಧಿಕೃತವಾಗಿ ಚಿಕಿತ್ಸೆ ನೀಡುತ್ತಿರುವವರ ಬಗ್ಗೆಯೂ ಇಲಾಖೆ ಮಾಹಿತಿ ಸಂಗ್ರಹಿಸಿದೆ.

ಬೆಂಗಳೂರು ಸೇರಿದಂತೆ ಗಡಿ ಭಾಗದ ಜಿಲ್ಲೆಗಳಲ್ಲಿ ಕೆಲವರು ‘ಮೊಬೈಲ್ ಕ್ಲಿನಿಕ್’ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರತಿದಿನ ಸ್ಥಳ ಹಾಗೂ ಮೊಬೈಲ್‌ ನಂಬರ್ ಬದಲಾಯಿಸಿಕೊಂಡು ಚಿಕಿತ್ಸೆ ನೀಡುವ ಮೂಲಕ ಅಧಿಕಾರಿಗಳ ಕಣ್ತಪ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಎಂಬಿಬಿಎಸ್ ಸೇರಿದಂತೆ ಅಗತ್ಯ ವೈದ್ಯಕೀಯ ಅರ್ಹತೆ ಇಲ್ಲದ ಕೆಲವರು ಕ್ಲಿನಿಕ್ ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳೂ ಪತ್ತೆಯಾಗಿವೆ.

ನಕಲಿ ವೈದ್ಯರ ಚಿಕಿತ್ಸೆಯಿಂದ ಅಪಾಯ:

ನಕಲಿ ವೈದ್ಯರು ನೀಡುವ ಅವೈಜ್ಞಾನಿಕ ಔಷಧ ಹಾಗೂ ತಪ್ಪು ಚಿಕಿತ್ಸೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಗಂಭೀರ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಯಾವುದೇ ಕ್ಲಿನಿಕ್ ಅಥವಾ ಆಸ್ಪತ್ರೆಗೆ ತೆರಳುವ ಮುನ್ನ ವೈದ್ಯರ ವಿದ್ಯಾರ್ಹತೆ, ನೋಂದಣಿ ಪ್ರಮಾಣಪತ್ರ ಹಾಗೂ ಆಸ್ಪತ್ರೆಯ ಮಾನ್ಯತೆ ಪರಿಶೀಲಿಸಬೇಕು. ತುರ್ತು ಸಂದರ್ಭದಲ್ಲಿ ಸಿಕ್ಕಸಿಕ್ಕ ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಅಧಿಕೃತ ಹಾಗೂ ನೋಂದಾಯಿತ ವೈದ್ಯರನ್ನು ಸಂಪರ್ಕಿಸುವಂತೆ ಇಲಾಖೆ ಸಲಹೆ ನೀಡಿದೆ.

ಅಲ್ಲದೆ, ನಕಲಿ ವೈದ್ಯರು ಅಥವಾ ಅನಧಿಕೃತ ಕ್ಲಿನಿಕ್‌ಗಳ ಕುರಿತು ಮಾಹಿತಿ ದೊರೆತರೆ ಆರೋಗ್ಯ ಇಲಾಖೆಗೆ ದೂರು ನೀಡಿ, ನಕಲಿ ವೈದ್ಯರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.

ಕಲುಷಿತ ಆಹಾರ ನೀಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಂಡಿರುವ ಸರ್ಕಾರ ಇದೀಗ ನಕಲಿ ವೈದ್ಯರ ಜಾಲದ ವಿರುದ್ಧವೂ ಕಾರ್ಯಾಚರಣೆ ತೀವ್ರಗೊಳಿಸಿದೆ. ಸಾರ್ವಜನಿಕರು ಜಾಗೃತರಾಗುವುದರ ಜೊತೆಗೆ ಇಲಾಖೆಯೊಂದಿಗೆ ಕೈಜೋಡಿಸಿದಾಗ ಮಾತ್ರ ನಕಲಿ ವೈದ್ಯರ ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ಸಾಧ್ಯವಾಗಲಿದೆ.

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್!

0

ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ.

ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿ ಉಮೇಶ್ ನಾಯ್ಕ್ (27) ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಭಾನುವಾರ (ಸೆ.6) ಸಂಜೆ ರಾಮಿನಕೊಪ್ಪದಲ್ಲಿ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್‌ನನ್ನು 3–4 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದ ಆರೋಪಿಯನ್ನು ಬಂಧಿಸಲು ಪೊಲೀಸರು ಲಿಂಗಾಪುರಕ್ಕೆ ತೆರಳಿದ್ದರು.

ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡದಂತೆ ತುಂಗಾನಗರ ಠಾಣೆ ಇನ್ಸ್‌ಪೆಕ್ಟರ್ ಗುರುರಾಜ್ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಗುಂಡೇಟಿನಿಂದ ಗಾಯಗೊಂಡ ಉಮೇಶ್ ನಾಯ್ಕ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರಿಗೆ ಮೆಗ್ಗಾನ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

0

ಬಾಗಲಕೋಟೆ: ನಗರದ ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ಸರ್ಕಲ್ ಬಳಿ ಭಾನುವಾರ ರಾತ್ರಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ವೇದಿಕೆಯ ಮೇಲೆ ಹಾಡು ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಕೆಲವೇ ಕ್ಷಣಗಳಲ್ಲಿ ವಾಗ್ವಾದ ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತ ತಲುಪಿದೆ. ಉತ್ಸವ ವೀಕ್ಷಿಸಲು ನೂರಾರು ಮಂದಿ ಸೇರಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಲಾಠಿ ಬೀಸಿ ಗುಂಪನ್ನು ಚದುರಿಸಿದ್ದಾರೆ. ಪೊಲೀಸರ ಸಮಯೋಚಿತ ಕ್ರಮದಿಂದ ಯಾವುದೇ ಭಾರಿ ಅಹಿತಕರ ಘಟನೆ ಸಂಭವಿಸದೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಮೆಜೆಸ್ಟಿಕ್‌ನಲ್ಲಿ ಹೊತ್ತಿ ಉರಿದ ರೈಲು ಬೋಗಿ! ತಪ್ಪಿದ ಭಾರೀ ಅನಾಹುತ

0

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ನಂ.1ರಲ್ಲಿ ನಿಲ್ಲಿಸಲಾಗಿದ್ದ ಖಾಲಿ ರೈಲು ಬೋಗಿಗೆ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ.

ರಾತ್ರಿ ಸುಮಾರು 11.30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಬೋಗಿಯನ್ನು ಆವರಿಸಿದೆ. ದಟ್ಟ ಹೊಗೆ ಆವರಿಸಿದ್ದರೂ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೋಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ತಾವರೆಕೆರೆ ಗೇಟ್ ಬಳಿ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ!

0

ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಅತೀವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಗುಜರಾತ್ ಮೂಲದ ಹಾಗೂ ಬೆಂಗಳೂರಿನ ನಿವಾಸಿಯಾಗಿದ್ದ ಸುಧಾ ಜೈನ್ (58) ಮೃತ ಮಹಿಳೆ. ಕುಟುಂಬ ಸಮೇತ ಶ್ರವಣಬೆಳಗೊಳದಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ, ಹಿಂದಿನಿಂದ ಬಂದ ಮತ್ತೊಂದು ಕಾರು ಓವರ್‌ಟೇಕ್ ಮಾಡುವ ಭರದಲ್ಲಿ ಅತೀವೇಗವಾಗಿ ಬಂದು ಸ್ವಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಸುಧಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ರಸ್ತೆ ಬದಿ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಬಂಕ್ ಮಾಲೀಕರಿಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭೀಕರ ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ಬೆಳ್ಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ಕಾರುಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಮೃತ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.

ಪರವಾನಗಿ ಇಲ್ಲದೆ ಔಷಧ ದಾಸ್ತಾನು; ಅಮೆಜಾನ್‌ನ ಗೋದಾಮುಗಳ ಮೇಲೆ FDA ದಾಳಿ!

0

ಬೆಂಗಳೂರು: ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ, ವಿತರಣೆ ಮಾಡುತ್ತಿದ್ದ ಇ-ಕಾಮರ್ಸ್ ಸಂಸ್ಥೆಗಳ ಗೋದಾಮುಗಳ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆ ಏಕಕಾಲದಲ್ಲಿ ದಾಳಿ ನಡೆಸಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಲಭ್ಯವಾದ ನಿಖರ ಗುಪ್ತಚರ ಮಾಹಿತಿ ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಒಟ್ಟು ₹4,02,352 ಮೌಲ್ಯದ ಔಷಧಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಟ್ಟನಹಳ್ಳಿಯಲ್ಲಿರುವ ಅಮೆಜಾನ್ ಸೆಲ್ಲರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಪರವಾನಗಿ ರಹಿತ ಆವರಣದ ಮೇಲೆ ರಾಜ್ಯ ಗುಪ್ತದಳ ವಿಭಾಗದ ಸಹಾಯಕ ಔಷಧ ನಿಯಂತ್ರಕ ಮನೋಹರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಯಾವುದೇ ಪರವಾನಗಿ ಇಲ್ಲದೆ ದಾಸ್ತಾನು ಮಾಡಲಾಗಿದ್ದ ₹2,45,352 ಮೌಲ್ಯದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರೋಸ್ಪೇಸ್ ಪ್ರದೇಶದಲ್ಲಿರುವ ಅಮೆಜಾನ್ ಸಂಸ್ಥೆಯ ಮತ್ತೊಂದು ಪರವಾನಗಿ ರಹಿತ ಆವರಣದ ಮೇಲೂ ದಾಳಿ ನಡೆಸಲಾಗಿದೆ. ಜಿಲ್ಲಾ ಔಷಧ ಪರಿವೀಕ್ಷಕಿ ವಿಭಾ ನೇತೃತ್ವದ ತಂಡ ಪರಿಶೀಲನೆ ನಡೆಸಿ ₹1,57,000 ಮೌಲ್ಯದ ಔಷಧಗಳನ್ನು ಜಪ್ತಿ ಮಾಡಿದೆ.

ಎರಡೂ ಆವರಣಗಳಲ್ಲಿ ಔಷಧ ಸಂಗ್ರಹಣೆಗೆ ಅಗತ್ಯವಿರುವ ಮಾನ್ಯ ದಾಖಲೆಗಳು ಇಲ್ಲದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಔಷಧಗಳ ಮಾರಾಟ ಹಾಗೂ ದಾಸ್ತಾನಿನಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಹೆಸರಿನಲ್ಲಿ ನಿಯಮಬಾಹಿರವಾಗಿ ಔಷಧಗಳನ್ನು ದಾಸ್ತಾನು ಮಾಡುವ ಸಂಸ್ಥೆಗಳ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆ ತಿಳಿಸಿದೆ.