ವಿಜಯಸಾಕ್ಷಿ ಸುದ್ದಿ, ಧಾರವಾಡ : ಜೂನ್ 14ರಂದು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಜರುಗಲಿದ್ದು, ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಏಳು ತಾಲೂಕುಗಳ 7469 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಅವರು ಮಂಗಳವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2 ಕುರಿತು ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು.
ಶಾಲಾ ಮುಖ್ಯಸ್ಥರು, ಹಾಗೂ ಪರೀಕ್ಷಾ ಕೇಂದ್ರಗಳ ನೋಡಲ್ ಅಧಿಕಾರಿಗಳು ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ, ಪೊಲೀಸ್ ಕಾವಲು ಮತ್ತು ಶೌಚಾಲಯ, ಕುಡಿಯುವ ನೀರು ಸೇರಿದಂತೆ ಎಲ್ಲ ಸೌಕರ್ಯಗಳು ವ್ಯವಸ್ಥಿತವಾಗಿ ಇರುವಂತೆ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಜಿಲ್ಲೆಯ ಕೆಲವು ಶಾಲೆಗಳು ಶೇ. 100ರಷ್ಟು ಗುರಿ ಸಾಧನೆ ಮಾಡಿ, ಉತ್ಯುತ್ತಮ ಫಲಿತಾಂಶ ನೀಡಿವೆ. ಇಂತಹ ಶಾಲೆಗಳ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸಕ್ತ ವರ್ಷ ಧಾರವಾಡ ಜಿಲ್ಲೆ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬರಬೇಕು. ಈ ಕುರಿತು ಶಿಕ್ಷಣ ಇಲಾಖೆಯೊಂದಿಗೆ ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಾಗುವುದು. ಜಿಲ್ಲಾಡಳಿತವು ಶಿಕ್ಷಣ ಇಲಾಖೆ ಬೆಂಬಲಕ್ಕಿದ್ದು, ಅಗತ್ಯ ಬೇಡಿಕೆಗಳನ್ನು ಪೂರೈಸಲಾಗುವುದು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿಷಯ ಪರಿವೀಕ್ಷಕರು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಈಗಿನಿಂದಲೇ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೊಡಲ್ ಅಧಿಕಾರಿ ಡಾ. ರವಿಕುಮಾರ ಆರ್.ಬಾರಾಟಕ್ಕೆ ವಂದಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಶಾಲಾ ಮುಖ್ಯೋಪಾಧ್ಯಾಯರು, ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1ರಂತೆ ಪರೀಕ್ಷೆ-2ನ್ನು ಸಹ ಅತ್ಯಂತ ಶಿಸ್ತುಬದ್ಧವಾಗಿ ನಡೆಸಬೇಕು.
ಯಾವುದೇ ರೀತಿಯ ಗೊಂದಲ, ನಕಲು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.