ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೇ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲೆಯ ಗದಗ, ಶಿರಹಟ್ಟಿ, ರೋಣ ಮತ್ತು ನರಗುಂದದಲ್ಲಿ ನಡೆದ 2ನೇ ಸುತ್ತಿನ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಮಸ್ಟರಿಂಗ್, ಚುನಾವಣಾ ದಿನದಂದು ಅಣುಕು ಮತದಾನ, ಮತದಾನ, ಮತದಾನ ಪೂರ್ಣಗೊಂಡ ನಂತರ ಅನುಸರಿಸಬೇಕಾದ ಕ್ರಮಗಳು, ಡಿಮಸ್ಟರಿಂ ನಿರ್ದೇಶನ ನೀಡಿದರು.
ಲೋಕಸಭೆ ಚುನಾವಣೆಗೆ ನಿಯೋಜಿಸಿರುವ ಮತಗಟ್ಟೆ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಕ್ರಮಬದ್ಧವಾಗಿ ಚುನಾವಣೆ ನಡೆಸಬೇಕು. ಸಂಶಯವಿದ್ದಲ್ಲಿ ಸೆಕ್ಟರ್ ಅಧಿಕಾರಿಗಳ ಗಮನಕ್ಕೆ ತರಬೇಕು.
ವಿಶ್ವಾಸ ಹಾಗೂ ಕರ್ತವ್ಯಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಅಣುಕು ಮತದಾನ ಮತ್ತಿತರ ವಿಚಾರದಲ್ಲಿ ಮತಗಟ್ಟೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಜೊತೆಗೆ ಚುನಾವಣಾ ಪಾವಿತ್ರ್ಯತೆ ಕಾಪಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 961 ಮತಗಟ್ಟೆಗಳು ಇದ್ದು, ಈ ಪೈಕಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 251, ಗದಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 223, ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 267 ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 220 ಮತಗಟ್ಟೆಗಳಿವೆ. ಮತಗಟ್ಟೆಗೆ ನಿಯೋಜಿಸಿರುವ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಸುತ್ತಿನ ಚುನಾವಣಾ ತರಬೇತಿ ನೀಡಲಾಗುತ್ತಿದೆ ಎಂದರು.
ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ ಮಾತನಾಡಿ, ಪ್ರತಿ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, 2ನೇ ಮತಗಟ್ಟೆ ಅಧಿಕಾರಿ ಹಾಗೂ 3ನೇ ಮತಗಟ್ಟೆ ಅಧಿಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಸೆಕ್ಟರ್ ಅಧಿಕಾರಿಗಳು, ಪಿಆರ್‌ಒ, ಎಪಿಆರ್‌ಒ ಸೇರಿದಂತೆ ಇತರರು ಇದ್ದರು.
ಮಾಸ್ಟರ್ ತರಬೇತಿದಾರರು ಅವರು ಮಾಹಿತಿ ನೀಡಿ, ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಸಂಬಂಧ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಬೇಕು. ಮತಗಟ್ಟೆ ಅಧಿಕಾರಿಗಳು ಅಣುಕು ಮತದಾನ, ಪ್ರಮಾಣಪತ್ರ ಬರೆಯುವುದು, ಇವಿಎಂ, ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್, ಹಾಗೂ ವಿವಿ ಪ್ಯಾಟ್ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು.