ಪ್ರಯಾಗರಾಜ್: ಮಹಾ ಕುಂಭಮೇಳದ ಸಂಗಮ್ ಪ್ರದೇಶದಲ್ಲಿ ಕಾಲ್ತುಳಿತ ಸಂಭವಿಸಿ ಪ್ರಾಣಹಾನಿ ಸಂಭವಿಸಿವೆ. ಈ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಆದರೆ ಅಂಕಿಅಂಶಗಳು ಇನ್ನೂ ದೃಢಪಟ್ಟಿಲ್ಲ. ಇನ್ನೂ ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.
ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೂ ಮಾತನಾಡಿದ್ದೇನೆ. ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆಂದು ತಿಳಿಸಿದ್ದಾರೆ.
ಮೌನಿ ಅಮಾವಾಸ್ಯೆ ಹಿನ್ನೆಲೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ಸಲುವಾಗಿ ಭಕ್ತಸಾಗರವೇ ಹರಿದು ಬಂದಿತ್ತು. ಈ ವೇಳೆ ಕಾಲ್ತುಳಿತ ಉಂಟಾಗಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.