ನವದೆಹಲಿ: ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಬಲಪ್ರಯೋಗ ಪ್ರಕರಣವನ್ನು ಸ್ವಯಂಪ್ರೇರಿತವಾಗಿ (ಸುವೋ ಮೋಟು) ದಾಖಲಿಸಿಕೊಂಡು ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಪ್ರಕರಣದ ತುರ್ತು ವಿಚಾರಣೆಗೆ ಅವಕಾಶ ನೀಡಲು ನಿರಾಕರಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಕ್ರಮವನ್ನು ಸಾಬೀತುಪಡಿಸಲು ವಿಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ” ಎಂದು ಹೇಳಿದರು.
ಪ್ರತಿಭಟನೆಯ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ವಕೀಲರು ಮನವಿ ಮಾಡಿದಾಗ, “ವಿಡಿಯೋಗಳನ್ನು ನೋಡುವ ಆಸಕ್ತಿ ನಮಗಿಲ್ಲ. ಅದನ್ನು ನೋಡಲು ನಮ್ಮ ಬಳಿ ಸಮಯವೂ ಇಲ್ಲ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠ ಸ್ಪಷ್ಟಪಡಿಸಿತು.
ಇದಕ್ಕೂ ಮೊದಲು ಇದೇ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೂಡ ತುರ್ತು ವಿಚಾರಣೆ ನಡೆಸಲು ನಿರಾಕರಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರಿದ್ದ ಪೀಠ, “ಇಂತಹ ವಿಷಯಗಳಿಗೆ ನ್ಯಾಯಾಲಯವನ್ನು ಎಳೆಯಬೇಡಿ” ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.
ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜುಲೈ 20ರಂದು ‘ಸಂಸದ್ ಚಲೋ’ ಮೆರವಣಿಗೆಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪೊಲೀಸ್ ಬಲಪ್ರಯೋಗವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.



