ವಿಜಯಸಾಕ್ಷಿ ಸುದ್ದಿ, ಗದಗ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಆ.20ರಂದು ನಗರದ ಕನಕ ಭವನದಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಡಿ. ದೇವರಾಜ ಅರಸು ಅವರ ಜೀವನ, ಆಡಳಿತ ಹಾಗೂ ಸಾಮಾಜಿಕ ಸುಧಾರಣೆಗಳ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು. ಒಟ್ಟಾರೆ ಜನ್ಮದಿನಾಚರಣೆ ಕಾರ್ಯಕ್ರಮವು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ತುಂಬರಮಟ್ಟಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ, ಅರಸು ಜಯಂತಿ ನಿಮಿತ್ತ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಚನ್ನಮ್ಮ ವೃತ್ತದಿಂದ ಡಿ. ದೇವರಾಜ ಅರಸು ಅವರ ಭಾವಚಿತ್ರದೊಂದಿಗೆ ಮೆರವಣಿಗೆ ಹೊರಟು ಕನಕ ಭವನಕ್ಕೆ ತಲುಪಲಿದೆ ಎಂದು ಹೇಳಿದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



