Home Blog Page 84

ಭರವಸೆ ಬೇಡ, ಶಾಶ್ವತ ಪರಿಹಾರ ಬೇಕು

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ Gen Z Voters and Citizens Forum ವತಿಯಿಂದ ಹಮ್ಮಿಕೊಂಡಿರುವ ರಕ್ತ ಸಹಿ ಅಭಿಯಾನಕ್ಕೆ ನಗರದ 35ನೇ ವಾರ್ಡ್‌ನಲ್ಲಿ ಯುವಕರು, ಮಹಿಳೆಯರು ಹಾಗೂ ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

35ನೇ ವಾರ್ಡ್‌ನ ನಿವಾಸಿಗಳು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಂಡು, ಗದಗ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಹಾಗೂ ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ರಕ್ತದ ಸಹಿ ಮೂಲಕ ತಮ್ಮ ಆಗ್ರಹವನ್ನು ವ್ಯಕ್ತಪಡಿಸಿದರು.

ಗದಗ-ಬೆಟಗೇರಿ ನಗರ ನಿವಾಸಿಗಳು ಹಲವು ವರ್ಷಗಳಿಂದ ಸಮರ್ಪಕ ಹಾಗೂ ನಿಯಮಿತ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಅವಶ್ಯಕತೆಯಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಕ್ರಮಗಳಿಗೆ ಸೀಮಿತವಾಗದೆ, ಮುಂದಿನ ಹಲವು ದಶಕಗಳ ಜನಸಂಖ್ಯೆ ಹಾಗೂ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಗದಗ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಿ, ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಅಭಿಯಾನದಲ್ಲಿ ಆಗ್ರಹಿಸಲಾಯಿತು.

ಶಿಕ್ಷಣ ಪಡೆದ ಗದಗ ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿಗೆ ಕಡಿವಾಣ ಹಾಕಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳು, ಕೃಷಿ ಆಧಾರಿತ ಉದ್ಯಮಗಳು ಹಾಗೂ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ಹೊಸ ಹೂಡಿಕೆಗಳನ್ನು ಆಕರ್ಷಿಸಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ವಿಶೇಷ ಯೋಜನೆ ರೂಪಿಸಬೇಕು ಎಂಬುದು ಯುವಕರ ಪ್ರಮುಖ ಬೇಡಿಕೆಯಾಗಿದೆ.

ಗದಗದ ಯುವಶಕ್ತಿ ಉದ್ಯೋಗಕ್ಕಾಗಿ ಬೇರೆ ನಗರಗಳತ್ತ ಮುಖ ಮಾಡುವ ಪರಿಸ್ಥಿತಿ ಬಾರದಂತೆ, ಅವರ ಪ್ರತಿಭೆ ಹಾಗೂ ಪರಿಶ್ರಮಕ್ಕೆ ಜಿಲ್ಲೆಯಲ್ಲಿ ಅವಕಾಶ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಒತ್ತಾಯಿಸಲಾಯಿತು.

ಇದೇ ವೇಳೆ ಮಳೆ ಕೊರತೆ, ಬೆಳೆ ನಷ್ಟ, ನೀರಾವರಿ ಸಮಸ್ಯೆ, ಹೆಚ್ಚುತ್ತಿರುವ ಕೃಷಿ ವೆಚ್ಚ ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಲಾಯಿತು. ರೈತರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವುದರ ಜೊತೆಗೆ ನೀರಾವರಿ ಸೌಲಭ್ಯ, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಹಾಗೂ ಕೃಷಿ ಅಭಿವೃದ್ಧಿಗೆ ದೀರ್ಘಕಾಲೀನ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಈ ರಕ್ತ ಸಹಿ ಅಭಿಯಾನ ಯಾವುದೇ ಪಕ್ಷ ಅಥವಾ ವೈಯಕ್ತಿಕ ಹಿತಾಸಕ್ತಿಗಾಗಿ ನಡೆಸುತ್ತಿರುವ ಹೋರಾಟವಲ್ಲ. ಗದಗದ ನೀರು, ಯುವಕರ ಭವಿಷ್ಯ ಹಾಗೂ ರೈತರ ಬದುಕಿಗಾಗಿ ನಡೆಯುತ್ತಿರುವ ಜನಪರ ಅಭಿಯಾನವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

35ನೇ ವಾರ್ಡ್‌ನ ಯುವಕರು, ಮಹಿಳೆಯರು ಹಾಗೂ ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಭಾಗವಹಿಸಿರುವುದು ನಗರದ ಅಭಿವೃದ್ಧಿ ಕುರಿತು ಜನರಲ್ಲಿ ಮೂಡುತ್ತಿರುವ ಜಾಗೃತಿಗೆ ಸಾಕ್ಷಿಯಾಗಿದೆ. ಅಭಿಯಾನದಲ್ಲಿ ಪಾಲ್ಗೊಂಡು ಜನಪರ ಹೋರಾಟಕ್ಕೆ ಶಕ್ತಿ ತುಂಬಿದ 35ನೇ ವಾರ್ಡ್‌ನ ಯುವಕರು, ಮಹಿಳೆಯರು, ನಾಗರಿಕರು ಹಾಗೂ ಮುಖಂಡರಿಗೆ Gen Z Voters and Citizens Forum ಕೃತಜ್ಞತೆ ಸಲ್ಲಿಸಿದೆ.

ರಕ್ತದ ಸಹಿಯಲ್ಲಿ ಮೊಳಗಿದ ಜನರ ಆಗ್ರಹ

ನಮ್ಮ ರಕ್ತದ ಪ್ರತಿಯೊಂದು ಸಹಿಯೂ ಗದಗದ ಅಭಿವೃದ್ಧಿಗಾಗಿ. ನಮ್ಮ ಹೋರಾಟ ಶಾಶ್ವತ ನೀರಿಗಾಗಿ. ನಮ್ಮ ಧ್ವನಿ ಯುವಕರ ಉದ್ಯೋಗಕ್ಕಾಗಿ. ನಮ್ಮ ಆಗ್ರಹ ರೈತರ ಬದುಕಿಗಾಗಿ. ಗದಗದ ಅಭಿವೃದ್ಧಿ ನಮ್ಮ ಹಕ್ಕು; ನ್ಯಾಯ ಸಿಗುವವರೆಗೂ ಜನರ ಧ್ವನಿ ನಿಲ್ಲುವುದಿಲ್ಲ ಎಂದು ಸಂಘಟನೆ ತಿಳಿಸಿದೆ.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಎಚ್.ಕೆ.ಪಾಟೀಲ ವಿರುದ್ಧ ರಾಜು ಕುರುಡಗಿ ವಾಗ್ದಾಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ವಾರ್ಡ್‌ಗಳಿಗೆ ಅನುದಾನ ಹಂಚಿಕೆ ಮಾಡುವಲ್ಲಿ ಶಾಸಕ ಎಚ್.ಕೆ.ಪಾಟೀಲರು ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಗದಗ-ಬೆಟಗೇರಿ ಅವಳಿ ನಗರದ 35 ವಾರ್ಡ್‌ಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ವಾರ್ಡ್‌ಗಳಿಗೆ ಹೆಚ್ಚಿನ ಹಾಗೂ ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಕಡಿಮೆ ಅನುದಾನ ನೀಡಲಾಗುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಲಾ ₹1 ಕೋಟಿ ಹಾಗೂ ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ₹50 ಲಕ್ಷದಷ್ಟು ಅನುದಾನ ನೀಡುವ ಮೂಲಕ ತಾರತಮ್ಯ ಎಸಗಲಾಗಿದೆ. ಇದರಿಂದ ಬಿಜೆಪಿ ಸದಸ್ಯರ ವಾರ್ಡ್‌ಗಳ ಮತದಾರರ ಆಶಯಗಳಿಗೆ ಅನ್ಯಾಯವಾಗುತ್ತಿದೆ. ಜನಪ್ರತಿನಿಧಿಗಳು ಯಾವುದೇ ಪಕ್ಷಕ್ಕೆ ಸೇರಿದವರಾಗಿದ್ದರೂ ಕ್ಷೇತ್ರದ ಎಲ್ಲ ವಾರ್ಡ್‌ಗಳ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಯಾವುದೇ ತಾರತಮ್ಯ ಮಾಡದೆ ಎಲ್ಲ ವಾರ್ಡ್‌ಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗಿತ್ತು. ಆದರೆ ಪ್ರಸ್ತುತ ಶಾಸಕರು ಕಾಂಗ್ರೆಸ್ ಸದಸ್ಯರು ಪ್ರತಿನಿಧಿಸುವ ಹಲವು ವಾರ್ಡ್‌ಗಳಿಗೆ ವಿವಿಧ ಇಲಾಖೆಗಳ ಮೂಲಕ ಅನುದಾನ ಒದಗಿಸಿ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ನೀಡುತ್ತಿದ್ದಾರೆ. ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಅಗತ್ಯ ಅನುದಾನ ನೀಡದೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಲ್ಲಿಯೂ ವಾರ್ಡ್‌ವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವುದು ಖಂಡನೀಯ. ಈ ಧೋರಣೆಯನ್ನು ಗದಗ-ಬೆಟಗೇರಿ ಅವಳಿ ನಗರದ ಜನತೆ ಗಮನಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ರಾಜು ಕುರುಡಗಿ ಎಚ್ಚರಿಸಿದರು.

ಅನಧಿಕೃತ ಬ್ಯಾನರ್‌ಗಳಿಗೆ ನಗರಸಭೆ ಬ್ರೇಕ್! ಫ್ಲೆಕ್ಸ್‌, ಬ್ಯಾನರ್‌, ಕಟೌಟ್‌ಗಳ ತೆರವು

0

ಗದಗ: ನಗರದ ವಿವಿಧ ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಗರಸಭೆಯ ಅನುಮತಿ ಪಡೆಯದೆ ಅಳವಡಿಸಿದ್ದ ಫ್ಲೆಕ್ಸ್‌, ಬ್ಯಾನರ್‌ ಮತ್ತು ಕಟೌಟ್‌ಗಳನ್ನು ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ಕಾರ್ಯಕ್ರಮಗಳು, ವೈಯಕ್ತಿಕ ಶುಭಾಶಯ ಹಾಗೂ ವಿವಿಧ ಉದ್ದೇಶಗಳಿಗಾಗಿ ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್‌ ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ಈ ಕ್ರಮ ಕೈಗೊಂಡಿದೆ. ನಗರಸಭೆಯ ನಿಯಮಗಳನ್ನು ಉಲ್ಲಂಘಿಸಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿ, ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ನಗರದಲ್ಲಿ ಬ್ಯಾನರ್‌, ಫ್ಲೆಕ್ಸ್‌ ಅಥವಾ ಕಟೌಟ್‌ ಅಳವಡಿಸುವವರು ಕಡ್ಡಾಯವಾಗಿ ನಗರಸಭೆಯಿಂದ ಪೂರ್ವಾನುಮತಿ ಪಡೆಯಬೇಕು. ಅಲ್ಲದೆ, ನಿಗದಿತ ಶುಲ್ಕ ಪಾವತಿಸಿ ನಿಯಮಾನುಸಾರ ಬ್ಯಾನರ್‌ ಅಳವಡಿಸಬೇಕು. ಅನುಮತಿ ಪಡೆಯದೆ ಬ್ಯಾನರ್‌ ಅಳವಡಿಸಿದರೆ ಅವುಗಳನ್ನು ತೆರವುಗೊಳಿಸುವುದರ ಜತೆಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ನಗರದ ಸೌಂದರ್ಯ ಕಾಪಾಡುವ ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬ್ಯಾನರ್‌ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಬೇಕು. ನಗರಸಭೆಯ ನಿಯಮಗಳನ್ನು ಪಾಲಿಸುವ ಮೂಲಕ ಸಹಕರಿಸುವಂತೆ ಕಂದಾಯ ಅಧಿಕಾರಿ ಮಹೇಶ್ ಹಡಪದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಭಾರತ ಜೋಡೋಗೆ ಯುವಶಕ್ತಿ ಕೈಜೋಡಿಸಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ‘ಭಾರತ ಜೋಡೋ ಯುವ ಸಂಘ’ಗಳ ಸ್ಥಾಪನೆಯು ಯುವ ಸಮುದಾಯದಲ್ಲಿ ರಾಷ್ಟ್ರೀಯ ಭಾವನೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವುದರ ಜೊತೆಗೆ ಸೌಹಾರ್ದತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಸಂಘಗಳ ಸ್ಥಾಪನೆಯಲ್ಲಿ ಜಿಲ್ಲೆಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಸೋಮವಾರ ನಡೆದ ‘ಭಾರತ ಜೋಡೋ ಯುವ ಸಂಘ’ಗಳ ಸ್ಥಾಪನೆ ಕುರಿತು ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವಜನರು ಸಮಾಜದ ಮುಖ್ಯವಾಹಿನಿಗೆ ಬಂದು ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಐಕ್ಯತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇಂತಹ ಸಂಘಟನೆಗಳು ಸಹಕಾರಿಯಾಗಲಿವೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಹೆಚ್ಚಿಸಲು ಈ ಸಂಘಗಳು ಉತ್ತಮ ವೇದಿಕೆಯಾಗಲಿವೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿತ ಕಾಲಮಿತಿಯೊಳಗೆ ಸಂಘಗಳ ರಚನೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಈ ಸಂಘಗಳ ಪ್ರಯೋಜನ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಯುವ ಸಂಘಗಳನ್ನು ರಚಿಸುವ ಪ್ರಕ್ರಿಯೆ, ಸಂಘಗಳ ಕಾರ್ಯವೈಖರಿ ಹಾಗೂ ಮುಂದಿನ ಚಟುವಟಿಕೆಗಳ ರೂಪುರೇಷೆಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ಯುವಕರು ದುಶ್ಚಟಗಳಿಂದ ದೂರ ಉಳಿದು, ರಚನಾತ್ಮಕ ಸಾಮಾಜಿಕ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಹಾಗೂ ಸಂಘಟಕರಿಗೆ ನಿರ್ದೇಶನ ನೀಡಿದರು.

ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂಘಗಳ ರಚನೆ ಹಾಗೂ ಮುಂದಿನ ಚಟುವಟಿಕೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಗದಗ ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜಿನಗ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ತಹಸೀಲ್ದಾರ್ ಅಧಿಕಾರಿಗಳು ಉಪಸ್ಥಿತರಿದ್ದರು.

ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯಿಂದ ಯುವಜನರಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸೇವಾ ಮನೋಭಾವ ಬೆಳೆಸಲು ಸಾಧ್ಯವಾಗಲಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಗಳ ಸ್ಥಾಪನೆಯಲ್ಲಿ ಪಾಲ್ಗೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಭೀಮಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ನಾಲ್ವರಲ್ಲಿ ಓರ್ವ ನಾಪತ್ತೆ; ಮೂವರು ಸೇಫ್!

0

ಯಾದಗಿರಿ: ಭೀಮಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರಂಗಯ್ಯ (21) ನಾಪತ್ತೆಯಾಗಿರುವ ಯುವಕ. ಹೊಲದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ ಬಳಿಕ ಸ್ನೇಹಿತರೊಂದಿಗೆ ಭೀಮಾ ನದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ನಾಲ್ವರು ಸ್ನೇಹಿತರು ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಮೂವರು ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಸ್ಥಳೀಯ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ.

ಆದರೆ ರಂಗಯ್ಯ ನೀರಿನಲ್ಲಿ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಾಪತ್ತೆಯಾದ ಯುವಕನ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿರವಾರ ಅತ್ಯಾಚಾರ-ಕೊಲೆ ಖಂಡಿಸಿ ಛಲವಾದಿ ಮಹಾಸಭಾದಿಂದ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ 18 ವರ್ಷದ ಯುವತಿ ಅಶ್ವಿನಿ ತಿಪ್ಪಾರೆಡ್ಡಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಗದಗ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.

ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಯುವತಿಯನ್ನು ನಾಲ್ವರು ದುಷ್ಕರ್ಮಿಗಳು ಹಿಂಬಾಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಅಮಾನವೀಯ ಘಟನೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಮಹಾಸಭಾ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು.

ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟೆಚ್ಚರ ವಹಿಸಬೇಕು. ಅತ್ಯಾಚಾರ, ಕೊಲೆ ಸೇರಿದಂತೆ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಾರಣರಾಗುವವರಿಗೆ ಕಾನೂನಿನಡಿ ಮತ್ತಷ್ಟು ಕಠಿಣ ಶಿಕ್ಷೆ ವಿಧಿಸಬೇಕು. ತಪ್ಪಿತಸ್ಥರಿಗೆ ಯಾವುದೇ ರೀತಿಯ ಕಾನೂನು ಸಡಿಲಿಕೆ ಅಥವಾ ಅನುಕೂಲ ಕಲ್ಪಿಸಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅತ್ಯಾಚಾರ ಸಂತ್ರಸ್ತರಿಗೆ ಉಚಿತ ಕಾನೂನು ನೆರವು ಒದಗಿಸುವುದರೊಂದಿಗೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಸಂತ್ರಸ್ತ ಕುಟುಂಬಕ್ಕೆ ಅಗತ್ಯ ಕಾನೂನು ರಕ್ಷಣೆ ನೀಡಬೇಕು ಎಂದು ಮಹಾಸಭಾ ಆಗ್ರಹಿಸಿದೆ.

ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಕಡೆಮನಿ, ಜಿಲ್ಲಾಧ್ಯಕ್ಷ ಆನಂದ ಶಿಂಗಾಡಿ, ಶಂಭು ಹುನಗುಂದ, ಅನಿಲ ಕಾಳೆ, ಮುತ್ತು ಬಿಳೆಯಲಿ, ದಸಂಸ ಅಂಬೇಡ್ಕರ್‌ವಾದ ಜಿಲ್ಲಾ ಸಂಚಾಲಕ ಬಾಲರಾಜ ಅರಬರ, ಸಹಸಂಚಾಲಕ ನಾಗರಾಜ ಗೋಕಾವಿ, ಪರಶು ಕಾಳೆ, ಮಂಜುನಾಥ ಹಗೆದಾಳ, ವಿನಾಯಕ ತಿಮ್ಮಾಪೂರ, ಬಸವರಾಜ ಬಿಳೆಯಲಿ, ಶ್ರೀಕಾಂತ ಮಳಲಿ, ರಾಘವೇಂದ್ರ ಮಿಟ್ಟಿ, ಶರೀಫ್ ಬಿಳೆಯಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆ.25ರಂದು ಜೇಸಿ ಫ್ರೀಡಂ ಕಪ್ ಫುಟ್ಬಾಲ್ ಪಂದ್ಯಾವಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜೇಸಿ ಹೈಸ್ಕೂಲ್ ಮೈದಾನದಲ್ಲಿ ಆ.25ರಂದು ಒಂಬತ್ತನೇ ವರ್ಷದ ಜೇಸಿ ಫ್ರೀಡಂ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, 15ರಿಂದ 20 ಶಾಲಾ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉಪ ಪೊಲೀಸ್ ಅಧೀಕ್ಷಕ ವಿದ್ಯಾನಂದ ನಾಯಕ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಎಂದು ಜೇಸಿ ಪ್ರೌಢಶಾಲೆ ಅಧ್ಯಕ್ಷ ವಾಸಣ್ಣ ಕುರಡಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಬಾಲಕಿಯರ ತಂಡಗಳು ಸೆಣಸಲಿರುವುದು ವಿಶೇಷ. ಕೆಎಲ್‌ಇ ಪ್ರೌಢಶಾಲೆ ಹಾಗೂ ಜೇಸಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ನಡುವೆ ಸ್ನೇಹಪರ ಪಂದ್ಯ ನಡೆಯಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಾಲಕಿಯರ ಫುಟ್ಬಾಲ್ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವುದು, ದೈಹಿಕ ಹಾಗೂ ಮಾನಸಿಕ ಸದೃಢತೆ ಹೆಚ್ಚಿಸುವುದು ಮತ್ತು ವಿವಿಧ ಶಾಲೆಗಳ ಮಕ್ಕಳಲ್ಲಿ ಸಹಕಾರ ಮನೋಭಾವ ಬೆಳೆಸುವ ಉದ್ದೇಶದಿಂದ 2016-17ರಲ್ಲಿ ಪಂದ್ಯಾವಳಿ ಆರಂಭಿಸಲಾಯಿತು. ಸತತ ಒಂಬತ್ತು ವರ್ಷಗಳಿಂದ ಪಂದ್ಯಾವಳಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯದ ಸವಿಸ್ಮರಣೆ ಹಾಗೂ ಮಕ್ಕಳಲ್ಲಿ ರಾಷ್ಟ್ರೀಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಗಸ್ಟ್‌ನಲ್ಲಿಯೇ ಪಂದ್ಯಾವಳಿ ಆಯೋಜಿಸಲಾಗುತ್ತಿದ್ದು, ಅದಕ್ಕೆ ‘ಜೇಸಿ ಫ್ರೀಡಂ ಕಪ್’ ಎಂದು ಹೆಸರಿಡಲಾಗಿದೆ. ಶಿಕ್ಷಣ ಇಲಾಖೆ ಹಾಗೂ ವಿವಿಧ ಶಾಲೆಗಳಿಂದ ಉತ್ತಮ ಸಹಕಾರ ದೊರೆಯುತ್ತಿದೆ ಎಂದರು.

ಮೊದಲ ವರ್ಷ 11 ಶಾಲೆಗಳ ತಂಡಗಳು ಭಾಗವಹಿಸಿದ್ದವು. ಪ್ರತಿ ವರ್ಷ ತಂಡಗಳ ಸಂಖ್ಯೆ ಹೆಚ್ಚುತ್ತಿರುವುದು ಪಂದ್ಯಾವಳಿಯ ಯಶಸ್ಸಿಗೆ ಸಾಕ್ಷಿಯಾಗಿದೆ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಗದು ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿಜೇತ ತಂಡಕ್ಕೆ ₹25 ಸಾವಿರ ನಗದು, ಆಕರ್ಷಕ ರೋಲಿಂಗ್ ಶೀಲ್ಡ್ ಹಾಗೂ ವಿನ್ನಿಂಗ್ ಟ್ರೋಫಿ, ರನ್ನರ್‌ಅಪ್ ತಂಡಕ್ಕೆ ₹12 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಅತ್ಯುತ್ತಮ ಗೋಲ್‌ಕೀಪರ್ ಮತ್ತು ಸ್ಟ್ರೈಕರ್‌ಗೆ ತಲಾ ₹2 ಸಾವಿರ ನಗದು, ಆಕರ್ಷಕ ಶೀಲ್ಡ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಸುದ್ದಿಗೋಷ್ಠಿಯಲ್ಲಿ ವೈಶಾಕ್ ಬಂಗಾರಶೆಟ್ಟರ, ಪ್ರಕಾಶ ಎಕ್ಕಾಬಕ್ಕಿ, ರಾಮಚಂದ್ರ ಮೋನೆ, ಫರ್ಹಾನಾ, ಜ್ಯೋತಿ ಹಾಗೂ ಶಿವಕುಮಾರ ಉಪಸ್ಥಿತರಿದ್ದರು.

ಗದಗ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ ; 1.20 ಲಕ್ಷ ಹೆಸರುಗಳಿಗೆ ಕೊಕ್

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ 65-ಶಿರಹಟ್ಟಿ (ಪ.ಜಾ), 66-ಗದಗ, 67-ರೋಣ ಹಾಗೂ 68-ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮತದಾರರ ಯಾದಿಯನ್ನು ಆ.24ರಂದು ಪ್ರಕಟಿಸಲಾಗಿದೆ. ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್‌ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆ.24ರಿಂದ ಸೆ.23ರವರೆಗೆ ಅವಕಾಶವಿದೆ. ಭಾರತದಲ್ಲಿನ ಬೇರೆ ಯಾವುದೇ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ಹಾಗೂ ಅ.1, 2026ಕ್ಕೆ 18 ವರ್ಷ ಪೂರ್ಣಗೊಳ್ಳುವವರು ನಮೂನೆ–6ರಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. 2026ರ ಅರ್ಹತಾ ದಿನಾಂಕಗಳಾದ ಜ.1, ಏ.1 ಅಥವಾ ಜು.1ರಂದು 18 ವರ್ಷ ಪೂರ್ಣಗೊಳ್ಳುವವರೂ ಕರಡು ಮತದಾರರ ಪಟ್ಟಿ ಪ್ರಕಟಣೆಯ ದಿನದಿಂದ ನಮೂನೆ–6ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಲಾಗುವುದು.

ನಮೂನೆ–6ರಲ್ಲಿ ಅರ್ಜಿ ಸಲ್ಲಿಸುವವರು ಘೋಷಣಾ ಪತ್ರ, ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಅರ್ಜಿಯಲ್ಲಿ ನಮೂದಿಸಿರುವ ವಿಳಾಸದಲ್ಲಿ ಸಾಮಾನ್ಯ ನಿವಾಸಿಯಾಗಿರುವುದಕ್ಕೆ ಸೂಕ್ತ ದಾಖಲೆ ಹಾಗೂ ವಯಸ್ಸಿನ ದಾಖಲೆಗಳನ್ನು ಸಲ್ಲಿಸಬೇಕು.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ–7ರಲ್ಲಿ ಅರ್ಜಿ ಸಲ್ಲಿಸಬೇಕು. ನಿವಾಸ ಬದಲಾವಣೆ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ, ಯಾವುದೇ ತಿದ್ದುಪಡಿಯಿಲ್ಲದೆ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ್) ಪಡೆಯುವುದು ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸಲು ಮನವಿ ಸಲ್ಲಿಸುವುದಕ್ಕೆ ನಮೂನೆ–8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹಕ್ಕು ಮತ್ತು ಆಕ್ಷೇಪಣೆಗಳನ್ನು ECINET ಮೊಬೈಲ್ ಆ್ಯಪ್, “voters.eci.gov.in” ವೆಬ್‌ಸೈಟ್, ಸಂಬಂಧಪಟ್ಟ ಮತಗಟ್ಟೆಯ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ), ಮತದಾರ ನೋಂದಣಾಧಿಕಾರಿ ಅಥವಾ ತಹಶೀಲ್ದಾರರ ಕಚೇರಿಯಲ್ಲಿ ಸಲ್ಲಿಸಬಹುದು. ಆ.24ರಿಂದ ಸೆ.23ರವರೆಗೆ ಸ್ವೀಕರಿಸುವ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಅ.27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಎಸ್‌ಐಆರ್ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಪ್ರಚಾರ ಕೈಗೊಳ್ಳಲಾಗಿದೆ. ಅನಕ್ಷರಸ್ಥ ಮತದಾರರಿಗೆ ಬಿಎಲ್‌ಒಗಳು ಮತದಾರರ ಪಟ್ಟಿಯ ವಿವರಗಳನ್ನು ಓದಿ ತಿಳಿಸಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ 1,428 ಸೈನಿಕ ಮತದಾರರಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭಾ ಮತಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳಾದ ಗಂಗಪ್ಪ ಎಂ., ಬಸನಗೌಡ ಕೋಟೂರ, ನಂದಾ ಹಣಬರಟ್ಟಿ, ಎಸ್.ಡಿ. ಪಾಟೀಲ ಹಾಗೂ ಚುನಾವಣಾ ಶಾಖೆಯ ತಹಸೀಲ್ದಾರ್ ಸಂತೋಷ ಹಿರೇಮಠ ಉಪಸ್ಥಿತರಿದ್ದರು.

1.20 ಲಕ್ಷ ಮತದಾರರ ಹೆಸರು ಕೈಬದಲು

ಜೂ.16ರಂದು ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ನೋಂದಣಿಯಾಗಿದ್ದರು. ಎಸ್‌ಐಆರ್ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ಹಿಂದಿರುಗಿಸದ ಮತದಾರರ ಭೌತಿಕ ಪರಿಶೀಲನೆ ನಡೆಸಿದ್ದು, ಒಟ್ಟು 1,20,715 ಮತದಾರರನ್ನು ಎಎಸ್‌ಡಿಡಿಒ (ಗೈರುಹಾಜರಿ, ಸ್ಥಳಾಂತರ, ಮೃತ, ನಕಲು ಮತ್ತು ಇತರೆ) ಎಂದು ಗುರುತಿಸಲಾಗಿದೆ.

ಇವರ ಪೈಕಿ 5,192 ಮಂದಿ ಪತ್ತೆಯಾಗದ ಅಥವಾ ಗೈರುಹಾಜರಿರುವವರು, 71,280 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 30,318 ಮಂದಿ ಮೃತಪಟ್ಟವರು, 13,537 ಮಂದಿ ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವವರು ಹಾಗೂ 388 ಮಂದಿ ಇತರೆ ವರ್ಗಕ್ಕೆ ಸೇರಿದವರಾಗಿದ್ದಾರೆ.

ಎಎಸ್‌ಡಿಡಿಒ ಮತದಾರರ ಪಟ್ಟಿಯು ಬಿಎಲ್‌ಒ ಅಥವಾ ಮತದಾರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದ್ದು, ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗಿದೆ.

ಕರಡು ಪಟ್ಟಿಯಲ್ಲಿ 7.82 ಲಕ್ಷ ಮತದಾರರು

1,20,715 ಹೆಸರುಗಳನ್ನು ಕೈಬಿಟ್ಟ ಬಳಿಕ ಕರಡು ಮತದಾರರ ಪಟ್ಟಿಯಲ್ಲಿ 3,92,460 ಪುರುಷರು, 3,89,723 ಮಹಿಳೆಯರು ಹಾಗೂ 49 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 7,82,232 ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಆ.24ರಂತೆ ಒಟ್ಟು 983 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜೂ.16ರಂದು 967 ಮತಗಟ್ಟೆಗಳಿದ್ದು, ಇದೀಗ 16 ಮತಗಟ್ಟೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ 20,891 ಅಸಂಗತತೆ ಅಥವಾ ಅಸಮಂಜಸತೆ (ಅನಾಮಲೀಸ್) ಪ್ರಕರಣಗಳು ಹಾಗೂ 5,084 ಮ್ಯಾಪಿಂಗ್ ಲಿಂಕ್ ಆಗದ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 25,975 ಮತದಾರರಿಗೆ ನೋಟಿಸ್‌ ಹಂಚಿಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಮತದಾರರು ಸೂಕ್ತ ದಾಖಲೆಗಳನ್ನು ಬಿಎಲ್‌ಒಗಳಿಗೆ ಒದಗಿಸಿದ ಬಳಿಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತವೂ ಮಹತ್ವದ್ದಾಗಿದೆ. ಆದ್ದರಿಂದ ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಸ್ವತಃ ಪರಿಶೀಲಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.

— ಸಿ.ಎನ್.ಶ್ರೀಧರ್, ಜಿಲ್ಲಾಧಿಕಾರಿ, ಗದಗ

Mantralaya: ಆ.27ರಿಂದ 7 ದಿನ ರಾಯರ 355ನೇ ಆರಾಧನಾ ಮಹೋತ್ಸವ; ಏನೇನು ವಿಶೇಷ ಗೊತ್ತಾ?

0

ರಾಯಚೂರು: ಮಂತ್ರಾಲಯದಲ್ಲಿ ಗುರು ರಾಯರ 355ನೇ ಆರಾಧನಾ ಮಹೋತ್ಸವ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಆರಾಧನಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆಗಸ್ಟ್ 29, 30 ಮತ್ತು 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ರಾತ್ರಿ ವೇಳೆ ಮೂರು ದಿನಗಳ ಕಾಲ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ ಪೂರ್ವಾರಾಧನೆ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಸಂಜೆ ಸಾಧಕರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಆಗಸ್ಟ್ 30ರಂದು ರಾಯರ ಮಧ್ಯಾರಾಧನೆ ಹಿನ್ನೆಲೆಯಲ್ಲಿ ಸುವರ್ಣ ರಥೋತ್ಸವ ನಡೆಯಲಿದೆ. ಆಗಸ್ಟ್ 31ರಂದು ರಾಯರ ಉತ್ತರಾರಾಧನೆ ಅಂಗವಾಗಿ ರಾಜಬೀದಿಯಲ್ಲಿ ಅದ್ಧೂರಿ ಮಹಾರಥೋತ್ಸವ ಜರುಗಲಿದೆ. ಈ ವೇಳೆ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪವೃಷ್ಟಿ ಮಾಡಲಾಗುವುದು ಎಂದು ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ಭಕ್ತರ ಪುಣ್ಯ ಸ್ನಾನಕ್ಕಾಗಿ ಶವರ್ ವ್ಯವಸ್ಥೆ ಕಲ್ಪಿಸಲಾಗುವುದು. ಇದರ ಜೊತೆಗೆ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ವಾಹನಗಳ ಪಾರ್ಕಿಂಗ್‌ಗೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತರು ಹಾಗೂ ದಾನಿಗಳ ನೆರವಿನಿಂದ ನಿರ್ಮಾಣವಾಗಿರುವ ಥೀಮ್ ಪಾರ್ಕ್, ಮುಖ್ಯರಸ್ತೆಯ ಕಾರಿಡಾರ್ ಹಾಗೂ ಎಸ್‌ಟಿಪಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಆರಾಧನಾ ಮಹೋತ್ಸವಕ್ಕೆ ದೇಶದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.

Eid Milad Holiday: ಉಡುಪಿ, ದಕ್ಷಿಣ ಕನ್ನಡಕ್ಕೆ ನಾಳೆಯೇ ರಜೆ; ಆ.26ರ ಬದಲು ಆ.25ಕ್ಕೆ ಬದಲಾವಣೆ!

0

ಬೆಂಗಳೂರು: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಾಳೆ, ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ರಾಜ್ಯದಾದ್ಯಂತ ಆಗಸ್ಟ್ 26ರಂದು ಈದ್ ಮಿಲಾದ್ ರಜೆ ಇದ್ದರೂ, ಈ ಎರಡು ಕರಾವಳಿ ಜಿಲ್ಲೆಗಳಿಗೆ ಮಾತ್ರ ಒಂದು ದಿನ ಮುಂಚಿತವಾಗಿ ರಜೆ ನೀಡಲಾಗಿದೆ.

ಸ್ಥಳೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈದ್ ಮಿಲಾದ್ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.

ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಆಗಸ್ಟ್ 25ರಂದು ಎರಡೂ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ನೀಡುವಂತೆ ಆದೇಶಿಸಿದೆ. ಈ ಕುರಿತು ಸರ್ಕಾರದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಆ.26ಕ್ಕೆ ರಜೆ:

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಆಗಸ್ಟ್ 26ರಂದು ಸಾರ್ವತ್ರಿಕ ರಜೆ ಮುಂದುವರಿಯಲಿದೆ.

ಹೀಗಾಗಿ ಕರಾವಳಿಯ ಈ ಎರಡು ಜಿಲ್ಲೆಗಳ ಜನರಿಗೆ ನಾಳೆಯೇ ರಜೆ, ರಾಜ್ಯದ ಉಳಿದ ಭಾಗದವರಿಗೆ ಆಗಸ್ಟ್ 26ರಂದು ರಜೆ ಇರಲಿದೆ.