ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಕಾಡಾನೆ ದಾಳಿಗೆ ಆಡುಗಳನ್ನು ಮೇಯಿಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಬೇಲೂರು ತಾಲೂಕಿನ ಕುಶಾವರ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಚೌಡನಹಳ್ಳಿ ಗ್ರಾಮದ ಜಯಮ್ಮ (48) ಮೃತ ಮಹಿಳೆ.
ಕುಶಾವರ ಗ್ರಾಮದ ಬಳಿ ಸುಮಾರು 17 ಕಾಡಾನೆಗಳು ಬೀಡುಬಿಟ್ಟಿದ್ದು, ಅವುಗಳಲ್ಲಿ ಒಂದು ಒಂಟಿಸಲಗ ಗುಂಪಿನಿಂದ ಬೇರ್ಪಟ್ಟಿತ್ತು. ಈ ವೇಳೆ ಆಡುಗಳನ್ನು ಮೇಯಿಸುತ್ತಿದ್ದ ಜಯಮ್ಮ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ ಒಂಟಿಸಲಗ, ಕಾಲಿನಿಂದ ತುಳಿದು ಕೊಂದಿದೆ. ಬಳಿಕ ಆನೆ ಕುಶಾವರ ಗ್ರಾಮದೊಳಗೆ ಸಂಚರಿಸಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೂ ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿ ಬಾರಿ ಕಾಡಾನೆ ದಾಳಿಯಿಂದ ಸಾವು ಸಂಭವಿಸಿದಾಗ ಜನಪ್ರತಿನಿಧಿಗಳು ಬಂದು ಪರಿಹಾರದ ಭರವಸೆ ನೀಡಿ ಹೋಗುತ್ತಿದ್ದಾರೆ. ಆದರೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಅರಣ್ಯ ಸಚಿವರು ಸ್ಥಳಕ್ಕೆ ಬಂದು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಆರ್ಎಫ್ಒ ಯತೀಶ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಫಿ ಬೆಳೆಗಾರರ ಸಂಘದ ವತಿಯಿಂದ ನವೆಂಬರ್ 16ರಿಂದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಜಯಮ್ಮ ಅವರ ಸಾವಿನ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಂತಿಯುತ ಪ್ರತಿಭಟನೆ ಆರಂಭಿಸಿರುವುದಾಗಿ ಸಂಘದವರು ತಿಳಿಸಿದ್ದಾರೆ.
ಬೇಲೂರು ಭಾಗದ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿಯಿಂದ ಬೆಳೆ ನಾಶವಾಗುತ್ತಿದ್ದು, ಜನರು ಜೀವಭಯದಲ್ಲಿ ಬದುಕುವಂತಾಗಿದೆ. ಜಯಮ್ಮ ಅವರ ಸಾವು ಈ ಸಮಸ್ಯೆಗೆ ಕೊನೆಯಾಗಬೇಕು. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.










