ಬಳ್ಳಾರಿ: ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆಯ ಆರೋಪದ ಬೆನ್ನಲ್ಲೇ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಹಣ ಪಡೆದು ಉತ್ತೀರ್ಣಗೊಳಿಸುವ ಅಕ್ರಮದಲ್ಲಿ ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯನ್ನು ತೇರ್ಗಡೆಗೊಳಿಸಲು ಸುಮಾರು 6 ಸಾವಿರ ರೂಪಾಯಿ ವಸೂಲಿ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ರೀತಿಯಲ್ಲಿ ಹಣ ಪಾವತಿಸಿದ ಹಲವಾರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂಬ ಆರೋಪವೂ ವ್ಯಕ್ತವಾಗಿದೆ.
ಈ ಅಕ್ರಮ ಇತ್ತೀಚಿನದ್ದಲ್ಲ, ಹಲವು ವರ್ಷಗಳಿಂದ ಕೆಲ ಸಿಬ್ಬಂದಿ ಈ ರೀತಿಯ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯುಸಿಎಂಸಿ (UCMC) ವಿಭಾಗದ ರಿಯಾಜ್, ವೆಂಕಟೇಶ್ ವನದುರ್ಗ, ಯಲ್ಲಾಲಿಂಗ, ಚಂದ್ರಮೋಹನ್ ಹಾಗೂ ಉಮೇಶ್ ವಿರುದ್ಧ ಆರೋಪಗಳು ಕೇಳಿಬಂದಿದ್ದು, ಲಭ್ಯವಾಗಿರುವ ಆಡಿಯೋ ಸಂಭಾಷಣೆಯೊಂದರಲ್ಲಿ ವಿದ್ಯಾರ್ಥಿಗಳ ಬಳಿ ಹಣದ ಬೇಡಿಕೆ ಇಟ್ಟಿರುವುದು ಕೇಳಿಬಂದಿದೆ ಎನ್ನಲಾಗಿದೆ.
ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹಲವು ವರ್ಷಗಳಿಂದ ಈ ಅಕ್ರಮ ನಡೆಯುತ್ತಿದ್ದು, ವಿಶೇಷವಾಗಿ ಬಡ ಹಾಗೂ ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸಂಘಟನೆ ಆರೋಪಿಸಿದೆ.
ಅಲ್ಲದೆ, ಈ ದಂಧೆಯಲ್ಲಿ ವಿಶ್ವವಿದ್ಯಾಲಯದ ಕೆಲ ಪ್ರಮುಖ ಅಧಿಕಾರಿಗಳೂ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಎಬಿವಿಪಿ, ಪ್ರಕರಣದ ಕುರಿತು ಉನ್ನತ ಮಟ್ಟದ ಮತ್ತು ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ.
ಸದ್ಯ ಈ ಆರೋಪಗಳು ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸುತ್ತಿವೆ.



