ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಎಲ್ಲ ಲಿಂಗಾಯತರಿಗೆ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿ ಮತ್ತೆ ಹೋರಾಟದ ಕಹಳೆ ಮೊಳಗಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 2ರಿಂದ 11ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಬಸವಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
2024ರ ಡಿಸೆಂಬರ್ 10ರಂದು ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ನಡೆದ ಪೊಲೀಸ್ ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ, ಈ ದಿನವನ್ನು ‘ಲಿಂಗಾಯತರ ಮೇಲಿನ ದೌರ್ಜನ್ಯ ದಿನ’ವಾಗಿ ಆಚರಿಸಲು ನಿರ್ಧರಿಸಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರೆಯುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಜನರ ನಿರೀಕ್ಷೆ:
ಡಿ.10ರಂದು ನಡೆಯಲಿರುವ ಉಪವಾಸ ಸತ್ಯಾಗ್ರಹದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಹೋರಾಟಕ್ಕೆ ಎಲ್ಲಾ ಪೀಠಗಳ ಸ್ವಾಮೀಜಿಗಳನ್ನು ಆಹ್ವಾನಿಸಿರುವುದಾಗಿ ಬಸವಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಪಂಚಮಸಾಲಿ ಸಮಾಜದ ಶಾಸಕರು ಮೀಸಲಾತಿ ವಿಚಾರವಾಗಿ ಧ್ವನಿ ಎತ್ತಬೇಕು. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಶಾಸಕರು ಪಕ್ಷಭೇದ ಮರೆತು ಸಮಾಜದ ಬೇಡಿಕೆಗಳಿಗೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದರ ಜೊತೆಗೆ ಎಲ್ಲ ಲಿಂಗಾಯತರಿಗೆ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಬೇಕು. ಯಾವುದೇ ರಾಜಕೀಯ ಪಕ್ಷ ಅಧಿಕಾರದಲ್ಲಿದ್ದರೂ ಮೀಸಲಾತಿಗಾಗಿ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಹೇಳಿದ್ದಾರೆ.
2024ರ ಡಿಸೆಂಬರ್ 10ರಂದು ನಡೆದಿದ್ದೇನು?
ಪಂಚಮಸಾಲಿ ಸಮುದಾಯ ಪ್ರಸ್ತುತ 3ಬಿ ಪ್ರವರ್ಗದಡಿ ಶೇ.5ರಷ್ಟು ಮೀಸಲಾತಿ ಪಡೆಯುತ್ತಿದೆ. ಈ ಸಮುದಾಯವನ್ನು ಶೇ.15ರಷ್ಟು ಮೀಸಲಾತಿ ಹೊಂದಿರುವ 2ಎ ಪ್ರವರ್ಗಕ್ಕೆ ಸೇರಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಈ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ 2024ರಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಬ್ಯಾರಿಕೇಡ್ಗಳನ್ನು ಮುರಿದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ಆದೇಶದ ಮೇರೆಗೆ ಪೊಲೀಸರು ಲಾಠಿಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಇದೀಗ ಅದೇ ಘಟನೆಯನ್ನು ಖಂಡಿಸಿ ಡಿ.10ರಂದು ಮತ್ತೊಮ್ಮೆ ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.







