ಬೆಂಗಳೂರು: ಈ ತಿಂಗಳಿನಿಂದಲೇ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪವರ್ ಫೈಟ್ ನಡುವೆಯೇ ಬಜೆಟ್ ಸಭೆಗಳನ್ನು ಯಾರು ನಡೆಸುತ್ತಾರೆ ಎಂಬ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ತಿಂಗಳಿಂದಲೇ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ನಾನೇ ಬಜೆಟ್ ಮಂಡನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹಲವು ಬಾರಿ ಹೇಳಿದ್ದು, ಈ ಹೇಳಿಕೆ ಅದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಗೊಂದಲ ಮುಂದುವರಿದಿರುವ ನಡುವೆಯೇ ಸಿಎಂ ಈ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಜನವರಿ ಮೊದಲ ವಾರದಲ್ಲೇ ನಾಯಕತ್ವ ಬದಲಾವಣೆ ಸಾಧ್ಯತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಶಾಸಕರು ಗಟ್ಟಿಯಾಗಿ ಹೇಳುತ್ತಿದ್ದರು. ಬಜೆಟ್ ಮಂಡನೆಗೂ ಮುನ್ನವೇ ಬದಲಾವಣೆ ಆಗಬಹುದು ಎಂಬ ಚರ್ಚೆಗಳು ಡಿಕೆಶಿ ಆಪ್ತ ವಲಯದಿಂದ ಕೇಳಿ ಬರುತ್ತಿದ್ದವು.
ಆದರೆ, ಸಿಎಂ ಸಿದ್ದರಾಮಯ್ಯ ಮೊದಲಿನಿಂದಲೂ ನಾನೇ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳುತ್ತಲೇ ಬಂದಿದ್ದು, ಇದೀಗ ಬಜೆಟ್ ಪೂರ್ವಭಾವಿ ಸಭೆಗಳ ಘೋಷಣೆಯ ಮೂಲಕ ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.



