ದಾವಣಗೆರೆ: ವಚನಾನಂದ ಸ್ವಾಮೀಜಿ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್ಪಿ ಹೆಚ್.ಟಿ. ಶೇಖರ್ ತಿಳಿಸಿದ್ದಾರೆ.
ಬಾಲಕನ ತಾಯಿ ನೀಡಿದ ದೂರಿನ ಆಧಾರದಲ್ಲಿ ವಚನಾನಂದ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾಲಕನ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ನೊಂದ ಬಾಲಕನ ಹೇಳಿಕೆ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ಶೂನ್ಯ ಎಫ್ಐಆರ್ ದಾಖಲಾಗಿತ್ತು. ಬಳಿಕ ಘಟನೆ ನಡೆದಿದೆ ಎನ್ನಲಾದ ಸ್ಥಳದ ವ್ಯಾಪ್ತಿಗೆ ಅನುಗುಣವಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.
ಇದೇ ವೇಳೆ ಹರ ಮಠದ ವಿಚಾರವಾಗಿ ಲೆಕ್ಕ ಕೇಳುವ ಮತ್ತು ಲೆಕ್ಕ ಕೊಡುವ ಕಾರ್ಯಕ್ರಮದ ಹಿನ್ನೆಲೆ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎರಡು ಗುಂಪುಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಮಠದಲ್ಲಿ ಪೂಜೆ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮೇ 31ರವರೆಗೆ ಈ ಆದೇಶ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆಗೆ ವಚನಾನಂದ ಸ್ವಾಮೀಜಿ ಇಂದು ಹರಿಹರ ಗ್ರಾಮಾಂತರ ಠಾಣೆಗೆ ಹಾಜರಾಗಿದ್ದಾರೆ. ಪೊಲೀಸರು ಅವರಿಂದ ಹೇಳಿಕೆ ಪಡೆದು ಮುಂದಿನ ತನಿಖೆ ಮುಂದುವರಿಸಲಿದ್ದಾರೆ.
ಪ್ರಕರಣ ದಾಖಲಾಗಿರುವ ಹಿನ್ನೆಲೆ ಸ್ವಾಮೀಜಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದ್ದು, ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.



