ವಿಜಯಸಾಕ್ಷಿ ಸುದ್ದಿ, ಗದಗ: ಜನರಿಂದಲೇ ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಬೇಕು. ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ ಆಡಳಿತ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಯೋಜನಾ ಸಮಿತಿ ರಚಿಸಲಾಗಿದ್ದು, ಇದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚಾಯತ್ ರಾಜ್ ಕಾನೂನು ಅನುಷ್ಠಾನಗೊಳಿಸುವಲ್ಲಿ ಗದಗ ಜಿಲ್ಲೆ ದಿಟ್ಟ ಹೆಜ್ಜೆ ಇಟ್ಟಿದೆ. ಗ್ರಾಮ ಮಟ್ಟದಲ್ಲೇ ಸಭೆಗಳನ್ನು ನಡೆಸಿ ಜನಾಭಿಪ್ರಾಯ ಸಂಗ್ರಹಿಸುವ ಮೂಲಕ ಅಭಿವೃದ್ಧಿ ಯೋಜನೆ ರೂಪಿಸಲಾಗುತ್ತಿದೆ. ಜನರ ಕಲ್ಯಾಣಕ್ಕಾಗಿ ಯೋಜನಾ ಸಮಿತಿ ಮಹತ್ವದ ಪಾತ್ರ ವಹಿಸಲಿದ್ದು, ಮುಂದಿನ ದಿನಗಳಲ್ಲಿ ಗದಗ ಜಿಲ್ಲೆಯ ಯೋಜನೆಗಳು ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಸಚಿವರು ಹೇಳಿದರು.
ಮುಂದಿನ ಆಯವ್ಯಯ ತಯಾರಿಕೆಗೆ ಜನರ ಅಭಿಪ್ರಾಯ ಮತ್ತು ಸ್ಥಳೀಯ ಅಗತ್ಯತೆಗಳು ಆಧಾರವಾಗಬೇಕು. ಜನರ ಆಲೋಚನೆಗಳಿಗೆ ಸ್ಪೂರ್ತಿ ತುಂಬುವ ಕಾರ್ಯ ಅತ್ಯಂತ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಲಕ್ಕುಂಡಿ ಐತಿಹಾಸಿಕ ಪ್ರದೇಶ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ವಿವಿಧ ನೂತನ ಸೌಲಭ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ಕೆ.ಎಚ್. ಪಾಟೀಲ ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿಯಿಂದ ತಾಲೂಕು ಪಂಚಾಯಿತಿ, ಅಲ್ಲಿಂದ ಜಿಲ್ಲಾ ಪಂಚಾಯಿತಿ ಮಟ್ಟದವರೆಗೆ ಅಭಿವೃದ್ಧಿ ಯೋಜನೆಗಳನ್ನು ಸಂಗ್ರಹಿಸಿ ಅನುಷ್ಠಾನಗೊಳಿಸಿದಾಗ ಮಾತ್ರ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಎಲ್.ಡಿ. ಚಂದಾವರಿ, ಕೃಷ್ಣ ಪರಾಪೂರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
“ಜನರ ಪಾಲ್ಗೊಳ್ಳುವಿಕೆಯಿಂದ ರೂಪುಗೊಳ್ಳುವ ಯೋಜನೆಗಳೇ ಶಾಶ್ವತ ಅಭಿವೃದ್ಧಿಗೆ ಅಡಿಪಾಯ.”ಡಾ. ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ
“ಗದಗ ದೇಶಕ್ಕೆ ಮಾದರಿ ಆಗಬೇಕು”
ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ಸಂವಿಧಾನದ ಆಶಯಗಳಿಗೆ ತಕ್ಕಂತೆ ಜನರ ಭಾವನೆಗಳನ್ನು ಅರಿತು ಜಿಲ್ಲಾ ಯೋಜನಾ ಸಮಿತಿ ಕಾರ್ಯನಿರ್ವಹಿಸಬೇಕು ಎಂದರು.
2027-28ನೇ ಸಾಲಿನ ಅಭಿವೃದ್ಧಿ ಯೋಜನೆಗಳು ಜನರಿಂದಲೇ ರೂಪುಗೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಗದಗ ಜಿಲ್ಲೆ ದೇಶದಲ್ಲೇ ಮಾದರಿಯಾಗಬೇಕು. ಆಗ ಮಾತ್ರ ಗ್ರಾಮರಾಜ್ಯ ಮತ್ತು ರಾಮರಾಜ್ಯದ ಕನಸು ಸಾಕಾರವಾಗುತ್ತದೆ ಎಂದು ಹೇಳಿದರು.



