ಯಾದಗಿರಿ: ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ಆಪ್ತ ಸಹಾಯಕ ರೈಲಿನಿಂದ ಜಿಗಿದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಮುಷ್ಟೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು 54 ವರ್ಷದ ರಾಜಕುಮಾರ್ ಎಂದು ಗುರುತಿಸಲಾಗಿದೆ.
ರಾಜಕುಮಾರ್ ಅವರು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಬಸವ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಗಳೂರಿನಿಂದ ಕಲಬುರಗಿಗೆ ವಾಪಸಾಗುತ್ತಿದ್ದರು.
ಈ ಪ್ರಯಾಣದ ವೇಳೆ ಯಾದಗಿರಿ ತಾಲೂಕಿನ ಮುಷ್ಟೂರು ಸಮೀಪ ರೈಲಿನಿಂದ ಜಿಗಿದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈಲಿನಿಂದ ಜಿಗಿದಿರುವುದರ ಹಿಂದಿನ ಕಾರಣ ಹಾಗೂ ಘಟನೆಯ ಸುತ್ತಲಿನ ವಿವರಗಳ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










