ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ, ಬರ ಪರಿಸ್ಥಿತಿ ಎದುರಾದಲ್ಲಿ ಅಧಿಕಾರಿಗಳು ಸಮನ್ವಯದೊಂದಿಗೆ ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯ ಶಿಂಗಟಾಲೂರ ಬ್ಯಾರೇಜ್ ಹತ್ತಿರ ರೈತರು ಪಂಪ್‌ಸೆಟ್ ಮೂಲಕ ನೀರೆತ್ತುವುದನ್ನು ನಿರ್ಬಂಧಿಸಬೇಕು. ಕುಡಿಯುವ ನೀರು ಸರಬರಾಜಿಗಾಗಿ ಕಾರ್ಯನಿರ್ವಹಿಸುತ್ತಿರುವ ಪಂಪ್‌ಸೆಟ್‌ಗಳ ಸ್ಥಿತಿಗತಿಗಳನ್ನು ಅವಲೋಕಿಸಿ ವರದಿ ಸಲ್ಲಿಸಲು ಗ್ರಾಮೀಣ ನೀರು ಸರಬರಾಜು ಹಾಗೂ ಪಿಆರ್‌ಇಡಿ ಕಾರ್ಯಪಾಲಕ ಅಭಿಯಂತರರಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಪಂಪ್‌ಸೆಟ್‌ಗಳು ಸುಸ್ಥಿತಿಯಲ್ಲಿರದಿದ್ದಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಹೆಚ್ಚುವರಿ ಪಂಪ್‌ಸೆಟ್ ಇಟ್ಟುಕೊಳ್ಳಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ತಾಲೂಕಾವಾರು ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ತಯಾರಿಸಿ ಸಲ್ಲಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ವಹಿಸಬೇಕು. ಜಲಾಶಯಗಳಿಂದ ನೀರು ಬಿಡುವ ಮುನ್ನ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ನಾಗರಾಜ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ ಮೇವಿನ ಕೊರತೆಯಿಲ್ಲ. ಹಾಗೇನಾದರೂ ಮೇವಿನ ಕೊರತೆ ಕಂಡುಬಂದಲ್ಲಿ ಕಳೆದ ವರ್ಷದ ಮೇವಿನ ದಾಸ್ತಾನನ್ನು ಬಳಸಲಾಗುವುದು ಎಂದು ಮಾಹಿತಿ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಇರುವುದರಿಂದ ಹೀಟ್‌ವೇವ್‌ನಿಂದ ಬಳಲುತ್ತಿರುವವರಿಗೆ ಜಿಮ್ಸ್ನಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಲಾಗಿದೆ. ಹೀಟ್‌ವೇವ್‌ನಿಂದ ಸಂರಕ್ಷಿಸಿಕೊಳ್ಳಲು ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರು, ತಹಸೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳದಲ್ಲಿದ್ದು ನೀರಿನ ಪರಿಸ್ಥಿತಿ ಅವಲೋಕಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅಲ್ಲದೇ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ನಿಯಮಿತವಾಗಿ ಶುಚಿಗೊಳಿಸಬೇಕು. ತಾಲೂಕುವಾರು ವಿಪತ್ತು ನಿರ್ವಹಣಾ ಸಭೆಗಳನ್ನು ಏರ್ಪಡಿಸಿ ಚರ್ಚಿಸಬೇಕು ಎಂದು ಸೂಚಿಸಿದರು.