ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ : ಗೋವಿಂದರೆಡ್ಡಿ

0
Preliminary meeting on Kannada Rajyotsava celebrations
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನದಂದು ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಅಂದು ಬೆಳಿಗ್ಗೆ 7.30 ಗಂಟೆಗೆ ಗದಗ-ಬೆಟಗೇರಿ ನಗರಸಭೆ ಪದವಿಪೂರ್ವ ಕಾಲೇಜು ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆ.9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು. ನಂತರ ಪೊಲೀಸ್ ಪಡೆ, ಹೋಮ್‌ಗಾರ್ಡ್, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ. ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು.

ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೆಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಿರ್ಮಲಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪಾಟೀಲ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

 


Spread the love

LEAVE A REPLY

Please enter your comment!
Please enter your name here