ನವದೆಹಲಿ: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಮತ್ತು ಇಂಧನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಸಂಸ್ಥೆ ನಯಾರಾ ಎನರ್ಜಿ (Nayara Energy) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ.
ಶನಿವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ನಯಾರಾ ಎನರ್ಜಿಯ ಇಂಧನ ಕೇಂದ್ರಗಳಲ್ಲಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹5 ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹3ರಷ್ಟು ಹೆಚ್ಚಿಸಲಾಗಿದೆ. ದೇಶಾದ್ಯಂತ ಕಂಪನಿಯ 7,000ಕ್ಕೂ ಹೆಚ್ಚು ಇಂಧನ ಕೇಂದ್ರಗಳಲ್ಲಿ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳ ನಿರಂತರ ಏರಿಕೆಯಿಂದಾಗಿ ಚಿಲ್ಲರೆ ಮಾರಾಟದ ಬೆಲೆ ಮತ್ತು ಹೆಚ್ಚಿನ ಖರೀದಿ ವೆಚ್ಚದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಬೆಲೆ ಪರಿಷ್ಕರಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ವರ್ಷ ನಯಾರಾ ಎನರ್ಜಿ ಕೈಗೊಂಡಿರುವ ಎರಡನೇ ಬೆಲೆ ಪರಿಷ್ಕರಣೆ ಇದಾಗಿದೆ. ಇದಕ್ಕೂ ಮುನ್ನ ಮಾರ್ಚ್‌ನಲ್ಲಿ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಸಂದರ್ಭದಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇದೇ ಪ್ರಮಾಣದಲ್ಲಿ ಹೆಚ್ಚಿಸಿತ್ತು. ಬಳಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈನಲ್ಲಿ ಆ ಬೆಲೆ ಏರಿಕೆಯನ್ನು ಹಿಂಪಡೆಯಲಾಗಿತ್ತು.
ಇದೇ ವೇಳೆ, ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದ್ದರೂ, ದೇಶದ 1.04 ಲಕ್ಷಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ಪೈಕಿ ಶೇ.90ಕ್ಕೂ ಹೆಚ್ಚಿನ ಪಾಲನ್ನು ಹೊಂದಿರುವ ಸರ್ಕಾರಿ ಸ್ವಾಮ್ಯದ ಇಂಧನ ಮಾರಾಟ ಕಂಪನಿಗಳು ಚಿಲ್ಲರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಬಹುತೇಕ ಸ್ಥಿರವಾಗಿ ಕಾಯ್ದುಕೊಂಡಿವೆ.
ಈ ಹಿನ್ನೆಲೆಯಲ್ಲಿ ನಯಾರಾ ಎನರ್ಜಿ ಕೈಗೊಂಡಿರುವ ಬೆಲೆ ಏರಿಕೆ ಗಮನ ಸೆಳೆದಿದೆ. ಈ ವಾರದ ಆರಂಭದಲ್ಲಿಯೇ ಖಾಸಗಿ ಇಂಧನ ಮಾರಾಟ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವನ್ನು ನಿರ್ಬಂಧಿಸಬಾರದು ಎಂದು ಸರ್ಕಾರ ಸೂಚಿಸಿತ್ತು.



