ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಾಟದ ದೊಡ್ಡ ಜಾಲವೊಂದು ಪೊಲೀಸರ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಕುರಗೋಡು ಪೊಲೀಸರು ನಡೆಸಿದ ದಾಳಿಯಲ್ಲಿ 5.52 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಪಡಿತರ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ, ಆರೋಪಿಗಳು ಮೊದಲು ಲೇಔಟ್ ಪ್ರದೇಶದಲ್ಲಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಬಳಿಕ ಲಾರಿಗೆ ತುಂಬಿ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.
ದಂಧೆಯಲ್ಲಿ ಭಾಗಿಯಾಗಿರುವ ಯರ್ರಿಸ್ವಾಮಿ ಮತ್ತು ಉಮಾಶಂಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಅಕ್ರಮ ಪಡಿತರ ವಸ್ತುಗಳ ಸಾಗಾಟ ಮತ್ತು ಕಾಳಬಜಾರ್ ವಿರುದ್ಧ ಜಿಲ್ಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



