Home Blog Page 62

ಬಿ.ಕಾಂ ಪರೀಕ್ಷೆಯಲ್ಲಿ ಎಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯ ಎಎಸ್‌ಎಸ್ ವಾಣಿಜ್ಯ ಮಹಾವಿದ್ಯಾಲಯ 2025-26ನೇ ಶೈಕ್ಷಣಿಕ ವರ್ಷದ ಬಿ.ಕಾಂ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ.84.13ರಷ್ಟು ಉತ್ತೀರ್ಣತೆ ಸಾಧಿಸಿ ಗಮನಾರ್ಹ ಫಲಿತಾಂಶ ದಾಖಲಿಸಿದೆ.

ಒಟ್ಟು ಫಲಿತಾಂಶದಲ್ಲಿ 73 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 15 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಯಲ್ಲಿ ಸೌಮ್ಯ ಮಿಸ್ಕಿನ್ ಹಾಗೂ ವರ್ಷಾ ಕುಂಬಾರ ತಲಾ ಶೇ.97.71 ಅಂಕ ಗಳಿಸಿ ಕಾಲೇಜಿಗೆ ಜಂಟಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿನುತಾ ರಾಯಬಾಗಿ ಶೇ.96.29 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ರೇಣುಕಾ ಕಾಮೋಜಿ ಶೇ.95.86 ಅಂಕ ಗಳಿಸಿ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಉನ್ನತ ಶಿಕ್ಷಣ ಮತ್ತು ವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಸದ್ದಿಲ್ಲದೆ ಲೋಡ್ ಶೆಡ್ಡಿಂಗ್: ಪದೇ ಪದೇ ವಿದ್ಯುತ್ ಕಡಿತ!

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ, ಗದಗ ಜಿಲ್ಲೆಯ ನರೇಗಲ್ಲ ಹೋಬಳಿಯ ಹಲವು ಗ್ರಾಮಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರ ಆರೋಪದಂತೆ, ಪ್ರತಿದಿನ ಬೆಳಗ್ಗೆ 6ರಿಂದ 7.40ರವರೆಗೆ ಮನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಇದೇ ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ತ್ರಿಫೇಸ್ ವಿದ್ಯುತ್ ನೀಡಲಾಗುತ್ತಿದ್ದು, ಮನೆಗಳನ್ನು ಕತ್ತಲಲ್ಲಿ ಬಿಡಲಾಗುತ್ತಿದೆ ಎನ್ನುವುದು ಅವರ ಆರೋಪ. ಸಂಜೆ ವೇಳೆಯಲ್ಲೂ ವಿದ್ಯುತ್ ಕಡಿತವಾಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ, ಮಕ್ಕಳ ಓದು, ಮನೆ ಕೆಲಸ ಹಾಗೂ ಸಣ್ಣ ವ್ಯಾಪಾರಗಳ ಮೇಲೆ ಪರಿಣಾಮ ಬೀರುತ್ತಿದೆ.

ಮಳೆಗಾಲದಲ್ಲಿ ಸಂಜೆ ವಿದ್ಯುತ್ ಇಲ್ಲದ ಕಾರಣ ಫ್ಯಾನ್‌ಗಳು ಸ್ಥಗಿತಗೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಪೀಡಿತರು ರಾತ್ರಿ ನಿದ್ದೆಯಿಲ್ಲದೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಸುವುದು ಅಗತ್ಯವಾದರೂ, ಅದಕ್ಕಾಗಿ ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಸರಿಯಲ್ಲ. ಕೃಷಿ ಹಾಗೂ ಗೃಹ ಬಳಕೆಯ ವಿದ್ಯುತ್ ಪೂರೈಕೆಯ ನಡುವೆ ಸಮತೋಲನ ಸಾಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಡಿತದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವುದರ ಜೊತೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೆಳೆ ವೀಕ್ಷಿಸಿ ರೈತರೊಂದಿಗೆ ಸಂವಾದ ನಡೆಸಿದ ಡಿಸಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಗಾರು ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾಗಿರುವ ರೈತರ ನೆರವಿಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಶನಿವಾರ ಶಿರಹಟ್ಟಿ ತಾಲೂಕಿನ ಛಬ್ಬಿ ಹಾಗೂ ಬೆಳ್ಳಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಹೊಲಗಳಲ್ಲಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು.

ಹೆಸರು, ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆದ ಜಮೀನುಗಳಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ವೀಕ್ಷಿಸಿದ ಅವರು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಧೈರ್ಯ ತುಂಬಿದರು.

ರೈತರು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಬೆಳೆ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು. ಇದರಿಂದ ಬೆಳೆ ಬಿತ್ತನೆ ಪ್ರದೇಶದ ನಿಖರ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರು ಹೆಸರು ಹಾಗೂ ಹತ್ತಿ ಬೆಳೆಗಳಿಗೆ ಜು.22ರೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಚಿದಾನಂದಪ್ಪ, ತಹಸೀಲ್ದಾರ್ ಕೆ. ರಾಘವೇಂದ್ರರಾವ್, ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಗೃಹಲಕ್ಷ್ಮಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಪಾರ್ವತಿ ಹೊಂಬಳ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾರ್ವತಿ ಹೊಂಬಳ ಹೇಳಿದರು.

ಡಂಬಳ ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರ ಸಂಯುಕ್ತ ಆಶ್ರಯದಲ್ಲಿ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಅರಳಿ ಹಾಗೂ ಬೇವು ಗಿಡಗಳನ್ನು ನೆಡುವ ಮೂಲಕ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಗನವಾಡಿ ಮೇಲ್ವಿಚಾರಕಿ ಎಸ್.ಎಸ್. ಹಾದಿಮನಿ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಾಂದಬಿ ಅಣ್ಣಿಗೇರಿ ಮಾತನಾಡಿ, ಮಹಿಳೆಯರ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯಲ್ಲಪ್ಪ ಹಾದಿಮನಿ, ಗೌಸಿದ್ಧಪ್ಪ ಹಳ್ಳಾಕಾರ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಹಾಯಕಿಯರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

ಶಾಲೆಗಳಿಂದ ಕಣ್ಮರೆಯಾಗುತ್ತಿವೆ ನೀತಿ ಪಾಠಗಳು!

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಪಠ್ಯಕ್ರಮದಿಂದ ನೀತಿ ಪಾಠಗಳು ಹಾಗೂ ನೀತಿ ಕಥೆಗಳು ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳಲ್ಲಿ ಕಥೆಗಳನ್ನು ಕೇಳುವ ಆಸಕ್ತಿ ಇಂದಿಗೂ ಜೀವಂತವಾಗಿದ್ದರೂ, ಹೇಳುವವರೇ ಇಲ್ಲದಂತಾಗಿದೆ. ಈ ಕೊರತೆಯಿಂದ ಮಕ್ಕಳು ಮೊಬೈಲ್ ಮತ್ತು ದೂರದರ್ಶನದ ಗೀಳಿಗೆ ಸಿಲುಕಿ ಮೌಲ್ಯಾಧಾರಿತ ಬದುಕಿನಿಂದ ದೂರವಾಗುತ್ತಿದ್ದಾರೆ ಎಂದು ಕಾಶಿ ಜಂಗಮವಾಡಿಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು.

ನಗರದ ಮಾಂಗಲ್ಯ ಮಂದಿರದಲ್ಲಿ ಗದಗ-ಬೆಟಗೇರಿ ಪಂಚಾಚಾರ್ಯ ಸೇವಾ ಸಂಘದ ಆಶ್ರಯದಲ್ಲಿ ಆಷಾಢ ಮಾಸದ ಅಂಗವಾಗಿ ಆಯೋಜಿಸಿರುವ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ಹಿಂದೆ ಅಜ್ಜ-ಅಜ್ಜಿಯರು ಚಂದಮಾಮ, ವಿಕ್ರಮ-ಬೇತಾಳದಂತಹ ಕಥೆಗಳ ಮೂಲಕ ಮಕ್ಕಳಿಗೆ ನೀತಿ ಬೋಧಿಸುತ್ತಿದ್ದರು. ಆದರೆ ಇಂದು ತಂದೆ-ತಾಯಿಯರು ಉದ್ಯೋಗದಲ್ಲಿ ನಿರತರಾಗಿದ್ದು, ಶಾಲೆಗಳಲ್ಲೂ ನೀತಿ ಕಥೆಗಳಿಗೆ ಸ್ಥಾನ ಕಡಿಮೆಯಾಗಿದೆ. ಪರಿಣಾಮ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ದೊರೆಯುತ್ತಿಲ್ಲ. ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯಬೇಕು, ಅವರ ಭಾವನೆಗಳನ್ನು ಅರಿತುಕೊಳ್ಳಬೇಕು. ಇಲ್ಲವಾದರೆ ಅದರ ದುಷ್ಪರಿಣಾಮವನ್ನು ಮುಂದಿನ ದಿನಗಳಲ್ಲಿ ಸಮಾಜವೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶ್ರೀ ಸಿದ್ಧಾಂತ ಶಿಖಾಮಣಿ ಸಾಮಾನ್ಯ ಗ್ರಂಥವಲ್ಲ. ಜಗದ್ಗುರು ರೇಣುಕ ಭಗವತ್ಪಾದರು ಅಗಸ್ತ್ಯ ಮಹರ್ಷಿಗಳ ಮೂಲಕ ಸಮಸ್ತ ಮನುಕುಲದ ಶ್ರೇಯೋಭಿವೃದ್ಧಿಗಾಗಿ ನೀಡಿದ ದಿವ್ಯೋಪದೇಶವಾಗಿದೆ. ಶ್ರೀಕೃಷ್ಣನು ಅರ್ಜುನನಿಗೆ ಭಗವದ್ಗೀತೆ ಉಪದೇಶಿಸಿದಂತೆ, ರೇಣುಕ ಭಗವತ್ಪಾದರು ನೀಡಿದ ಈ ಗ್ರಂಥವನ್ನು ‘ರೇಣುಕ ಗೀತೆ’ ಎಂದೂ ಕರೆಯಲಾಗುತ್ತದೆ ಎಂದು ಹೇಳಿದರು.

ನರೇಗಲ್ಲ ಮಠದ ಸ್ವಾಮೀಜಿಗಳ ಸೇವೆಯನ್ನು ಶ್ಲಾಘಿಸಿದ ಅವರು, ಅವರ ಪ್ರವಚನ ಸೇವೆ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರಕ್ಕೂ ವಿಸ್ತರಿಸಿದ್ದು, ಶುದ್ಧ ಕನ್ನಡದ ಮೂಲಕ ಸಿದ್ಧಾಂತ ಶಿಖಾಮಣಿಯ ಸಂದೇಶವನ್ನು ಜನರಿಗೆ ತಲುಪಿಸುತ್ತಿರುವುದು ಶ್ಲಾಘನೀಯ ಎಂದರು.

ಗೋಸಂರಕ್ಷಣೆ, ಭಾರತೀಯ ಸಂಸ್ಕೃತಿ ಹಾಗೂ ಕುಟುಂಬ ಮೌಲ್ಯಗಳ ಉಳಿವಿಗೆ ಪ್ರತಿಯೊಬ್ಬರೂ ಬದ್ಧರಾಗಬೇಕು. ಸಾಕು ಪ್ರಾಣಿಗಳನ್ನು ಪ್ರೀತಿಯಿಂದ ಸಾಕಬೇಕು, ಆದರೆ ನಮ್ಮ ಸಂಸ್ಕೃತಿಯ ಮೂಲ ಮೌಲ್ಯಗಳನ್ನು ಮರೆಯಬಾರದು ಎಂದು ಜಗದ್ಗುರುಗಳು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಗಣ್ಯರು, ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ ವಟುಗಳು, ಸಂಗೀತ ಕಲಾ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

“ಮಕ್ಕಳಲ್ಲಿ ನೀತಿ ಕಥೆಗಳನ್ನು ಕೇಳುವ ಹಂಬಲ ಇಂದಿಗೂ ಇದೆ. ಆದರೆ ಹೇಳುವವರೇ ಇಲ್ಲದಂತಾಗಿದೆ. ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯದಿದ್ದರೆ, ಮೊಬೈಲ್‌ವೇ ಅವರ ಗುರುವಾಗುವ ಅಪಾಯವಿದೆ.”

– ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಜು.16ರಿಂದ ನಡೆಯುತ್ತಿರುವ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಮಾಲಿಕೆಗೆ ಜು.21ರಂದು ಸಂಜೆ 7 ಗಂಟೆಗೆ ಮಾಂಗಲ್ಯ ಮಂದಿರದಲ್ಲಿ ಮಂಗಲೋತ್ಸವ ನಡೆಯಲಿದೆ. ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ. ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕಾಶಿ ಪೀಠದ ನೂತನ ಜಗದ್ಗುರುಗಳು ಸಾನಿಧ್ಯ ವಹಿಸಲಿದ್ದು, ವಿವಿಧ ಮಠಾಧೀಶರು, ಗಣ್ಯರು ಹಾಗೂ ಭಕ್ತರು ಭಾಗವಹಿಸಲಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಇಬ್ಬರು ಮುಖಂಡರ ಉಚ್ಚಾಟನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ ಮಂಜುನಾಥ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಿರಹಟ್ಟಿ ಮಂಡಳ ಘಟಕದಿಂದ ವಜಾಗೊಳಿಸಲಾಗಿದೆ ಎಂದು ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡುವುದು, ಪಕ್ಷದ ಶಾಸಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವುದು ಹಾಗೂ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪ ಇವರ ಮೇಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ವಿರುದ್ಧವೂ ಹಗುರವಾಗಿ ಮಾತನಾಡಿ ಕ್ಷೇತ್ರದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವುದರ ಜೊತೆಗೆ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಮೂಡಿಸಿ ಪಕ್ಷ ಸಂಘಟನೆಗೆ ಹಿನ್ನಡೆಯುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಕೆಲಸ ಮಾಡಿದ್ದು, ಬಳಿಕ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಸೋಲಿನ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ಆರೋಪವೂ ಪ್ರಕಟಣೆಯಲ್ಲಿ ಮಾಡಲಾಗಿದೆ.

ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ಶಿರಹಟ್ಟಿ ಮಂಡಳ ಬಿಜೆಪಿ ಕೋರ್ ಕಮಿಟಿಯ ಎಲ್ಲ ಸದಸ್ಯರ ಒಮ್ಮತದ ನಿರ್ಧಾರದಂತೆ ಇಬ್ಬರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಸುನೀಲ ಮಹಾಂತಶೆಟ್ಟರ ತಿಳಿಸಿದ್ದಾರೆ.

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್ ಎಚ್ಚರಿಕೆ

0

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಆರೋಪ ಪ್ರಕರಣವನ್ನು ರಾಜಕೀಯಗೊಳಿಸದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ದೇಣಿಗೆ ಕಳ್ಳತನ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರಿಗೆ ಈ ವಿಷಯವನ್ನು ರಾಜಕೀಯಗೊಳಿಸದಂತೆ ಪೀಠ ಸೂಚನೆ ನೀಡಿತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ವರದಿ ಪರಿಶೀಲಿಸಿದ ಪೀಠವು ಪ್ರಕರಣದ ತನಿಖೆ ಎಸ್‌ಐಟಿ ನಡೆಸುತ್ತಿದೆಯೇ ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, ಆರೋಪಗಳ ಸತ್ಯಾಸತ್ಯತೆ ಪತ್ತೆಹಚ್ಚಲು ಮೊದಲು ಎಸ್‌ಐಟಿ ತನಿಖೆ ನಡೆಸಿದ್ದು, ಇದೀಗ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದರು.

ಎಸ್‌ಐಟಿ ತನಿಖೆ ಮುಂದುವರಿಸಬಹುದಾಗಿದ್ದು, ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಎಸ್‌ಐಟಿಯನ್ನು ಪುನರ್ ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಸ್ಥಿತಿಗತಿ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಮೂರರಿಂದ ನಾಲ್ಕು ದಿನಗಳ ಕಾಲಾವಕಾಶ ಬೇಕಿದ್ದು, ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ. ಬಳಿಕ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಪೀಠ ತಿಳಿಸಿದೆ.

 

ಬೆಂಗಳೂರಿಗರಿಗೆ ತಂಪೆರೆದ ಮಳೆ! ಈ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಮುಂದುವರಿದಿರುವ ಮಳೆಯ ಅಬ್ಬರ ಇಂದು ಕೂಡ ಮುಂದುವರಿದಿದೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದ್ದು, ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆದರು.

ಈ ನಡುವೆ ಹವಾಮಾನ ಇಲಾಖೆ ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಉಡುಪಿ, ಶಿವಮೊಗ್ಗದಲ್ಲಿ ಭಾರಿ ಮಳೆ:

ರಾಜ್ಯದಲ್ಲಿ ನಿನ್ನೆ ಅತಿ ಹೆಚ್ಚು ಮಳೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೆರ್ಗಾಳುವಿನಲ್ಲಿ ದಾಖಲಾಗಿದ್ದು, 160.5 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 155 ಮಿ.ಮೀ., ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ 98.5 ಮಿ.ಮೀ. ಮಳೆಯಾಗಿದೆ.

ಇದಲ್ಲದೆ ಮಡಿಕೇರಿಯ ಪೆರಾಜೆ, ಯಾದಗಿರಿಯ ಸುರಪುರದ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ., ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡದ ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ. ಹಾಗೂ ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

 

ತುಮಕೂರು: ಕ್ವಾರಿ ಗುಂಡಿಗೆ ಲಾರಿ ಬಿದ್ದು ಚಾಲಕ, ಕ್ಲೀನರ್ ದುರ್ಮರಣ!

ತುಮಕೂರು: ಗಣಿಗಾರಿಕೆ ಪ್ರದೇಶದಲ್ಲಿ ರಸ್ತೆ ಕುಸಿದ ಪರಿಣಾಮ ಕ್ವಾರಿಯ ಆಳವಾದ ಗುಂಡಿಗೆ ಲಾರಿ ಉರುಳಿ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಲಿ ಲಾರಿಯನ್ನು ಯೂಟರ್ನ್ ತೆಗೆದುಕೊಳ್ಳುವ ವೇಳೆ ಏಕಾಏಕಿ ರಸ್ತೆ ಕುಸಿದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ಸುಮಾರು 50 ಮೀಟರ್ ಆಳದ ಕ್ವಾರಿ ಗುಂಡಿಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಜಾರ್ಖಂಡ್ ಮೂಲದ ಅಕ್ಷಯ್ (30) ಹಾಗೂ ಮಧ್ಯಪ್ರದೇಶ ಮೂಲದ ಸಹದೇವ್ (25) ಎಂದು ಗುರುತಿಸಲಾಗಿದೆ.

ಘಟನೆ ತಿಳಿದು ಸ್ಥಳಕ್ಕೆ ಹುಲಿಯೂರುದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಜಾತಿ ಪ್ರಮಾಣ ಪತ್ರದಲ್ಲಿ ವಿಳಾಸ ಬದಲಾಯಿಸಬೇಕೇ? ಈ 4 ಹಂತಗಳನ್ನು ಅನುಸರಿಸಿ!

ಬೆಂಗಳೂರು: ಜಾತಿ ಪ್ರಮಾಣ ಪತ್ರವು ವ್ಯಕ್ತಿಯ ಜಾತಿಯನ್ನು ದೃಢೀಕರಿಸುವ ಪ್ರಮುಖ ಸರ್ಕಾರಿ ದಾಖಲೆಯಾಗಿದ್ದು, ಶಿಕ್ಷಣ, ಉದ್ಯೋಗ, ಮೀಸಲಾತಿ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿದೆ. ಆದರೆ, ಈ ಪ್ರಮಾಣ ಪತ್ರದಲ್ಲಿರುವ ವಿಳಾಸವನ್ನು ನೇರವಾಗಿ ತಿದ್ದುಪಡಿ ಮಾಡಲು ಅವಕಾಶವಿಲ್ಲ.

ವಿಳಾಸ ಬದಲಾದಲ್ಲಿ ಹೊಸ ವಿಳಾಸದೊಂದಿಗೆ ಹೊಸ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಅಥವಾ ಹಳೆಯ ಪ್ರಮಾಣ ಪತ್ರದೊಂದಿಗೆ ವಿಳಾಸ ಬದಲಾವಣೆಯನ್ನು ದೃಢೀಕರಿಸುವ ಅಫಿಡವಿಟ್ ಸಲ್ಲಿಸುವುದು ಅಗತ್ಯವಾಗಿದೆ.

ವಿಳಾಸ ಬದಲಾವಣೆಗಾಗಿ ಅನುಸರಿಸಬೇಕಾದ ಕ್ರಮಗಳು:

  • ನಾಡಕಚೇರಿ, ಗ್ರಾಮ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಹೊಸ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬೇಕು.
  • ಹಳೆಯ ಜಾತಿ ಪ್ರಮಾಣ ಪತ್ರ, ಹೊಸ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಅಥವಾ ಇತರೆ ವಿಳಾಸದ ಪುರಾವೆ, ಸ್ವಯಂ ಘೋಷಣಾ ಪತ್ರವನ್ನು ಸಲ್ಲಿಸಬೇಕು.
  • ಸ್ಥಳಾಂತರವನ್ನು ದೃಢೀಕರಿಸುವ ಅಫಿಡವಿಟ್ ಅನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮೂಲಕ ಮಾಡಿಸಬೇಕು.
  • ಅಫಿಡವಿಟ್ ಅನ್ನು ಹಳೆಯ ಜಾತಿ ಪ್ರಮಾಣ ಪತ್ರದೊಂದಿಗೆ ಲಗತ್ತಿಸಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು.

ಅಧಿಕಾರಿಗಳ ಪರಿಶೀಲನೆಯ ಬಳಿಕ ಹೊಸ ವಿಳಾಸದೊಂದಿಗೆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ.