ಸಾರ್ವಜನಿಕರ ಸುರಕ್ಷತೆಗೆ ಪ್ರಥಮಾದ್ಯತೆ ನೀಡಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ ಸುರಕ್ಷತೆಗೆ ಪ್ರಥಮಾದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮುಂಗಾರು ಹಂಗಾಮು ಪರಿಸ್ಥಿತಿ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅತಿವೃಷ್ಟಿಯಿಂದ ಉಂಟಾಗುವ ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿ ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕ ಪ್ರಮಾಣದ ಮಳೆ ಸುರಿದಲ್ಲಿ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು. ಪ್ರವಾಹ ಸಂಭವಿಸಬಹುದಾದ 43 ಗ್ರಾಮಗಳನ್ನು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ ಆ ಭಾಗದ ಅಧಿಕಾರಿಗಳು ಜೀವ ಹಾನಿ ತಡೆಗೆ ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಮಾತನಾಡಿ, ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ತಾಲೂಕು ಮಟ್ಟದಲ್ಲಿಯೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಿಯಮಿತವಾಗಿ ಜರುಗಿಸಿ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದರು.

ಉಪವಿಭಾಗಾಧಿಕಾರಿ ಗಂಗಪ್ಪ ಎಂ ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ ಸುರಿದ ಮಳೆಯಿಂದ ಯಾವುದೇ ಮಾನವ ಜೀವ ಹಾನಿ ಹಾಗೂ ಜಾನುವಾರು ಹಾನಿಯಾಗಿರುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್ ಮಾತನಾಡಿ, ಜಿಲ್ಲೆಯಲ್ಲಿ 1-1-2025 ರಿಂದ 25-8-2025ರವರೆಗೆ 326 ಮಿ.ಮೀ ವಾಡಿಕೆ ಮಳೆ ಇದ್ದು 477 ಮಿ.ಮೀ ಮಳೆ ಆಗಿರುತ್ತದೆ. ಜಿಲ್ಲೆಯಲ್ಲಿ ಶೇ.46 ಹೆಚ್ಚುವರಿ ಮಳೆಯಾಗಿದೆ ಎಂದು ಸಭೆಗೆ ತಿಳಿಸಿದರು.


Spread the love

LEAVE A REPLY

Please enter your comment!
Please enter your name here