ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ 9.44 ಕೋಟಿಗೂ ಅಧಿಕ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಪಾಯಿಯಂತೆ ಒಟ್ಟು 18,880 ಕೋಟಿ ರೂಪಾಯಿಗೂ ಹೆಚ್ಚು ಹಣ ನೇರವಾಗಿ ಜಮೆಯಾಗಲಿದೆ.
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹಲವು ಅಭಿವೃದ್ಧಿ ಮತ್ತು ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇದಿಕೆಯಲ್ಲಿ ಪಿಎಂ-ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ-ಕಿಸಾನ್ ಅಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಅದರ ಭಾಗವಾಗಿ ಇದೀಗ 23ನೇ ಕಂತಿನ ಹಣ ಬಿಡುಗಡೆಗೊಳ್ಳುತ್ತಿದೆ.
ಪಶ್ಚಿಮ ಬಂಗಾಳದಲ್ಲಿಯೂ ಈ ಯೋಜನೆಯ ಲಕ್ಷಾಂತರ ರೈತರು ಪ್ರಯೋಜನ ಪಡೆಯಲಿದ್ದು, ಸುಮಾರು 45 ಲಕ್ಷಕ್ಕೂ ಹೆಚ್ಚು ರೈತರಿಗೆ 907 ಕೋಟಿ ರೂಪಾಯಿಗೂ ಅಧಿಕ ಮೊತ್ತ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಕೇಂದ್ರದ ವಿವಿಧ ಕೃಷಿ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ಉದ್ದೇಶದಿಂದ ಹಲವು ಹೊಸ ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಗುತ್ತಿದೆ.
ತಾರಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ಅಗ್ರಿ ಸ್ಟ್ಯಾಕ್, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಹಾಗೂ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಸೇರಿದಂತೆ ಹಲವು ಕೃಷಿ ಸಂಬಂಧಿತ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ತಾರಕೇಶ್ವರವು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ಐತಿಹಾಸಿಕ ನಂಟು ಹೊಂದಿದ್ದು, ಬಂಗಾಳದ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.



