Home Blog Page 6

ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಚಾಲನೆ: ಮರಕ್ಕೆ ಕಾರು ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು, ಚಾಲಕ ಗಂಭೀರ!

0

ಬೆಂಗಳೂರು: ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ.

ಹೆಬ್ಬಗೋಡಿ ನಿವಾಸಿ ಪ್ರಶಾಂತ್ (28) ಮೃತ ಯುವಕ. ಅಪಘಾತದಲ್ಲಿ ರೋಶನ್ ಹೆಗ್ಗಡೆ (27) ಗಂಭೀರವಾಗಿ ಗಾಯಗೊಂಡಿದ್ದಾನೆ. ಭಾನುವಾರ ಕ್ರಿಕೆಟ್ ಪಂದ್ಯ ವೀಕ್ಷಣೆ ಮುಗಿದ ಬಳಿಕ ಸಂಜೆ ಇಬ್ಬರೂ ಸೇರಿ ಎಣ್ಣೆಪಾರ್ಟಿ ನಡೆಸಿದ್ದರು. ಈ ವೇಳೆ ಇಬ್ಬರ ನಡುವೆ ಕಿರಿಕ್ ನಡೆದಿದ್ದು, ಮನೆಗೆ ಹೊರಡುವ ಸಂದರ್ಭದಲ್ಲೂ ಕಾರಿನೊಳಗೆ ವಾಗ್ವಾದ ಮುಂದುವರಿದಿದೆ ಎನ್ನಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ರೋಶನ್ ಹೆಗ್ಗಡೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರಿಂದ ಆಕ್ರೋಶಗೊಂಡ ರೋಶನ್, ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಾನೆ. ಪರಿಣಾಮವಾಗಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಶಾಂತ್ ಮೃತಪಟ್ಟಿದ್ದಾನೆ.

ಗಾಯಾಳು ರೋಶನ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭೀಕರ ಅಪಘಾತದ ದೃಶ್ಯ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು| 77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ!

0

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಬೆಳಿಗ್ಗೆ ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಧ್ವಜಾರೋಹಣದ ನಂತರ ರಾಜ್ಯಪಾಲರು ಪೊಲೀಸ್ ಪಡೆಗಳಿಂದ ವಂದನಾ ಗೌರವ ಸ್ವೀಕರಿಸಿ, ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಿದರು. ನಂತರ ಅವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಉನ್ನತ ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಭಾಗವಹಿಸಿದ್ದರು.

ಗಣರಾಜ್ಯೋತ್ಸವದ ಹಿನ್ನೆಲೆ ಮಾಣೆಕ್‌ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಠಿಣ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ನಗರಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿತ್ತು. ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಇನ್ನೂ ಪರೇಡ್‌ನಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡಂತೆ ಒಟ್ಟು 516 ಮಂದಿ ಭಾಗವಹಿಸಿದ್ದರು. ಭದ್ರತಾ ವ್ಯವಸ್ಥೆಯ ಭಾಗವಾಗಿ ಸುಮಾರು 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಬೈಕ್ ಗೆ ಕಾರು ಡಿಕ್ಕಿ; ತಾಯಿ ಸ್ಥಳದಲ್ಲೇ ಸಾವು, ಮಗಳು ಪಾರು; ಚಾಲಕ ಅರೆಸ್ಟ್

0

ಬೆಂಗಳೂರು:- ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳಿಗೆ ಗಾಯವಾಗಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಬಾಬುಸಾಬ್ ಪಾಳ್ಯ ನಿವಾಸಿ ಅರುಣಾ (42) ಮೃತ ಮಹಿಳೆ. ಜ. 24ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಹಿಳೆ, ಹೆಣ್ಣೂರು ಅಂಡರ್ ಪಾಸ್ ಮೂಲಕ ಮಗಳನ್ನ ತಮ್ಮ ಬೈಕ್ ನಲ್ಲಿ ಕೂರಿಸಿಕೊಂಡು ಹೋಗ್ತಿದ್ದರು. ಈ‌ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿತ್ತು. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮಹಿಳೆಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೋಲೀಸರು ತನಿಖೆ ಚುರುಕುಗೊಳಿಸಿ, ಕಾರು ಚಾಲಕನನ್ನು ಬಂಧಿಸಿದ್ದಾರೆ. ಬಂಧಿತ ಕಾರು ಚಾಲಕ ಕೇರಳ ಮೂಲದವ ಎನ್ನಲಾಗಿದೆ. ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ; ಇಂದಿನ ಹವಾಮಾನ ವರದಿ ಹೀಗಿದೆ!

0

ಬೆಂಗಳೂರು:- ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದ್ದು, ಇಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ತೀವ್ರ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಇಂದೂ ಒಣಹವೆಯ ವಾತಾವರಣವೇ ಇರಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ. ಚಳಿಯಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹಾಗೂ ವೈದ್ಯರು ಸಲಹೆ ನೀಡಿದ್ದು, ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಸೇವನೆ ಹಾಗೂ ಸಮತೋಲನ ಆಹಾರಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ.

ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂವರು ಸಾವು!

0

ತುಮಕೂರು:- ತುಮಕೂರು ತಾಲೂಕಿನ ನೆಲಹಾಳ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.

ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಹೇಳಲಾಗಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಕಡೆ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಹಾಗೂ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ವಂದೇ ಮಾತರಂ’ ಥೀಂನಲ್ಲಿ ಗಣರಾಜ್ಯೋತ್ಸವ ಆಚರಣೆ; ದೇಶದ ಜನತೆಗೆ ಶುಭ ಕೋರಿದ ಪಿಎಂ ಮೋದಿ!

0

ನವದೆಹಲಿ: ಭಾರತ ಇಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ.

ದೆಹಲಿಯ ಕರ್ತವ್ಯಪಥದಲ್ಲಿ ಹತ್ತಾರು ವಿಶೇಷತೆಗಳೊಂದಿಗೆ ಗಣರಾಜ್ಯೋತ್ಸವ ಪಥಸಂಚಲನ ನಡೆಯಲಿದ್ದು, ದೇಶದ ಪ್ರಜಾಪ್ರಭುತ್ವದ ಶಕ್ತಿ, ಸೇನಾ ಸಾಮರ್ಥ್ಯ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ವಿಶ್ವದ ಮುಂದೆ ಪ್ರದರ್ಶಿಸಲಾಗುತ್ತಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ,
“ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತದ ಸಂಕಲ್ಪ ಇನ್ನಷ್ಟು ಬಲಗೊಳ್ಳಲಿ” ಎಂದು ಶುಭಕೋರಿದ್ದಾರೆ.

ಈ ವರ್ಷ ಗಣರಾಜ್ಯೋತ್ಸವವನ್ನು ‘ವಂದೇ ಮಾತರಂ’ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದ್ದು, ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳೂ ಅದೇ ಥೀಮ್‌ನಡಿ ನಡೆಯಲಿವೆ. ಬೆಳಗ್ಗೆ 10.30ಕ್ಕೆ ಪಥಸಂಚಲನ ಆರಂಭವಾಗಲಿದ್ದು, ಸುಮಾರು 90 ನಿಮಿಷಗಳ ಕಾಲ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ಲೇನ್ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಭಾಗವಹಿಸಲಿದ್ದು, ಪದ್ಧತಿಯಂತೆ 21 ಗನ್ ಸೆಲ್ಯೂಟ್ ಮತ್ತು ಗಾರ್ಡ್ ಆಫ್ ಆನರ್ ಮೂಲಕ ಗೌರವಿಸಲ್ಪಡಲಿದ್ದಾರೆ.

ಪಥಸಂಚಲನದ ಪ್ರಮುಖ ಆಕರ್ಷಣೆಯಾಗಿ ಆಪರೇಷನ್ ಸಿಂಧೂರ ಮಿಷನ್ ಪ್ರದರ್ಶನಗೊಳ್ಳಲಿದೆ. ಇದೇ ಮೊದಲ ಬಾರಿಗೆ ಭಾರತೀಯ ಸೇನೆ ಬ್ಯಾಟಲ್ ಅರೇ (ಯುದ್ಧ ಶ್ರೇಣಿ) ಪ್ರದರ್ಶಿಸಲಿದೆ. ಈ ಸಂದರ್ಭದಲ್ಲಿ ಆಧುನಿಕ ಶಸ್ತ್ರಾಸ್ತ್ರಗಳು, ಟ್ಯಾಂಕ್‌ಗಳು, ಕ್ಷಿಪಣಿಗಳು, ಡ್ರೋನ್‌ಗಳು ಹಾಗೂ ವಿವಿಧ ಸೇನಾ ರಚನೆಗಳ ಪ್ರದರ್ಶನ ನಡೆಯಲಿದೆ. ಭಾರತೀಯ ವಾಯುಪಡೆಯ ಯುದ್ಧವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ಹಾರಾಟವೂ ಜನರ ಗಮನ ಸೆಳೆಯಲಿದೆ.

ಜೊತೆಗೆ ವಾಯುಪಡೆಯ ನಿವೃತ್ತ ಸೈನಿಕರ ವಿಶೇಷ ಟ್ಯಾಬ್ಲೋ ಕೂಡ ಪ್ರದರ್ಶಿಸಲಾಗುತ್ತದೆ.
ಈ ಬಾರಿ ಪಥಸಂಚಲನದಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳ ಒಟ್ಟು 30 ಸ್ತಬ್ಧಚಿತ್ರಗಳು ಭಾಗವಹಿಸಲಿದ್ದು, ಭಾರತದ ಸಂಸ್ಕೃತಿ, ಪರಂಪರೆ, ನವೀನತೆ ಮತ್ತು ಸ್ವಾವಲಂಬನೆಯನ್ನು ಬಿಂಬಿಸಲಿವೆ. ಸುಮಾರು 2500 ಕಲಾವಿದರು ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಕೆಂಪುಕೋಟೆಯಲ್ಲಿ ಭಾರತ ಪರ್ವ, ರಾಷ್ಟ್ರೀಯ ಶಾಲಾ ಬ್ಯಾಂಡ್ ಸ್ಪರ್ಧೆ, ಪ್ರಾಜೆಕ್ಟ್ ವೀರ್ ಗಾಥಾ 5.0 ಮತ್ತು ಪ್ರಧಾನಮಂತ್ರಿಯವರ ಎನ್‌ಸಿಸಿ ರ್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ನಮ್ಮ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು; ಗಣರಾಜ್ಯೋತ್ಸವ ಸಂದೇಶದಲ್ಲಿ ದ್ರೌಪತಿ ಮುರ್ಮು ಕರೆ

0

ನವದೆಹಲಿ:- ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಭಾನುವಾರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರಿಗೆ ಗೌರವಾರ್ಪಣೆ ಸಲ್ಲಿಸಿದರು.

ನಾವು ಭಾರತೀಯರು ಅಪಾರ ಉತ್ಸಾಹದಿಂದ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಇದು ನಮ್ಮ ದೇಶದ ಭೂತ, ವರ್ತಮಾನ ಮತ್ತು ಭವಿಷ್ಯವನ್ನು ಅವಲೋಕಿಸಲು ಸೂಕ್ತವಾದ ಸುದಿನವಾಗಿದೆ ಎಂದು ಅವರು ಹೇಳಿದರು. 1950ರ ಜನವರಿ 26ರಿಂದ ಸಂವಿಧಾನ ಸಂಪೂರ್ಣವಾಗಿ ಜಾರಿಯಾಗಿದ್ದು, ಅದೇ ದಿನದಿಂದ ನಮ್ಮ ಗಣತಂತ್ರವು ಸಾಂವಿಧಾನಿಕ ಗುರಿಗಳತ್ತ ಮುನ್ನಡೆಯುತ್ತಿದೆ. ವಿಶ್ವದ ಅತಿದೊಡ್ಡ ಗಣತಂತ್ರ ರಾಷ್ಟ್ರವಾಗಿರುವ ಭಾರತಕ್ಕೆ ಸಂವಿಧಾನವೇ ಮೂಲ ಆಧಾರ ದಾಖಲೆ. ಸಂವಿಧಾನವನ್ನು ರೂಪಿಸಿದವರು ರಾಷ್ಟ್ರದ ಏಕತೆ ಮತ್ತು ರಾಷ್ಟ್ರೀಯತೆಗೆ ಭದ್ರ ಬುನಾದಿ ಹಾಕಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

ಈ ಸಂದರ್ಭದಲ್ಲಿ ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿರುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ವಂದೇ ಮಾತರಂ ದೇಶದ ಜನರ ಹೃದಯದಲ್ಲಿ ದೇಶಭಕ್ತಿಯನ್ನು ಉರಿಯುವ ಅಮೋಘ ಗೀತೆ ಎಂದು ಬಣ್ಣಿಸಿದರು. ರಾಷ್ಟ್ರೀಯವಾದಿ ಕವಿ ಸುಬ್ರಹ್ಮಣ್ಯ ಭಾರತಿ ಅವರು ತಮಿಳಿನಲ್ಲಿ “ವಂದೇ ಮಾತರಂ ಎನ್ಬೋಮ್” ಎಂದು ಹಾಡು ರಚಿಸಿದ್ದು, ಅದು ಜನರನ್ನು ಇನ್ನಷ್ಟು ವ್ಯಾಪಕವಾಗಿ ತಲುಪಲು ಸಹಾಯವಾಯಿತು. ಇತರ ಭಾರತೀಯ ಭಾಷೆಗಳಲ್ಲಿಯೂ ವಂದೇ ಮಾತರಂ ಅನುವಾದಗಳು ಜನಪ್ರಿಯವಾಗಿವೆ ಎಂದು ಹೇಳಿದರು.

ಭಾಷಣದಲ್ಲಿ ಜಿಎಸ್‌ಟಿ ಸುಧಾರಣೆ ಹಾಗೂ ಆಪರೇಷನ್ ಸಿಂದೂರ್‌ನ್ನು ರಾಷ್ಟ್ರಪತಿಗಳು ಶ್ಲಾಘಿಸಿದರು. ಜೊತೆಗೆ ದೇಶಕ್ಕೆ ಆಹಾರ ಭದ್ರತೆ ಒದಗಿಸುತ್ತಿರುವ ರೈತರ ಪರಿಶ್ರಮವನ್ನು ಪ್ರಶಂಸಿಸಿದರು. ಜನವರಿ 25ರ ರಾಷ್ಟ್ರೀಯ ಮತದಾರರ ದಿನವನ್ನು ಉಲ್ಲೇಖಿಸಿದ ಮುರ್ಮು ಅವರು, ಮತದಾನದಿಂದ ರಾಜಕೀಯ ಶಿಕ್ಷಣ ಲಭ್ಯವಾಗುತ್ತದೆ ಎಂಬುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು. ಇಂದು ಅದು ಸಾಕಾರಗೊಳ್ಳುತ್ತಿದೆ ಎಂದರು. ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದು ಗಣತಂತ್ರಕ್ಕೆ ಮತ್ತಷ್ಟು ಬಲ ನೀಡುತ್ತದೆ ಎಂದು ಹೇಳಿದರು.

ಸಬಲೀಕೃತ ಮಹಿಳೆಯು ದೇಶದ ಅಭ್ಯುದಯಕ್ಕೆ ಅತ್ಯಂತ ಅಗತ್ಯ. ಆರೋಗ್ಯ, ಶಿಕ್ಷಣ, ಸುರಕ್ಷತೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಕೈಗೊಳ್ಳಲಾದ ಕ್ರಮಗಳು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನೆರವಾಗಿವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಅಭಿಪ್ರಾಯಪಟ್ಟರು.

ರಾತ್ರಿ ಮನೆ ಕಳ್ಳತನ, ಹಗಲು ಹೊಲದಲ್ಲಿ ಕಬ್ಬು ಕಟಾವು; ಖತರ್ನಾಕ್​​ ಗ್ಯಾಂಗ್ ಬಂಧಿಸಿದ ಪೊಲೀಸರು!

0

ಬಾಗಲಕೋಟೆ: ಕಬ್ಬು ಕಟಾವು ಮಾಡುವ ನೆಪದಲ್ಲಿ ಮನೆ ಕಳ್ಳತನಗಳನ್ನು ನಡೆಸುತ್ತಿದ್ದ ಮಹಾರಾಷ್ಟ್ರ ಮೂಲದ ಖತರ್ನಾಕ್​​ ಗ್ಯಾಂಗ್​​ನ ಪೊಲೀಸರು ಬಾಗಲಕೋಟೆಯಲ್ಲಿ ಭೇದಿಸಿದ್ದಾರೆ.

ಶಂಕರ್ ಪವಾರ್ (20), ಅಭಿ ಬೋಸ್ಲೆ(19), ಲಕ್ಷ್ಮೀ ಬೋಸ್ಲೆ (40), ಕರಣ ಪವಾರ್ (20) ಮತ್ತು ಮಮತಾ ಬೋಸ್ಲೆ(21) ಬಂಧಿತರು. ಇವರೆಲ್ಲ ಮಹಾರಾಷ್ಟದ ಪರಬಾನಿ ಜಿಲ್ಲೆ ಮಂಗರೂಲ ತಾಂಡಾದ ನಿವಾಸಿಗಳು ಎಂಬುದು ಗೊತ್ತಾಗಿದೆ. ಬಂಧಿತರಿಂದ 6 ಲಕ್ಷದ 8 ಸಾವಿರ ಮೌಲ್ಯದ 25 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕಬ್ಬು ಕಟಾವು ಕೆಲಸ ಮಾಡುವ ನೆಪದಲ್ಲಿ ಬಾಗಲಕೋಟೆಗೆ ಬಂದಿದ್ದ ಈ ತಂಡ ಹಗಲು ವೇಳೆ ಹೊಲದಲ್ಲಿ ಕೆಲಸ ಮಾಡಿದರೆ, ರಾತ್ರಿ ಕಳ್ಳತನಕ್ಕೆ ಇಳಿಯುತ್ತಿತ್ತು. ಜಾಕೆಟ್ ಮತ್ತು ಮಾಸ್ಕ್​​ ಹಾಕಿಕೊಂಡು ಕೈನಲ್ಲಿ ಬ್ಯಾಟರಿ, ರಾಡ್ ಹಿಡಿದು ಮನೆಗಳ್ಳತನ ಕೆಲಸ ಮಾಡ್ತಿತ್ತು. ಆರೋಪಿಗಳು ಕಳವು ಮಾಡುವ ದೃಶ್ಯಗಳು ಕೂಡ ಲಭ್ಯವಾಗಿದ್ದು, ಖತರ್ನಾಕ್​​ ಗ್ಯಾಂಗ್​​ನ ಹೆಡೆಮುರಿ ಕಟ್ಟುವಲ್ಲಿ ಗುಳೇದಗುಡ್ಡ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಖತರ್ನಾಕ್ ಕಳ್ಳರು ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ಬಾದಾಮಿ, ಗದಗ ಜಿಲ್ಲೆ ಸೇರಿ ಒಟ್ಟು ಆರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಗುಳೇದಗುಡ್ಡ ಪಟ್ಟಣ, ಗುಳೇದಗುಡ್ಡ ತಾಲೂಕಿನ ಬೂದಿನಗಡ, ಹಂಸನೂರು, ಬಾದಾಮಿ ತಾಲೂಕಿನ ಮುಮರೆಡ್ಡಿಕೊಪ್ಪ, ಮುತ್ತಲಗೇರಿಯಲ್ಲಿ‌ ಕೈಚಳಕ ತೋರಿಸಿದ್ದರು ಎಂಬುದು ತನಿಖೆ ವೇಳೆ ಬಯಲಾಗಿದೆ.

ಶಿವಮೊಗ್ಗ| ಖಾಸಗಿ ಬಸ್‌ನಲ್ಲಿ ಬೆಂಕಿ ಅವಘಡ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!

0

ಶಿವಮೊಗ್ಗ/ಸಾಗರ: ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ಹುಲಿದೇವರಬನದ ಬಳಿ ನಡೆದಿದೆ.

ಆದರೆ ಸ್ಥಳೀಯರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ್ದು, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಸಿಗಂದೂರು ಕ್ಷೇತ್ರದಿಂದ ವಾಪಸ್ ಆಗುತ್ತಿದ್ದ ಬಸ್‌ ಹುಲಿದೇವರಬನದ ಸಮೀಪ ಬರುತ್ತಿದ್ದಾಗ, ಏಕಾಏಕಿ ಬಸ್‌ನೊಳಗಿನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ಗಮನಿಸಿದ ಸ್ಥಳೀಯರು, ತಕ್ಷಣವೇ ಬಸ್‌ನ್ನು ತಡೆದು, ಚಾಲಕ ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮಯಕ್ಕೆ ಸರಿಯಾಗಿ ಸ್ಪಂದಿಸಿದ ಗ್ರಾಮಸ್ಥರು ಮತ್ತು ಬಸ್ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಸಾರ್ವಜನಿಕರು ಹಾಗೂ ಪ್ರಯಾಣಿಕರು ಶ್ಲಾಘಿಸಿದ್ದಾರೆ.

ನೆಲಮಂಗಲ ಬಳಿ ಚಾಕು, ಮಾರಕಾಸ್ತ್ರಗಳಿಂದ ರೌಡಿಶೀಟರ್‌ ಬರ್ಬರ ಹತ್ಯೆ!

0

ನೆಲಮಂಗಲ:- ನೆಲಮಂಗಲ ಬಳಿಯ ಬಾಲಾಜಿ ಫಾರಂ ಹೌಸ್‌ನಲ್ಲಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರಿನ ಆಟೋ ನಾಗ್ (32) ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ವಿರುದ್ಧ ಲಗ್ಗೆರೆ ಹಾಗೂ ಹುಲಿಯೂರು ದುರ್ಗ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟ್ ಓಪನ್ ಆಗಿತ್ತು. ಬಾಲಾಜಿ ಫಾರಂ ಹೌಸ್‌ನ ರೂಮ್‌ನಲ್ಲೇ ಈ ಭೀಕರ ಕೊಲೆ ನಡೆದಿದ್ದು, ಹತ್ಯೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರಕರಣದ ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

error: Content is protected !!