ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದ ನಾಲ್ಕನೇ ಮಾರ್ಗವಾದ ಪಿಂಕ್ ಲೈನ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಶುಕ್ರವಾರ ನಗರದ ಎಸ್ಜಿ ಪಾಳ್ಯ (ಸುದ್ದಗುಂಟೆ ಪಾಳ್ಯ) ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಪಿಂಕ್ ಲೈನ್ ಮಾರ್ಗವನ್ನು ಉದ್ಘಾಟಿಸಿದರು. ಬಳಿಕ ಪ್ರಧಾನಿ ಮೋದಿ ಅವರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಈ ವೇಳೆ ರಾಜ್ಯಪಾಲರಾದ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಸದ ತೇಜಸ್ವಿ ಸೂರ್ಯ ಪ್ರಧಾನಿಯವರ ಜೊತೆಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಎಸ್ಜಿ ಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಸ್ವಾಗತಿಸಲು ರಸ್ತೆಯ ಎರಡೂ ಬದಿಗಳಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ತಮ್ಮನ್ನು ಸ್ವಾಗತಿಸಲು ಕಾದು ನಿಂತಿದ್ದ ಸಾರ್ವಜನಿಕರು ಹಾಗೂ ಅಭಿಮಾನಿಗಳತ್ತ ಪ್ರಧಾನಿ ನಗುಮುಖದಿಂದ ಕೈಬೀಸಿ ಶುಭಾಶಯ ತಿಳಿಸಿದರು. ಈ ವೇಳೆ ನೆರೆದಿದ್ದ ಜನರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು.
ಪಿಂಕ್ ಲೈನ್ ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿದ್ದ ಪಿಂಕ್ ಲೈನ್ನ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಗೆ ಮಾರ್ಗದ ವಿವರಗಳನ್ನು ತಿಳಿಸಿದರು. ಮೆಟ್ರೋ ಸಂಪರ್ಕ ವ್ಯವಸ್ಥೆ ಹಾಗೂ ಯೋಜನೆಯ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಪ್ರಧಾನಿ ಮೋದಿ ಅವರು ಮೆಟ್ರೋ ರೈಲಿನಲ್ಲಿ ಸಂಚಾರ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಮಾದರಿಯ ಅನುಷ್ಠಾನದಿಂದ ಆಗುವ ಅನುಕೂಲಗಳು ಹಾಗೂ ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಸಿಎಂ ಪ್ರಧಾನಿಗೆ ವಿವರಿಸಿದರು.
ಇನ್ನು ಐಐಎಂಬಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಉಡುಗೊರೆಯಾಗಿ ನೀಡಿದರು.
ಪಿಂಕ್ ಲೈನ್ ಉದ್ಘಾಟನೆ, ಮೆಟ್ರೋ ಪ್ರಯಾಣ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತ ಚರ್ಚೆಯ ಮೂಲಕ ಪ್ರಧಾನಿ ಮೋದಿ ಅವರ ಬೆಂಗಳೂರು ಭೇಟಿಯ ಕಾರ್ಯಕ್ರಮಗಳು ಗಮನ ಸೆಳೆದವು.










