ಬೆಂಗಳೂರು: ಕರ್ನಾಟಕದಲ್ಲಿ ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯ ವಿಚಾರವಾಗಿ ಮತ್ತೊಂದು ರಾಜಕೀಯ ವಿವಾದ ಮುನ್ನೆಲೆಗೆ ಬಂದಿದೆ. ತಮ್ಮ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಆದಾಯ ತೆರಿಗೆ ಇಲಾಖೆ (IT) ಮತ್ತು ಜಾರಿ ನಿರ್ದೇಶನಾಲಯವನ್ನು (ED) ಬಳಸಿಕೊಳ್ಳುವಂತೆ ಕೇಂದ್ರ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ವಿಚಾರವಾಗಿ ದೆಹಲಿಯ ಅಧಿಕಾರದ ವಲಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿಯೂ ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ.
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ತಮ್ಮ ಹೆಸರನ್ನು ಅನಗತ್ಯವಾಗಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ಪ್ರಕರಣದ ಆರೋಪಿಗಳ ಮೇಲೆ ಜಾರಿ ನಿರ್ದೇಶನಾಲಯದ ಮೂಲಕ ಒತ್ತಡ ಹೇರಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಇದೇ ವೇಳೆ ಕೇಂದ್ರ ಸಚಿವರೊಬ್ಬರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಅವರು, ಈ ಬೆಳವಣಿಗೆಗಳ ಹಿಂದೆ ಆರ್ಎಸ್ಎಸ್ನ ಇತ್ತೀಚಿನ ‘ಗ್ರೂಪ್-ಡಿ’ ನೇಮಕಾತಿಯಂತಿರುವ ವ್ಯಕ್ತಿಯೊಬ್ಬರು ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ತಮ್ಮನ್ನು ತಾವು ಅತ್ಯಂತ ಕಠಿಣ ಪರಿಶ್ರಮಿ ಎಂದು ಬಿಂಬಿಸಿಕೊಳ್ಳುವ ಕೇಂದ್ರ ಸಚಿವರು ರಾಜಕೀಯವಾಗಿ ತಾವೊಬ್ಬರೇ ಸಂಕಷ್ಟಕ್ಕೆ ಸಿಲುಕಲು ಸಿದ್ಧರಿಲ್ಲ. ತಮ್ಮ ಹತಾಶೆಯಿಂದಾಗಿ ಮೈತ್ರಿಕೂಟದ ಪಾಲುದಾರರನ್ನೂ ಸಂಕಷ್ಟಕ್ಕೆ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.







