ಕೋಲಾರ: ಜಿಲ್ಲೆಯ ಕೆಜಿಎಫ್ ಹಾಗೂ ಬಂಗಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಗೆ ಐದು ಸಬ್-ಇನ್ಸ್‌ಪೆಕ್ಟರ್‌ಗಳು ಹಾಗೂ ಐದು ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ರೌಡಿಶೀಟರ್ ಮನೆಗೆ ಪ್ರತ್ಯೇಕ ತಂಡವನ್ನು ನಿಯೋಜಿಸಲಾಗಿತ್ತು. ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ.
ಶೋಧದ ವೇಳೆ ಇಬ್ಬರು ರೌಡಿಶೀಟರ್‌ಗಳ ಮನೆಗಳಲ್ಲಿ ಲಾಂಗ್, ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿವೆ. ಪತ್ತೆಯಾದ ಎಲ್ಲಾ ಆಯುಧಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.



